ತಮಿಳುನಾಡಿಗೆ ನೀರು ಬಿಡಬೇಡಿ ಎಂದು ವಾಟಾಳ್ ಉರುಳು ಸೇವೆ

ಈ ಸುದ್ದಿಯನ್ನು ಶೇರ್ ಮಾಡಿ

vatal
ಬೆಂಗಳೂರು, ಆ.27-ಕರ್ನಾಟಕದ ಜಲಾಶಯಗಳಲ್ಲಿ ನೀರು ಇಲ್ಲದಿರುವಾಗ ತಮಿಳುನಾಡಿನವರು ನೀರಿಗೆ ಒತ್ತಾಯ ಮಾಡುತ್ತಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ಮೈಸೂರು ಬ್ಯಾಂಕ್ ವೃತ್ತದ ಬಳಿ ಉರುಳು ಸೇವೆ ಮಾಡುವುದರ ಮೂಲಕ ಪ್ರತಿಭಟನೆ ನಡೆಸಿದರು.  ನಮ್ಮಲ್ಲಿ ಕುಡಿಯುವುದಕ್ಕೆ ನೀರಿಲ್ಲದಿರುವಾಗ ಬೇರೆ ರಾಜ್ಯಕ್ಕೆ ನೀರು ಬಿಡುವ ಪ್ರಶ್ನೆಯೇ ಇಲ್ಲ. ನಮ್ಮ ರಾಜ್ಯದ ಕಾವೇರಿ ಜಲಾನಯನ ಪ್ರದೇಶದಲ್ಲಿನ ರೈತರು ಕಂಗಾಲಾಗಿದ್ದಾರೆ. ಬೆಳೆದು ನಿಂತ ಬೆಳೆಗೆ ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ಮಂಡ್ಯ ಮೈಸೂರು, ಬೆಂಗಳೂರು ನಗರಗಳಿಗೆ ಕುಡಿಯುವ ನೀರು ಕೊರತೆಯಾಗಿದೆ.

ಈ ಸಂದರ್ಭದಲ್ಲಿ ಕುಡಿಯುವ ನೀರಿಗೆ ಎಲ್ಲಿಂದ ನೀರು ಬಿಡುವುದು. ತಮಿಳುನಾಡು ರಾಜ್ಯದವರು ಕಾವೇರಿ ಜಲ ವಿವಾದವನ್ನು ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡು ಅನಗತ್ಯ ವಿವಾದ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜಯಲಲಿತಾ ಅವರು ಮುಖ್ಯಮಂತ್ರಿ ಆದಾಗಿನಿಂದಲೂ ಕರ್ನಾಟಕದ ಮೇಲೆ ನಿರಂತರವಾಗಿ ಕ್ಯಾತೆ ತೆಗೆಯುತ್ತಿದ್ದಾರೆ. ಕಾವೇರಿ ವಿವಾದದ ಮೂಲಕ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ಸಮರ್ಪಕ ಕಾನೂನು ಹೋರಾಟ ಮಾಡಬೇಕು, ಮಹತ್ವದ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ನಮಗೆ ಕಾವೇರಿ, ಕೃಷ್ಣ , ಮಹದಾಯಿ ಎಲ್ಲ ಕಡೆಗಳಿಂದಲೂ ತೀವ್ರ ಅನ್ಯಾಯವಾಗಿದೆ. ತಮಿಳುನಾಡು, ಆಂಧ್ರ, ಮಹಾರಾಷ್ಟ್ರ, ಗೋವಾ ಸರ್ಕಾರಗಳು ಶತ್ರುಗಳ ರೀತಿಯಲ್ಲಿ ವರ್ತಿಸುತ್ತಿವೆ. ಇದೇ ಪರಿಸ್ಥಿತಿ ಮುಂದುವರೆದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin