ಕೊನೆ ಘಳಿಗೆಯಲ್ಲಿ ರಾಹುಲ್‍ಗಾಂಧಿ-ಡ್ಯಾನಿಷ್ ಆಲಿ ಭೇಟಿ ರದ್ದು

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮಾ.13-ಕರ್ನಾಟಕದಲ್ಲಿನ ಸೀಟು ಹಂಚಿಕೆ ಸಂಬಂಧ ನಡೆಯಬೇಕಿದ್ದ ಜೆಡಿಎಸ್ ರಾಷ್ಟ್ರೀಯ ಮಹಾಪ್ರಧಾನಕಾರ್ಯದರ್ಶಿ ಡ್ಯಾನಿಷ್ ಆಲಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರ ಭೇಟಿ ಕೊನೆ ಘಳಿಗೆಯಲ್ಲಿರದ್ದಾಗಿದೆ.

ಇಂದು ಬೆಳಗ್ಗೆ ಡ್ಯಾನಿಷ್ ಆಲಿ, ರಾಹುಲ್‍ಗಾಂಧಿಯವರನ್ನು ಭೇಟಿ ಮಾಡಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಉಭಯ ಪಕ್ಷಗಳ ನಡುವಿನ ಸೀಟು ಹಂಚಿಕೆ ಕುರಿತಂತೆ ಮಾತುಕತೆ ನಡೆಸಬೇಕಾಗಿತ್ತು. ಆದರೆ ರಾಹುಲ್‍ಗಾಂಧಿಯವರು ತಮಿಳುನಾಡು ಪ್ರವಾಸ ಕೈಗೊಂಡಿರುವುದರಿಂದ ಉಭಯ ನಾಯಕರ ನಡುವಿನ ಭೇಟಿ ರದ್ದಾಗಿದೆ.

ರಾಹುಲ್‍ಗಾಂಧಿಯವರು ಪ್ರವಾಸ ಮುಗಿಸಿ ನವದೆಹಲಿಗೆ ಮರಳಿದ ನಂತರ ಮತ್ತೊಮ್ಮೆ ಸೀಟು ಹಂಚಿಕೆ ಕುರಿತಂತೆ ಮಾತುಕತೆ ನಡೆಸಲಾಗುತ್ತದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯನ್ನು ಎದುರಿಸಿದರೆ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಬಹುದೆಂಬ ಲೆಕ್ಕಾಚಾರ ಹಾಕಲಾಗಿದ್ದು, ಚುನಾವಣಾ ಪೂರ್ವ ಮೈತ್ರಿ ಕುರಿತಂತೆ ಉಭಯ ಪಕ್ಷಗಳ ನಾಯಕರ ನಡುವೆ ಈಗಾಗಲೇ ಎರಡು ಮೂರು ಸುತ್ತಿನ ಮಾತುಕತೆಗಳು ನಡೆದಿವೆ. ಆದರೂ ಸೀಟು ಹಂಚಿಕೆ ಅಂತಿಮಗೊಂಡಿಲ್ಲ.

ಜೆಡಿಎಸ್ ಕನಿಷ್ಠ 10 ಕ್ಷೇತ್ರಗಳನ್ನು ಬಿಟ್ಟು ಕೊಡುವಂತೆ ಬೇಡಿಕೆ ಇಟ್ಟಿದೆ. ಆದರೆ ಕಾಂಗ್ರೆಸ್ ಹಾಲಿ ಸಂಸದರಿರುವ ಕ್ಷೇತ್ರಗಳನ್ನು ಬಿಟ್ಟುಕೊಡಲು ಸಿದ್ಧವಿಲ್ಲ. ಅಲ್ಲದೆ, 6 ರಿಂದ 8 ಕ್ಷೇತ್ರಗಳನ್ನಷ್ಟೇ ಜೆಡಿಎಸ್‍ಗೆ ಬಿಟ್ಟುಕೊಡಲು ಮುಂದಾಗಿದೆ.

ಮೈಸೂರು ಕ್ಷೇತ್ರ ಬಿಟ್ಟುಕೊಡುವಂತೆ ಜೆಡಿಎಸ್ ಪಟ್ಟು ಹಿಡಿದಿದ್ದು, ಉಭಯ ಪಕ್ಷಗಳ ನಡುವೆ ಈ ಕ್ಷೇತ್ರದ ಬಗ್ಗೆ ಇನ್ನೂ ಒಮ್ಮತ ಮೂಡಿಲ್ಲ. ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿರುವುದರಿಂದ ತುರ್ತಾಗಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಡ್ಯಾನಿಷ್ ಆಲಿ, ರಾಹುಲ್‍ಗಾಂಧಿಯವರನ್ನು ಭೇಟಿಯಾಗಲಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin