ಜನರಿಗೆ ಸತ್ಯ ಗೊತ್ತಿದೆ, ಬಿಜೆಪಿಯವರು ಸುಳ್ಳು ಆರೋಪಗಳಿಗೆ ಚುನಾವಣೆಯಲ್ಲಿ ಜನರೇ ಉತ್ತರಿಸುತ್ತಾರೆ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiha

ಚಿಕ್ಕಮಗಳೂರು,ಡಿ.8-ನಮ್ಮ ಪಕ್ಷ ಆಡಳಿತಕ್ಕೆ ಬಂದಾಗಿನಿಂದಲೂ ಬಿಜೆಪಿಯವರು ಇಲ್ಲಸಲ್ಲದ ಸುಳ್ಳುಗಳನ್ನು ಸರ್ಕಾರ ಹಾಗೂ ಪಕ್ಷದ ವಿರುದ್ಧ ಹೇಳುತ್ತಿದ್ದಾರೆ. ಆದರೆ ಜನಕ್ಕೆ ಯಾವುದು ಸತ್ಯ, ಯಾವುದು ಸುಳ್ಳು ಎಂಬುದು ಗೊತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನತೆಯೇ ಬಿಜೆಪಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿದರು. ವಿವಿಧ ಕಾರ್ಯಕ್ರಮಗಳ ನಿಮಿತ್ತ ನಗರಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಬಿಜೆಪಿಯವರು ಕಾಂಗ್ರೆಸ್ ಹಾಗೂ ಸರ್ಕಾರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಮುಂದೊಂದು ದಿನ ತಕ್ಕ ಪಾಠ ಕಲಿಯಲಿದ್ದಾರೆ ಎಂದರು.

ಕಪ್ಪತಗುಡ್ಡದ ವಿಚಾರವಾಗಿ ಮಾತನಾಡಿದ ಅವರು, ಇದಕ್ಕೆ ಸಂಬಂಧಿಸಿದಂತೆ ರಾಜ್ಯ ವನ್ಯಜೀವಿ ಮಂಡಳಿ ಜೊತೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನ ವಿಶೇಷ ಭೂಸ್ವಾಧೀನ ಅಧಿಕಾರಿ ಭೀಮಾನಾಯ್ಕ್ ಕಾರಿನ ಚಾಲಕ ರಮೇಶ್ ಆತ್ಮಹತ್ಯೆಗೆ ಪ್ರತಿಕ್ರಿಯಿಸಿದ ಅವರು, ಆತ್ಮಹತ್ಯೆ ಮಾಡಿಕೊಂಡ ರಮೇಶ್ ಅವರ ಸಹೋದರ ದೂರು ದಾಖಲಿಸಿದ್ದು, ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ತನಿಖೆ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಹೇಳಿದರು.
ಜಿಲ್ಲೆಯ ಬರ ನಿರ್ವಹಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಒಟ್ಟು 139 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಈಗಾಗಲೇ ಘೋಷಿಸಲಾಗಿದೆ. ಆದ್ದರಿಂದ ಏಕಕಾಲದಲ್ಲಿ ಎಲ್ಲಾ ತಾಲೂಕುಗಳಿಗೂ ಬರ ಪರಿಹಾರ ನೀಡಿದಾಗ ಈ ಜಿಲ್ಲೆಗೂ ಕೂಡ ಪರಿಹಾರ ನೀಡಲಾಗುವುದು. ಆದರೆ ಪ್ರತ್ಯೇಕವಾಗಿ ಈ ಜಿಲ್ಲೆಗೆ ಬರ ಪರಿಹಾರ ನೀಡಲಾಗುವುದಿಲ್ಲ ಎಂದು ತಿಳಿಸಿದರು.

ಸದ್ಯದಲ್ಲೇ ದೆಹಲಿಗೆ ತೆರಳಿ ರಾಜ್ಯದ ಎಂಪಿಗಳ ಸಭೆ ಕರೆದು ಬರ ಪರಿಸ್ಥಿತಿ ಕುರಿತಂತೆ ಚರ್ಚಿಸಿ ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ನಿವಾರಿಸುವ ಕುರಿತಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್ ಜಿಲ್ಲಾಧಿಕಾರಿ ಬಿ.ಸತ್ಯವತಿ, ಶಾಸಕ ಸಿ.ಟಿ.ರವಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಚೈತ್ರಶ್ರೀ, ನಗರಸಭೆ ಅಧ್ಯಕ್ಷೆ ಕವಿತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin