ಟಿಪ್ಪು ಜಯಂತಿ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಭಾರೀ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Tipu-Jayanti

ಬೆಂಗಳೂರು,ನ.10-ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಭಾರೀ ಪ್ರತಿಭಟನೆ ನಡೆಸಿತು.
ರಾಜಧಾನಿ ಬೆಂಗಳೂರು, ಮೈಸೂರು, ಮಡಿಕೇರಿ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ,ಬಳ್ಳಾರಿ, ಗುಲ್ಬರ್ಗ ಸೇರಿದಂತೆ ಜಿಲ್ಲಾ ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.  ಬೆಂಗಳೂರಿನಲ್ಲಿ ಟೌನ್‍ಹಾಲ್ ಮುಂಭಾಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖಂಡರಾದ ಆರ್.ಅಶೋಕ್, ಅರವಿಂದ ಲಿಂಬಾವಳಿ, ಪಿ.ಸಿ.ಮೋಹನ್, ಶೋಭ ಕರಂದ್ಲಾಜೆ, ಮುನಿರಾಜು, ಸುರೇಶ್‍ಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಇನ್ನು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಟಿಪ್ಪು ಸುಲ್ತಾನ್ ಪ್ರತಿಕೃತಿ ದಹನ ಮಾಡಲಾಯಿತು.  ಇನ್ನು ಕಳೆದ ವರ್ಷ ಟಿಪ್ಪು ಸುಲ್ತಾನ್ ಜಯಂತಿಯನ್ನು ವಿರೋಧಿಸಿ ನಡೆಸಿದ್ದ ಪ್ರತಿಭಟನೆಯಿಂದಾಗಿ ರಾಷ್ಟ್ರದ ಗಮನ ಸೆಳೆದಿದ್ದ ಕಾಫಿನಾಡು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಶಾಸಕರಾದ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ ನೇತೃತ್ವದಲ್ಲಿ ನಗರದ ಮಧ್ಯಭಾಗ ಮಾನವ ಸರಪಳಿ ನಿರ್ಮಿಸಿದರು. ಪ್ರತಿಭಟನೆಗೆ ಕೆಲ ಹಿಂದುಪರ ಸಂಘಟನೆಗಳು ಕೈ ಜೋಡಿಸಿದ್ದವು.

ಕರಾವಳಿ ತೀರ ಪ್ರದೇಶದ ಪ್ರಮುಖ ಕೇಂದ್ರವಾದ ದಕ್ಷಿಣ ಕನ್ನಡ, ಉಡುಪಿ, ಕಾರವಾರದಲ್ಲೂ ಬಿಜೆಪಿ ಮತ್ತು ಆರ್‍ಎಸ್‍ಎಸ್ ಸಹ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು.  ಸಂಸದ ನಳಿನ್‍ಕುಮಾರ್ ಕಟೀಲ್, ಶಾಸಕ ಅಂಗಾರ, ಮಾಜಿ ಸಚಿವರಾದ ಕೃಷ್ಣಾಪಾಲಿಮಾರ್, ಇತ್ತ ಉಡುಪಿಯಲ್ಲಿ ಶಾಸಕ ಸುನೀಲ್‍ಕುಮಾರ್, ಮಾಜಿ ಶಾಸಕ ರಘುಪತಿ ಭಟ್ ಮತ್ತಿತರರು ಸರ್ಕಾರದ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.  ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಮಾಡಲಾಯಿತು.

ಬಿಗಿಭದ್ರತೆ: ಹಿಂದೂಪರ ಸಂಘಟನೆಗಳು ಪ್ರತಿಭಟನೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿಭದ್ರತೆಯನ್ನು ಕೈಗೊಳ್ಳಲಾಯಿತು. ರಾಜಧಾನಿ ಬೆಂಗಳೂರಿನಲ್ಲಿ ಅಭೂತಪೂರ್ವ ಭದ್ರತೆ ಕೈಗೊಳ್ಳಲಾಯಿತು.  ಇದೇ ರೀತಿ ಸೂಕ್ಷ್ಮ ಅತಿಸೂಕ್ಷ್ಮ ಪ್ರದೇಶದಲ್ಲಿ ಮಡಿಕೇರಿ, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ದಾವಣಗೆರೆ, ಬೆಳಗಾವಿ ಕಡೆ ಅರೆಸೇನಾ ಪಡೆ, ಕೆಎಸ್‍ಆರ್‍ಪಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು.  ಮೈಸೂರು: ಟಿಪ್ಪು ಸುಲ್ತಾನ್ ಜಯಂತಿ ವಿರೋಧಿಸಿ ಬಿಜೆಪಿ ಮತ್ತು ಭಜರಂಗದಳ, ವಿಶ್ವಹಿಂದು ಪರಿಷತ್, ಶ್ರೀರಾಮಸೇನೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಕಪ್ಪು ಪಟ್ಟಿ ಕಟ್ಟಿಕೊಂಡು ಕರಾಳ ದಿನ ಆಚರಿಸಿದರು.

ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ವಿಜಯ್‍ಶಂಕರ್, ನಗರ ಅಧ್ಯಕ್ಷ ಮಂಜುನಾಥ್, ಮುಖಂಡ ಮಲ್ಲಪ್ಪಗೌಡ, ಶ್ರೀರಾಮಸೇನೆಯ ಪ್ರೇಮ್ ಮತ್ತಿತರರು ಪಾಲ್ಗೊಂಡಿದ್ದರು.
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಯಂತಿ ಕಾರ್ಯಕ್ರಮ ನಡೆಯಲಿರುವ ಕಲಾಮಂದಿg ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಹರೆ ನಡೆಸಿದರು.

► Follow us on –  Facebook / Twitter  / Google+

Facebook Comments

Sri Raghav

Admin