ಡಿ.23ರವರೆಗೆ ರವಿ ಬೆಳೆಗೆರೆಗೆ ನ್ಯಾಯಾಂಗ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Ravi-Belegere--02

ಬೆಂಗಳೂರು, ಡಿ.11-ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಅವರನ್ನು ಹತ್ಯೆ ಮಾಡಲು ಸುಪಾರಿ ಕೊಟ್ಟಿದ್ದಾರೆ ಎಂಬ ಪ್ರಕರಣ ವಿಚಾರಣೆ ನಡೆಸಿದ ಒಂದನೇ ಎಸಿಎಂಎಂ ನ್ಯಾಯಾಲಯ ಖ್ಯಾತ ಪತ್ರಕರ್ತ ರವಿಬೆಳಗೆರೆ ಅವರಿಗೆ ಡಿ.23ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕಳೆದ ನಾಲ್ಕು ದಿನಗಳಿಂದ ಸಿಸಿಬಿ ಪೊಲೀಸರ ವಶದಲ್ಲಿದ್ದ ರವಿಬೆಳಗೆರೆ ಅವರು ತೀವ್ರ ಅನಾರೋಗ್ಯಗೊಂಡಿದ್ದು, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಭದ್ರತೆಗಳೊಂದಿಗೆ ಅವಕಾಶ ನೀಡಬೇಕೆಂದು ಕೋರಿ ಅವರ ಪರ ವಕೀಲರು ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿ ಎಸಿಎಂಎಂ ನ್ಯಾಯಾಲಯ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ರವಿ ಅವರ ಪರ ವಕೀಲರಾದ ದಿವಾಕರ್ ಅವರು ಬೆಳಗೆರೆ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಿದ್ದರು. ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲ. ಹಾಗಾಗಿ ಜೈಲರ್ ಅನುಮತಿಯಲ್ಲಿಯೇ ಚಿಕಿತ್ಸೆಯನ್ನು ಪಡೆಯುವಂತೆ ಸೂಚಿಸಿ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ರವಿ ಬೆಳಗೆರೆ ಅವರು ಪರಪ್ಪನ ಅಗ್ರಹಾರಕ್ಕೆ ಹೋಗಬೇಕಾಯಿತು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರವಿ ಬೆಳಗೆರೆ ಪರ ವಕೀಲರಾದ ದಿವಾಕರ್ ಅವರು, ಸಿಆರ್‍ಪಿಸಿ ನಿಯಮದ ಪ್ರಕಾರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದು ಕಾನೂನಿನ ಒಂದು ಪ್ರಕ್ರಿಯೆಯೂ ಹೌದು. ಸೆಷನ್ ಕೋರ್ಟ್‍ನಲ್ಲಿ ಜಾಮೀನು ಪಡೆಯಬೇಕೆಂದು ನಿರ್ಧರಿಸಿರಲಿಲ್ಲ. ರವಿ ಬೆಳಗೆರೆ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಭದ್ರತೆಗಳೊಂದಿಗೆ ಚಿಕಿತ್ಸೆ ನೀಡಬೇಕೆಂದು ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದೆವು. ಅದನ್ನು ಪುರಸ್ಕರಿಸಿರುವ ನ್ಯಾಯಾಲಯ ಅವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದೆ.
ನಾವು ಜಾಮೀನಿಗಾಗಿ ಅರ್ಜಿ ಸಲ್ಲಿಸಿರಲಿಲ್ಲ. ಮುಂದಿನ ಎರಡು ದಿನಗಳಲ್ಲಿ ಉನ್ನತ ಮಟ್ಟದ ನ್ಯಾಯಾಲಯದಲ್ಲಿ ಜಾಮೀನು ಪಡೆಯುವ ಅರ್ಜಿ ಹಾಕಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

Facebook Comments

Sri Raghav

Admin