ಕಾವೇರಿಗಾಗಿ ತಮಿಳುನಾಡು ವಿರುದ್ಧ ಹೋರಾಡಲು ಸರ್ಕಾರಕ್ಕೆ ಸರ್ವಪಕ್ಷ ನಾಯಕ ಸಾಥ್

ಈ ಸುದ್ದಿಯನ್ನು ಶೇರ್ ಮಾಡಿ

sarva-sabhe

ಬೆಂಗಳೂರು, ಆ.27- ಕಾವೇರಿ ಜಲಾನಯನ ಭಾಗದ ಜಲಾಶಯಗಳಲ್ಲಿ ನೀರಿಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿರುವ ವಾಸ್ತವ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿಕೊಡಲು ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಾವೇರಿ ಜಲವಿವಾದಕ್ಕೆ ಸಂಬಂಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಸದರು, ಉಭಯ ಸದನಗಳ ವಿರೋಧ ಪಕ್ಷದ ನಾಯಕರನ್ನೊಳಗೊಂಡ ಸರ್ವಪಕ್ಷ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.  ಸಭೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ರಾಜ್ಯದ ಹಿತ ಕಾಪಾಡುವ ದೃಷ್ಟಿಯಿಂದ ರಾಜ್ಯ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

ಜತೆಗೆ ಕಾವೇರಿ ಜಲಾನಯನ ಭಾಗದ ರೈತರು ಹಾಗೂ ಜನರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಸಭೆಯ ಆರಂಭದಲ್ಲಿ ರಾಜ್ಯದ ಪರ ವಕೀಲ ಮೋಹನ್ ಕಾತರಕಿ ಅವರು, ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ನೀರು ಬಿಟ್ಟಿಲ್ಲ ಎಂದು ಸಲ್ಲಿಸಿರುವ ಅರ್ಜಿಯ ಬಗ್ಗೆ ವಿವರಣೆ ನೀಡಿದ್ದಾರೆ. ತಮಿಳುನಾಡು ಸಂಕಷ್ಟ ವರ್ಷವೆಂಬುದನ್ನು ಒಪ್ಪದೆ ಸಾಮಾನ್ಯ ವರ್ಷವೆಂದು ಪರಿಗಣಿಸಿದೆ. ಆಗಸ್ಟ್‌ನಲ್ಲಿ ತೀವ್ರ ಮಳೆ ಕೊರತೆಯನ್ನು ರಾಜ್ಯ ಎದುರಿಸುತ್ತಿದ್ದು, ಕಾವೇರಿ ಜಲಾನಯನ ಭಾಗದಲ್ಲಿ ಶೇ.42ರಷ್ಟು ಮಳೆ ಕೊರತೆ ಕಂಡುಬಂದಿದೆ.   ಕೆಆರ್‌ಎಸ್‌ನಲ್ಲಿ ಶೇ.38ರಷ್ಟು ನೀರಿನ ಸಂಗ್ರಹವಿದ್ದು, ಒಳಹರಿವು ಕಡಿಮೆ ಇದೆ. ಕಾವೇರಿ ಜಲಾನಯನ ಪಾತ್ರದ ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳಲ್ಲೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ ಎಂಬ ಮಾಹಿತಿಯನ್ನು ನೀರಾವರಿ ಹಾಗೂ ಹವಾಮಾನ ತಜ್ಞರು ಸಭೆಯ ಗಮನಕ್ಕೆ ತಂದಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಜಲಾಶಯಗಳಲ್ಲಿರುವ ನೀರಿನ ಪ್ರಮಾಣ ಎಷ್ಟು..? ಇದುವರೆಗೆ ತಮಿಳುನಾಡಿಗೆ ಬಿಟ್ಟಿರುವ ನೀರಿನ ಪ್ರಮಾಣ ಎಷ್ಟು ಎಂಬ ಮಾಹಿತಿ ನೀಡಬೇಕು. ರಾಜ್ಯದ ಹಾಗೂ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂಬ ಸಲಹೆಯನ್ನು ಕುಮಾರಸ್ವಾಮಿ ಮಾಡಿದರು ಎಂದು ಮೂಲಗಳು ತಿಳಿಸಿವೆ. ರಾಜ್ಯ ಎದುರಿಸುತ್ತಿರುವ ತೀವ್ರ ಸಂಕಷ್ಟ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿಕೊಡಲು ತೀರ್ಮಾನಿಸಲಾಯಿತು. ಈ ನಡುವೆ ರಾಜ್ಯದ ಪರ ವಕೀಲ ನಾರಿಮನ್ ಅವರು ಸಾಧ್ಯವಾದಷ್ಟು ತಮಿಳುನಾಡಿಗೆ ನೀರು ಬಿಡುವಂತೆ ಮಾಡಿರುವ ಸಲಹೆ ಬಗ್ಗೆಯೂ ಚರ್ಚಿಸಲಾಯಿತು.

ಸಭೆಯಲ್ಲಿ ಪಾಲ್ಗೊಂಡಿದ್ದ ಸಂಸದರು, ಕೇಂದ್ರ ಸಚಿವರು ಹಾಗೂ ವಿರೋಧ ಪಕ್ಷಗಳ ನಾಯಕರು ತಮ್ಮ ತಮ್ಮ ಅಭಿಪ್ರಾಯ ಮಂಡಿಸಿದರು. ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದರಾದ ವೀರಪ್ಪ ಮೊಯ್ಲಿ, ಪಿ.ಸಿ.ಮೋಹನ್, ಡಿ.ಕೆ.ಸುರೇಶ್, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಟಿ.ಬಿ.ಜಯಚಂದ್ರ, ಹವಾಮಾನ ಇಲಾಖೆ ತಜ್ಞರು, ಕಾನೂನು ಇಲಾಖೆ ತಜ್ಞರು ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin