ಜೆಡಿಎಸ್‍ನ ಎಲ್ಲಾ ಶಾಸಕರು ಒಗ್ಗಟ್ಟಿನಿಂದ ಇರುವಂತೆ ಸಿಎಂ ಕುಮಾರಸ್ವಾಮಿ ಸಲಹೆ

ಈ ಸುದ್ದಿಯನ್ನು ಶೇರ್ ಮಾಡಿ

kumaraswamy
ಬೆಂಗಳೂರು, ಸೆ.9- ಜೆಡಿಎಸ್‍ನ ಎಲ್ಲಾ ಶಾಸಕರು ಒಗ್ಗಟ್ಟಿನಿಂದ ಇರುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ನಿನ್ನೆ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದು, ಆ ಸಂದರ್ಭದಲ್ಲಿ ಪಕ್ಷದ ಯಾವೊಬ್ಬ ಶಾಸಕರೂ ಕೂಡ ಆಸೆ, ಆಮಿಷಗಳಿಗೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಮೇಲೆ ಇಡಿ ಎಫ್‍ಐಆರ್ ದಾಖಲಿಸಲಿದೆ ಎಂಬ ವದಂತಿ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಆಪರೇಷನ್ ಕಮಲ ನಡೆಸಿ ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಪ್ರಯತ್ನ ಬಿಜೆಪಿ ನಡೆಸುತ್ತಿದೆ ಎಂಬ ಊಹಾಪೋಹಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಶಾಸಕರೆಲ್ಲರೂ ಒಗ್ಗಟ್ಟಿನಿಂದ ಇರುವಂತೆ ಕರೆ ನೀಡಿದ್ದಾರೆ. ಯಾವುದೇ ವಿಚಾರವಿದ್ದರೂ ಮುಕ್ತವಾಗಿ ಚರ್ಚಿಸಿ ಬಗೆಹರಿಸಿಕೊಳ್ಳೋಣ. ಯಾರೂ ಕೂಡ ಬೇಸರಗೊಳ್ಳುವುದು ಬೇಡ. ಸಮ್ಮಿಶ್ರ ಸರ್ಕಾರ ಇರುವುದರಿಂದ ಕೆಲವು ಶಾಸಕರ ಕೆಲಸ ಕಾರ್ಯಗಳು ವಿಳಂಬವಾಗಿರುವುದಕ್ಕೆ ಅಸಮಾಧಾನ ಬೇಡ. ತಾಳ್ಮೆಯಿಂದ ಇದ್ದು, ಎಲ್ಲವನ್ನು ಬಗೆಹರಿಸಿಕೊಳ್ಳೋಣ ಎಂದು ಸಲಹೆ ಮಾಡಿದ್ದಾರೆ.

ನಮ್ಮದೇ ಸರ್ಕಾರವಿದ್ದರೂ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುತ್ತಿಲ್ಲ. ನಮ್ಮ ಕ್ಷೇತ್ರಗಳ ಕೆಲಸಗಳನ್ನು ಮಾಡಿಸಿಕೊಳ್ಳಲು ಹೆಣಗಾಡಬೇಕಾಗಿದೆ. ಅಧಿಕಾರಿಗಳು ತಮ್ಮ ಮಾತುಗಳಿಗೆ ಬೆಲೆ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಗಮನ ಸೆಳೆದಿದ್ದಾರೆ. ಆಗ ಕುಮಾರಸ್ವಾಮಿ ಅವರು ಸ್ವಲ್ಪ ಕಾಲಾವಕಾಶ ಕೊಡಿ. ಎಲ್ಲವನ್ನೂ ಸರಿಪಡಿಸುವ ಭರವಸೆ ನೀಡಿ ಸಮಾಧಾನಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದೇ ಸಂದರ್ಭದಲ್ಲಿ ಯಾರಾದರು ಪಕ್ಷಾಂತರ ಕಾರ್ಯಕ್ಕೆ ಯತ್ನಿಸಿದರೆ ಆ ವಿಚಾರವನ್ನು ತಮ್ಮ ಗಮನಕ್ಕೆ ತರುವಂತೆಯೂ ಮನವಿ ಮಾಡಿದ್ದಾರೆ. ದಿನಕ್ಕೊಂದು ತಿರುವು ಪಡೆಯುತ್ತಿರುವ ಪ್ರಚಲಿತ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಶಾಸಕರೆಲ್ಲರೂ ಎಚ್ಚರಿಕೆಯಿಂದ ಇರುವಂತೆ ಕಿವಿಮಾತು ಹೇಳಿದ್ದಾರೆ.
ನಿಗಮ ಮಂಡಳಿ ನೇಮಕ, ಸಂಪುಟ ವಿಸ್ತರಣೆ ವಿಚಾರದ ಬಗ್ಗೆಯೂ ಕುಮಾರಸ್ವಾಮಿ ಅವರು ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin