ನಾಳೆ ನಿರ್ಮಲಾನಂದ ಶ್ರೀಗಳ ತುಲಾಭಾರ ಕಾರ್ಯಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

nirmalananda--swamyji-2

ಹಾಸನ, ಆ.17- ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಶಾಖಾ ಮಠದಿಂದ ಪ್ರತಿ ತಿಂಗಳು ನಡೆಯುವ ಗುರು ತೋರಿದ ದಾರಿ ತಿಂಗಳ ಮಾಮನ ತೇರು ಹುಣ್ಣಿಮೆ ಸರಣಿಯ ತೃತೀಯ ವಾರ್ಷಿಕೋತ್ಸವದ ಅಂಗವಾಗಿ ನಾಳೆ ಚನ್ನರಾಯಪಟ್ಟಣದಲ್ಲಿ ಪದ್ಮಭೂಷಣ ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರ ಸಂಸ್ಮರಣೋತ್ಸವ ಮತ್ತು ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರ ರಜತ ತುಲಾಭಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಆದಿಚುಂಚನಗಿರಿ ಶಾಖಾ ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶಾಖಾ ಮಠಾಧೀಶ ಶ್ರೀ ಶಂಭುನಾಥ ಸ್ವಾಮೀಜಿ ಚನ್ನರಾಯಪಟ್ಟಣ ತಾಲೂಕಿನ ಭಕ್ತರ ಸಮ್ಮುಖದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ನಾಳೆ ಮಧ್ಯಾಹ್ನ 3 ಗಂಟೆಗೆ ಚನ್ನರಾಯಪಟ್ಟಣದ ಸರ್ಕಾರಿ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಮುತ್ತುತ್ತರಾಯ ದೇವಸ್ಥಾನದ ಬಳಿಯಿಂದ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಪುತ್ಥಳಿ ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಮುತ್ತಿನ ಪಲ್ಲಕ್ಕಿ ಉತ್ಸವ ಹೊರಡಲಿದೆ. ವಿವಿಧ ಜನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.
ಮೆರವಣಿಗೆಯು ಚನ್ನರಾಯ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಕ್ಕದಲ್ಲಿರುವ ತಾಲೂಕು ಕ್ರೀಡಾಂಗಣ ತಲುಪಿದ ನಂತರ ಸಭಾ ಕಾರ್ಯಕ್ರಮ ಆರಂಭವಾಗುವುದು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಸಾನಿಧ್ಯ ವಹಿಸುವರು. ಶ್ರೀಕ್ಷೇತ್ರ ಶ್ರವಣಬೆಳಗೊಳ ಜೈನ ಮಠದ ಪೀಠಾಧ್ಯಕ್ಷ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸುವರು. ಚಿತ್ರದುರ್ಗದ ಶ್ರೀ ಸದ್ಗುರು ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಕುಂದೂರು ಕ್ಷೇತ್ರದ ಶ್ರೀ ರಾಮಯ್ಯ ಪರದೇಶಿ ಸ್ವಾಮೀಜಿ, ಕೆ.ಆರ್. ನಗರ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ ಹಾಗು ಆದಿಚುಂಚನಗಿರಿ ಮಹಾಸಂಸ್ಥಾನದ ಎಲ್ಲಾ ಶಾಖಾ ಮಠಗಳ ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ.
ಶಾಸಕ ಸಿ.ಎನ್. ಬಾಲಕೃಷ್ಣ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಸ್ಥಿತಪ್ರಜ್ಞ ಕೃತಿ ಬಿಡುಗಡೆ ಮಾಡುವರು. ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಅಪ್ಪಾಜಿಗೌಡ, ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ ಮತ್ತು ಡಾ. ಎನ್.ಬಿ.ನಂಜಪ್ಪ, ಜಿ.ಪಂ. ಮಾಜಿ ಉಪಾಧ್ಯಕ್ಷ ಎಚ್.ಎಸ್.ವಿಜಯಕುಮಾರ್, ತೆಂಗು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕಬ್ಬಳಿ ರಂಗೇಗೌಡ, ಪುರಸಭೆ ಅಧ್ಯಕ್ಷ ಸಿ.ಎನ್. ಶಶಿಧರ್, ಜಿ.ಪಂ. ಮಾಜಿ ಸದಸ್ಯ ಪರಮದೇವರಾಜೇಗೌಡ, ಪರಿಸರಪ್ರೇಮಿ ಚ.ನ. ಅಶೋಕ್, ಮುಖಂಡ ಶಿವನಂಜೇಗೌಡ, ಸ್ಥಿತಪ್ರಜ್ಞ ಕೃತಿಯ ಸಂಪಾದಕಿ ಡಾ. ಟಿ.ಸಿ. ಪೂರ್ಣಿಮಾ ಹಾಗೂ ಜನಪ್ರತಿನಿಧಿಗಳು ಭಾಗವಹಿಸುವರು.ಸುದ್ದಿಗೋಷ್ಠಿಯಲ್ಲಿ ಹುಣ್ಣಿಮೆ ಕಾರ್ಯಕ್ರಮಗಳ ಸಂಚಾಲಕ ಹೆಚ್.ಬಿ. ಮದನಗೌಡ, ಮಠದ ವ್ಯವಸ್ಥಾಪಕ ಹೆಚ್.ಕೆ. ಚಂದ್ರಶೇಖರ್ ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin