ಡಿಸಿಗೆ ಧಮ್ಕಿ ಹಾಕಿದ್ದ ಮರಿಗೌಡಗೆ ಕಾಂಗ್ರೆಸ್ ಪಕ್ಷದಿಂದ ಗೇಟ್ಪಾಸ್
ಬೆಂಗಳೂರು, ಆ.9-ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಧಮ್ಕಿ ಹಾಕಿ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಆಪ್ತ ಮರಿಗೌಡ ಅವರನ್ನು ಕಾಂಗ್ರೆಸ್ನಿಂದ ಅಮಾನತುಮಾಡಲಾಗಿದೆ. ಮೈಸೂರು ಗ್ರಾಮಾಂತರ ಜಿಲ್ಲೆಯ ಜಿಪಂ ಅಧ್ಯಕ್ಷರಾದ ಮರಿಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ರವರ ಆದೇಶದ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಜಿಲ್ಲಾಧಿಕಾರಿ ಶಿಖಾ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಿಗೌಡ ಅವರು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಸೆಷನ್ ಕೋರ್ಟ್, ಹೈಕೋರ್ಟ್ನಲ್ಲಿ ಅವರಿಗೆ ಜಾಮೀನು ಸಿಕ್ಕಿರಲಿಲ್ಲ. ನಂತರ ಪೊಲೀಸರ ಮುಂದೆ ಶರಣಾಗಿದ್ದರು. ಪೊಲೀಸರು ಅವರನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಲಯ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ನಂತರ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯು ಕೂಡ ವಜಾ ಆಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.