ಗೃಹ ಸಚಿವ ಪರಮೇಶ್ವರ್ ರಾಜಿನಾಮೆಗೆ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

BJP-Women

ಬೆಂಗಳೂರು, ಜ.5- ನಗರದಲ್ಲಿ ಯುವತಿಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮತ್ತು ಲೈಂಗಿಕ ಪ್ರಕರಣಗಳಿಗೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವಾಗಿದ್ದು, ಗೃಹ ಸಚಿವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯಿಸಿದೆ.  ನಗರದ ಆನಂದ್‍ರಾವ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಬಳಿ ಇಂದು ಯುವತಿಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಖಂಡಿಸಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಬೆಂಗಳೂರಿನಲ್ಲಿ ಈ ಘಟನೆ ನಡೆದಿರುವುದು ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಪೊಲೀಸರು ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸಲು ಸರ್ಕಾರ ಅನುವು ಮಾಡಿಕೊಡದೇ ಇರುವುದೇ ಇದಕ್ಕೆ ಕಾರಣ. ಗೃಹ ಸಚಿವ ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಹೊಸ ವರ್ಷಾಚರಣೆ ವೇಳೆ ದುಷ್ಕರ್ಮಿಗಳು ರಾಜಾರೋಷವಾಗಿ ಯುವತಿಯರ ಮೇಲೆ ದೌರ್ಜನ್ಯ ಎಸಗಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿದ್ದಾರೆ. ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವವರೇ ಇಲ್ಲದಂತಾಗಿದೆ. ಗೃಹ ಸಚಿವರು ಹೆಸರಿಗಷ್ಟೇ ಸಚಿವರಾಗಿದ್ದಾರೆ ಎಂದು ಕಿಡಿಕಾರಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾಕರಂದ್ಲಾಜೆ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದ ಜನಸಂಖ್ಯೆಯಲ್ಲಿ ಶೇ.50ರಷ್ಟು ಮಹಿಳೆಯರಿದ್ದಾರೆ. ಚುನಾವಣಾ ಪ್ರತಿನಿಧಿಗಳಾಗಿ ನಾವು ಆರಿಸಿ ಬಂದಿದ್ದೇವೆ. ಆದರೆ, ಮಹಿಳೆಗೆ ಎಷ್ಟು ರಕ್ಷಣೆ ಇದೆ ಎಂಬುದು ಪ್ರಶ್ನೆಯಾಗಿದೆ. ನಮ್ಮ ರಕ್ಷಣೆಗೆ ನಾವೇ ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರುವರ್ಷಗಳು ಕಳೆದಿದೆ. ಮೂರು ವರ್ಷದಲ್ಲಿ ಎಷ್ಟೋ ಲೈಂಗಿಕ ದೌರ್ಜನ್ಯಗಳು ನಡೆದಿವೆ. ಆದರೆ, ಎಷ್ಟು ಕಾಮುಕರಿಗೆ ಶಿಕ್ಷೆಯಾಗಿದೆ ? ನಮ್ಮ ರಾಜ್ಯದಲ್ಲೇ 1500ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. ಯಾವುದೇ ಪ್ರಕರಣದಲ್ಲೂ ಆರೋಪಿಗಳಿಗೆ ಕಾನೂನು ಕ್ರಮ ಜರುಗಿಸಿಲ್ಲ ಎಂದು ಕಿಡಿಕಾರಿದರು. ರಾಜ್ಯದಲ್ಲಿ ಗೃಹ ಸಚಿವರು ಬದಲಾದರೇ ಹೊರತು ಮಹಿಳೆಯರ ಪರಿಸ್ಥಿತಿ ಮಾತ್ರ ಬದಲಾಗಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಿಲ್ಲ. ಎಷ್ಟೋ ಠಾಣೆಗಳ ವ್ಯಾಪ್ತಿಯಲ್ಲಿ ಪ್ರಕರಣಗಳು ನಡೆದರೂ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿಲ್ಲ. ಇದು ಏಕೆಂದು ಅರ್ಥವಾಗುತ್ತಿಲ್ಲ ಎಂದು ದೂರಿದರು.

ಇನ್ನಾದರೂ ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಹೊಸ ವರ್ಷಾಚರಣೆ ವೇಳೆ ಯುವತಿಯರಿಗೆ ಕಿರುಕುಳ ನೀಡಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಶೋಭಾಕರಂದ್ಲಾಜೆ ಒತ್ತಾಯಿಸಿದರು. ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಉಪಾಧ್ಯಕ್ಷೆ ಶಿಲ್ಪಾಗಣೇಶ್, ಪ್ರಧಾನಕಾರ್ಯದರ್ಶಿ ಶೃತಿ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಶಾರದಾ ನಾಯಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭಾರತಿ ಮುಗ್ವಂ, ಉಪಾಧ್ಯಕ್ಷೆ ಭಾರತಿ ಮಲ್ಲಿಕಾರ್ಜುನ್ ಮತ್ತಿತರರಿದ್ದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin