ತುಮಕೂರಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಉಸ್ತುವಾರಿ ವೇಣುಗೋಪಾಲ್‍ ರಹಸ್ಯ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

Tumakuru--01

ತುಮಕೂರು, ಜ.5- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಯಾವುದೇ ರೀತಿಯ ತಂತ್ರಗಾರಿಕೆ ನಡೆಸಿದರೂ ಅದು ನಡೆಯುವುದಿಲ್ಲ. ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಬೇಕೆಂಬ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ವಿಶ್ವವಿದ್ಯಾಲಯದ ವಿಶ್ರಾಂತಿ ಗೃಹದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಸಂಸದರಾದ ಮುದ್ದಹನುಮೇಗೌಡ, ಚಂದ್ರಪ್ಪ, ನಗರ ಶಾಸಕ ಡಾ.ರಫೀಕ್ ಅಹಮ್ಮದ್, ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಅವರೊಂದಿಗೆ ಸುಮಾರು ಎರಡು ಗಂಟಗಳ ಕಾಲ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ರಹಸ್ಯ ಮಾತುಕತೆ ನಡೆಸಿದ್ದಾರೆ.

ಪಕ್ಷದಲ್ಲಿರುವ ಆಂತರಿಕ ಭಿನ್ನಾಭಿಪ್ರಾಯ ಶಮನಗೊಳಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲರಲ್ಲೂ ಏಕತೆ ಮೂಡಿಸಿ ಪಕ್ಷದ ಗೆಲುವಿಗೆ ಯಾವ ರೀತಿ ತಂತ್ರಗಾರಿಕೆ ರೂಪಿಸಬೇಕೆಂಬ ಬಗ್ಗೆ ಚರ್ಚೆ ಮಾಡಿದ್ದಾರೆಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಯಾವ ರೀತಿ ಒತ್ತು ಕೊಡಲಾಗಿದೆ, ಆಂತರಿಕ ಬಿಕ್ಕಟ್ಟುಗಳಿವೆಯೆ, ಜೆಡಿಎಸ್ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಪ್ರಬಲವಾಗಿದ್ದು, ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ಕ್ಷೇತ್ರಗಳು ಜೆಡಿಎಸ್ ಭದ್ರಕೋಟೆ ಎಂದು ರಣೋತ್ಸಾಹದಲ್ಲಿದ್ದಾರೆ. ಈ ಬಾರಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಯಾವ ರೀತಿ ರಣತಂತ್ರ ರೂಪಿಸಬೇಕೆಂಬ ಬಗ್ಗೆ ಚರ್ಚೆ ನಡೆಸಿದ್ದಾರೆ.

ಪಕ್ಷದಲ್ಲಿ ಏಕತೆ ಮತ್ತು ಒಗ್ಗಟ್ಟು ಮೂಡಿಸುವುದು ಹಾಗೂ ಕಾರ್ಯಕರ್ತರಲ್ಲಿ ಉತ್ಸಾಹ ಹುರಿದುಂಬಿಸುವ ಕೆಲಸ ಮಾಡಬೇಕಿದೆ. ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲರೂ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಕ್ಷೇತ್ರಗಳನ್ನೂ ಗೆಲ್ಲಲೇಬೇಕೆಂಬ ಖಡಕ್ ಸೂಚನೆಯನ್ನು ವೇಣುಗೋಪಾಲ್ ನೀಡಿದ್ದಾರೆಂಬ ಮಾತು ಕೇಳಿಬರುತ್ತಿದೆ. ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಮುದ್ದಹನುಮೇಗೌಡ, ಎಐಸಿಸಿ ಅಧ್ಯಕ್ಷರಾದ ರಾಹುಲ್‍ಗಾಂಧಿ ಮತ್ತು ಸೋನಿಯಾಗಾಂಧಿಯವರು ಅವರ ಸೂಚನೆ ಮೇರೆಗೆ ಈ ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದೂ ಸೇರಿದಂತೆ ಕಾರ್ಯತಂತ್ರ ಹಾಗೂ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಎಲ್ಲ ವಿಷಯವನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲು ಅಸಾಧ್ಯ. ಕೆಲವು ಗೌಪ್ಯತೆ ಕಾಪಾಡಿಕೊಳ್ಳಬೇಕಿದೆ ಎಂದರು.

ಕಾಂಗ್ರೆಸ್ ಪಕ್ಷದ ಶಾಸಕರಿರುವ ಕ್ಷೇತ್ರ ಹೊರತುಪಡಿಸಿ ಪಾವಗಡ, ಕೊರಟಗೆರೆ, ತುಮಕೂರು ಗ್ರಾಮಾಂತರ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ ಕ್ಷೇತ್ರಗಳೂ ಸೇರಿದಂತೆ 11 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಕರಾವಳಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Facebook Comments

Sri Raghav

Admin