ಗಲಾಟೆ, ಕಲ್ಲು ತೂರಾಟ, ನಿಷೇಧಾಜ್ಞೆ ನಡುವೆಯೇ ಟಿಪ್ಪು ಜಯಂತಿ ಆಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

Tipu-Jayanti--022

ಬೆಂಗಳೂರು, ನ.10-ಟಿಪ್ಪು ಜಯಂತಿ ಆಚರಣೆಗೆ ವ್ಯಾಪಕ ಕಟ್ಟೆಚ್ಚರ, ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಅಲ್ಲಲ್ಲಿ ಪ್ರತಿಭಟನೆ, ಸಣ್ಣಪುಟ್ಟ ಗಲಾಟೆ, ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧೆಡೆ, ವಿವಿಧ ಸಂಘಟನೆಗಳ ಹಲವು ಮುಖಂಡರನ್ನು ಪೊಲೀಸರು ಇಂದು ಬೆಳಗ್ಗೆಯೇ ವಶಕ್ಕೆ ಪಡೆದಿದ್ದಾರೆ. ತುಮಕೂರು, ದಾವಣಗೆರೆ, ಚಿತ್ರದುರ್ಗ ಮುಂತಾದೆಡೆ ಶ್ರೀರಾಮಸೇನೆ, ಭಜರಂಗದಳ, ವಿಶ್ವ ಹಿಂದೂ ಪರಿಷತ್‍ನ ಹಲವು ಕಾರ್ಯಕರ್ತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಗೃಹ ಬಂಧನದಲ್ಲಿರಿಸಲಾಗಿದೆ.

ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಮಡಿಕೇರಿಯಲ್ಲಿ ಬಂದ್ ಆಚರಿಸಿದರೆ, ಶಿವಮೊಗ್ಗ, ಸಾಗರ, ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಬೆಳಗ್ಗೆಯಿಂದಲೇ ಬಂದ್ ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಂಗಡಿ-ಮುಂಗಟ್ಟುಗಳು ತೆರೆದಿರಲಿಲ್ಲ. ಖಾಸಗಿ ಬಸ್‍ಗಳ ಓಡಾಟ ಸ್ಥಗಿತಗೊಂಡಿತ್ತು. 2015ರ ಟಿಪ್ಪು ಜಯಂತಿ ಸಂದರ್ಭದಲ್ಲಿ ಉಂಟಾದ ಕಹಿ ಘಟನೆ ಹಿನ್ನೆಲೆಯಲ್ಲಿ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಎಲ್ಲ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಲಾಗಿತ್ತು. ಭದ್ರತೆ ನಡುವೆಯೂ ಬೆಳಗ್ಗೆ 8 ಗಂಟೆಗೆ ಮಡಿಕೇರಿಯಿಂದ ಕೋಲಗುಂಡಕ್ಕೆ ತೆರಳುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗೆ ಕೆಲ ಕಿಡಿಗೇಡಿಗಳು ಕಲ್ಲು ತೂರಿದ ಪರಿಣಾಮ ಬಸ್‍ನ ಗಾಜು ಪುಡಿಪುಡಿಯಾಗಿದೆ.
ನಿಷೇಧಾಜ್ಞೆ ನಡುವೆ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ ಮುಖಂಡ ಕೆ.ಜೆ.ಬೋಪಯ್ಯ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದರು.

ಕೇರಳ, ಮಡಿಕೇರಿ ರಸ್ತೆ ಮಾರ್ಗಮಧ್ಯದಲ್ಲಿ ಕಿಡಿಗೇಡಿಗಳು ದೊಡ್ಡ ಮರವೊಂದನ್ನು ಕಡಿದು ರಸ್ತೆಗೆ ಉರುಳಿಸಿದ್ದು, ಪೊಲೀಸರು ಅರಣ್ಯಾಧಿಕಾರಿಗಳು ಅದನ್ನು ತೆರವುಗೊಳಿಸಿದ್ದಾರೆ. ಸಾಗರ, ಭದ್ರಾವತಿ, ಹುಬ್ಬಳ್ಳಿ, ಚಿತ್ರದುರ್ಗ ಮುಂತಾದೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಎಲ್ಲ ಜಿಲ್ಲೆಗಳಲ್ಲಿ ಟಿಪ್ಪು ಜಯಂತಿ ಆಚರಣೆ ಸಂಬಂಧ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಯಿತು.
ಟಿಪ್ಪು ಜಯಂತಿ ಪರ ಹಾಗೂ ವಿರೋಧದ ಯಾವುದೇ ಪ್ರತಿಭಟನೆಗಳಿಗೆ ಸರ್ಕಾರ ನಿರ್ಬಂಧ ವಿಧಿಸಿತ್ತು.ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಟಿಪ್ಪು ಜಯಂತಿಗೆ ಸುಮಾರು 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.
ರಾಜ್ಯಾದ್ಯಂತ ಬಿಜೆಪಿ ನಾಯಕರು ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ ನಡೆಸಿದರೆ, ಟಿಪ್ಪು ಜಯಂತಿಗೆ ಶುಭಾಶಯ ಕೋರುವ ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್‍ರೆಡ್ಡಿ ಅವರ ಹೆಸರಿನ ಫ್ಲೆಕ್ಸ್‍ಗಳು ರಾರಾಜಿಸಿ ಆಶ್ಚರ್ಯ ಮೂಡಿಸಿದವು. ದಕ್ಷಿಣ ಕನ್ನಡ ಜಿಲ್ಲೆ ವಿಟ್ಲ ಗ್ರಾಮದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡದಿರುವುದಕ್ಕೆ ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಉತ್ತರ ಕರ್ನಾಟಕ ಭಾಗದಲ್ಲೂ ಹಲವೆಡೆ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತವಾಗಿದೆ. ವಿರೋಧದ ನಡುವೆಯೂ ಟಿಪ್ಪು ಜಯಂತಿ ಆಚರಣೆ ನಡೆಯಿತು.
ಜಯಂತಿ ಹಿನ್ನೆಲೆಯಲ್ಲಿ ವಿಚಾರ ಸಂಕಿರಣ, ಟಿಪ್ಪುವಿನ ಗುಣಗಾನ, ಟಿಪ್ಪುವಿನ ಆಡಳಿತ ವೈಖರಿ, ಅವನ ಆದರ್ಶಗಳನ್ನು ಕೊಂಡಾಡಲಾಯಿತು. ಬೆಂಗಳೂರಿನ ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ನಡೆದ ಟಿಪ್ಪು ಜಯಂತಿಗೆ ಕೋಲ್ಕತ್ತಾದಿಂದ ಟಿಪ್ಪು ವಂಶಸ್ಥರು ಆಗಮಿಸಿದ್ದು, ನಮ್ಮನ್ನು ಸರ್ಕಾರ ಕಡೆಗಣಿಸಿದೆ ಎಂದು ಆರೋಪಿಸಿದ್ದು ಕೇಳಿಬಂತು. ಈ ಹಿಂದೆ ನಡೆದ ಟಿಪ್ಪು ಜಯಂತಿಗೆ ನಮ್ಮನ್ನು ಆಹ್ವಾನಿಸಲಾಗಿತ್ತು. ಆದರೆ, ಈ ಬಾರಿ ನಮ್ಮನ್ನು ಕಡೆಗಣಿಸಲಾಗಿದೆ. ನಾವು 34 ಜನ ಕೋಲ್ಕತ್ತಾದಿಂದ ಬಂದಿದ್ದೆವು. ಮುಖ್ಯಮಂತ್ರಿಗಳನ್ನು ಭೇಟಿ ಮಾಡಬೇಕಿತ್ತು. ಆದರೆ, ಸಾಧ್ಯವಾಗಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.

Facebook Comments

Sri Raghav

Admin