‘ಕೇಂದ್ರ ಸಾಲ ಮನ್ನಾ ಮಾಡಿದರೆ ನಾವೂ ಮನ್ನಾ ಮಾಡ್ತೇವೆ’

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-Session--01

ಬೆಂಗಳೂರು, ಮಾ.28– ಕೇಂದ್ರ ಸರ್ಕಾರ ರಾಷ್ಟ್ರೀಕೃತ ಮತ್ತು ವಾಣಿಜ್ಯ ಬ್ಯಾಂಕ್‍ಗಳಲ್ಲಿ ರೈತರು ಪಡೆದಿರುವ ಸಾಲ ಮನ್ನಾ ಮಾಡಿದರೆ ರಾಜ್ಯ ಸರ್ಕಾರ ಸಹಕಾರಿ ಬ್ಯಾಂಕ್‍ಗಳ ಸಾಲ ಮನ್ನಾ ಮಾಡಲು ಸಿದ್ಧವಿದೆ. ಇದುವರೆಗೂ 2,881 ಕೋಟಿ ರೂ. ಕೃಷಿ ಸಾಲದ ಮೇಲಿನ ಬಡ್ಡಿ ಸಹಾಯಧನವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ತಿಳಿಸಿದರು. 2017-18ನೆ ಸಾಲಿನ ಆಯವ್ಯಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಅವರು, ರೈತರ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರ ಮುಕ್ತ ಮನಸ್ಸು ಹೊಂದಿದೆ. ಆದರೆ ಕೇಂದ್ರ ಸರ್ಕರ ಶೇ.50ರಷ್ಟು ಭರಿಸಬೇಕಿದೆ ಎಂದರು.

ಕೃಷಿ ಸಾಲದ ಮೇಲಿನ ಬಡ್ಡಿ ಸಹಾಯಧನವನ್ನು ಕೇಂದ್ರ ಸರ್ಕಾರ ಶೇ.3ರಷ್ಟು ಹಾಗೂ ರಾಜ್ಯ ಸರ್ಕಾರ ಶೇ.7ರಷ್ಟು ಸಹಾಯಧನ ನೀಡುತ್ತಿದೆ. ಬಿಜೆಪಿ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ 1,331 ಕೋಟಿ ರೂ. ಕೃಷಿ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡಲಾಗಿದೆ. ಅಲ್ಲದೆ, ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಒದಗಿಸಲು 10 ಸಾವಿರ ಕೋಟಿ ರೂ. ನೀಡಲಾಗುತ್ತಿದೆ.   ಮಾರ್ಚ್ ಅಂತ್ಯದವರೆಗೆ ರೈತರ ಸಾಲದ ಅಸಲು ಪಾವತಿಗೆ ಗಡುವು ನೀಡಿದ್ದು ಅದನ್ನು ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ನೀಡುವ ಪರಿಹಾರ ಧನವನ್ನು ಒಂದು ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಅದೇ ರೀತಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮಾಸಿಕ 2 ಸಾವಿರ ರೂ. ಪಿಂಚಣಿ ನೀಡಲಾಗುತ್ತಿದೆ. ಅಸಲು ಪಾವತಿಸಿದ ರೈತರ ಮೇಲಿನ ಬಡ್ಡಿ ಪಾವತಿಗೆ 125 ಕೋಟಿ ರೂ. ನೀಡಲಾಗಿದೆ. ಈ ರೀತಿ ನಮ್ಮ ಸರ್ಕಾರ ರೈತರ ಪರವಾಗಿದೆ ಎಂದು ವಿವರಿಸಿದರು.  ಇನ್ನೂ ಹೆಚ್ಚಿನ ರೀತಿಯಲ್ಲಿ ರೈತರಿಗೆ ನೆರವಾಗುವ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿದ್ದು, ರೈತರ ಬಗ್ಗೆ ಶಾಸಕರು ನೀಡುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದ ಅವರು, ಕೇಂದ್ರ ಸಚಿವ ಅರುಣ್‍ಜೇಟ್ಲಿ ಅವರು ಉತ್ತರ ಪ್ರದೇಶಕ್ಕೆ ಮಾತ್ರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಾರೆ. ಕರ್ನಾಟಕ ರೈತರ ಬಗ್ಗೆ ಅವರ ನಿಲುವೇನು ಎಂದು ಪ್ರಶ್ನಿಸಿದರು.

ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿ ಪಾವತಿಸಿದ್ದು 940 ಕೋಟಿ ರೂ ಮಾತ್ರ. ನಮ್ಮ ಸರ್ಕಾರ 2,359 ಕೋಟಿ ರೂ. ಪಾವತಿಸಿದೆ. ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಸಹಕಾರಿ ಬ್ಯಾಂಕ್‍ಗಳ ಮೂಲಕ ರೈತರಿಗೆ 11 ಸಾವಿರ ಕೋಟಿ ರೂ. ಸಾಲ ನೀಡಲಾಗಿದೆ. ಇದು ಶೇ.20ರಷ್ಟು ಮಾತ್ರ. ಆದರೆ ಶೇ.80ರಷ್ಟು ರೈತರು ರಾಷ್ಟ್ರೀಕೃತ ಹಾಗೂ ವಾಣಿಜ್ಯ ಬ್ಯಾಂಕ್‍ಗಳಲ್ಲಿ ಸಾಲ ಮಾಡಿದ್ದಾರೆ. ಕೇಂದ್ರ ಸರ್ಕಾರವು ಸಾಲ ಮನ್ನಾದ ಅರ್ಧ ಹೊರೆ ಭರಿಸಬೇಕೆಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ಹಣ ಮುದ್ರಿಸಲು ಅಧಿಕಾರ ನೀಡಿಲ್ಲ. ಎಲ್ಲಿಂದ ಹಣ ತರಬೇಕು ಎಂದು ಸದನದಲ್ಲಿ ಪ್ರಶ್ನಿಸಿದ್ದರು. ಈಗ ಸದನದ ಒಳಗೆ ಮತ್ತು ಹೊರಗೆ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಹೋರಾಟ ಮಾಡುವ ಮೂಲಕ ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ ಎಂದು ಹೇಳಿದರು.  ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರ ನಡುವೆ ಕೆಲಕಾಲ ಏರುಧ್ವನಿಯಲ್ಲಿ ವಾಗ್ವಾದ, ಮಾತಿನ ಚಕಮಕಿ ನಡೆದು ಸದನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉತ್ತರ ಪ್ರದೇಶದಲ್ಲಿ ಸಾಲ ಮನ್ನಾ ಮಾಡಿದರೆ ನಾವು ಸಾಲ ಮನ್ನಾ ಮಾಡುತ್ತೇವೆ ಎಂದು ಹೇಳಿ ಎಂದು ಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿದರು. ಏಕೆಂದರೆ ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ರೈತರ ಸಾಲ ಮನ್ನಾವನ್ನು ಆಯಾ ರಾಜ್ಯಗಳೇ ಮಾಡಿಕೊಳ್ಳಬೇಕು ಎಂದು ಹೇಳಿದೆ ಎಂದರು.  ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲವಿದ್ದು ಸುಮಾರು 2 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಪ ಹೇಳುವ ಬದಲು ರೈತರ ಸಾಲ ಮನ್ನಾ ಮಾಡಿ. ಪಲಾಯನ ಮಾಡಬೇಡಿ. ಈಗಾಗಲೇ ಬ್ಯಾಂಕ್‍ಗಳು ಸಾಲ ಮರುಪಾವತಿಸುವಂತೆ ರೈತರಿಗೆ ನೋಟೀಸ್ ನೀಡುತ್ತಿವೆ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin