ಜನ,ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ :  ಕರವೇ ಕಾರ್ಯಕರ್ತರು ಕಚೇರಿಗೆ ಮುತ್ತಿಗೆ

ಈ ಸುದ್ದಿಯನ್ನು ಶೇರ್ ಮಾಡಿ

kr-pete

ಕೆ.ಆರ್.ಪೇಟೆ, ಮಾ.2-ತಾಲೂಕಿನಾದ್ಯಂತ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದೆ. ಹಾಗಾಗಿ ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ತುರ್ತು ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ತಾಲೂಕು ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು, ಸಂಚಾಲಕ ಸಿ.ಬಿ.ಚೇತನ್‍ಕುಮಾರ್, ಉಪಾಧ್ಯಕ್ಷ ಮದನ್‍ಗೌಡ, ಪ್ರಧಾನ ಕಾರ್ಯದರ್ಶಿ ಮಡುವಿನಕೋಡಿ ಚೇತನ್ ಮತ್ತಿತರರು ಮಾತನಾಡಿ, ಸರ್ಕಾರವು ಕನಿಷ್ಠ 5ಕೋಟಿ ರೂಗಳನ್ನು ತಾಲೂಕಿನ ಕುಡಿಯುವ ನೀರಿನ ವ್ಯವಸ್ಥೆಗೆ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.ಗ್ರಾಮ ಪಂಚಾಯಿತಿ ಪಿಡಿಒಗಳು ಕುಡಿಯುವ ನೀರಿನ ವಿಚಾರದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಇದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ ಎಂದು ದೂರಿದರು.

14ನೆ ಹಣಕಾಸು ಯೋಜನೆಯ ಅನುದಾನವನ್ನು ಸಂಪೂರ್ಣ ಕುಡಿಯುವ ನೀರಿನ ಯೋಜನೆಗೆ ಬಳಕೆ ಮಾಡಿಕೊಳ್ಳುವಂತೆ ಸರ್ಕಾರವು ಆದೇಶ ನೀಡಿದೆ ಆದರೆ ಕೆಲವು ಗ್ರಾಮ ಪಂಚಾಯಿತಿಗಳು ಬೇರೆ ಬೇರೆ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳುವ ಮೂಲಕ ಕುಡಿಯುವ ನೀರಿಗಾಗಿ ಸರ್ಕಾರದತ್ತ ಮುಖ ಮಾಡಿ ನಿಂತಿದ್ದಾರೆ. ಆದರೆ ಸರ್ಕಾರ ಇದುವರೆಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದರು.ತಾಲೂಕಿನ ಸುಮಾರು 350 ಗ್ರಾಮಗಳಿದ್ದು ಸುಮಾರು 150ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದೆ. ತಾಲೂಕಿನಾದ್ಯಂತ ಸಾವಿರಾರು ಜಾನುವಾರು ನೀರಿನ ತೊಟ್ಟಿಯನ್ನು ನಿರ್ಮಿಸಲಾಗಿದೆ ಆದರೆ ನೀರಿಲ್ಲದೆ ಜಾನುವಾರುಗಳು ಹಾಗೂ ಹಕ್ಕಿ ಪಕ್ಷಿಗಳು ಪರಿತಪಿಸುವ ಸ್ಥಿತಿ ಉಂಟಾಗಿದೆ. ಈ ಬಗ್ಗೆ ಕ್ಷೇತ್ರದ ಶಾಸಕರು ಮುಖ್ಯಮಂತ್ರಿಗಳ ಬಳಿ ತಾಲೂಕಿನ ಸಮಸ್ಯೆಯನ್ನು ಹೇಳಿಕೊಂಡರೂ ಏನೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೇವು ವಿತರಿಸಲು ಮನವಿ: ತಾಲೂಕು ಆಡಳಿತವು ಸಂಗ್ರಹಿಸಿರುವ ಒಣ ಮೇವನ್ನು ಪಟ್ಟಣದ ಪಶು ಆಸ್ಪತ್ರೆಯ ಆವರಣದಲ್ಲಿ ಮೆದೆ ಹಾಕಲಾಗಿದೆ ಆದರೆ ಗ್ರಾಮೀಣ ಪ್ರದೇಶದಲ್ಲಿ ಜಾನುವಾರುಗಳಿಗೆ ಮೇವಿಲ್ಲದೆ ರೈತರು ಕಡಿಮೆ ಬೆಲೆಗೆ ತಮ್ಮ ಜಾನುವಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಹಾಗಾಗಿ ತಕ್ಷಣ ತಾಲೂಕು ಆಡಳಿತವು ರೈತರಿಗೆ ಮೇವು ವಿತರಿಸುವ ಮೂಲಕ ರೈತರು ಕಡಿಮೆ ಬೆಲೆಗೆ ರಾಸುಗಳನ್ನು ಮಾರಾಟ ಮಾಡುವುದನ್ನು ತಡೆಗಟ್ಟಿ ರೈತರನ್ನು ಉಳಿಸಬೇಕೆಂದು ವೇಣು ತಾಲೂಕು ಆಡಳಿತವನ್ನು ಒತ್ತಾಯ ಮಾಡಿದರು.
ಪ್ರತಿಭಟನೆಯ ನಂತರ ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕಿ ಬಿ.ಎನ್.ಗೌರಮ್ಮ ಮನವಿ ಸಲ್ಲಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin