ಬಿಜೆಪಿ ಸೇರಿದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ರತನ್ ಸಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

BJP-Join--01

ಬೆಂಗಳೂರು,ಮಾ.8-ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಹಾಗೂ ಮಾಜಿ ಶಾಸಕ ರತನ್ ಸಿಂಗ್ ಸೇರಿದಂತೆ ಮತ್ತಿತರರು ಇಂದು ವಿದ್ಯುಕ್ತವಾಗಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.   ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಜಯಪ್ರಕಾಶ್ ಹೆಗ್ಡೆ ಹಾಗೂ ರತನ್ ಸಿಂಗ್ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಯಡಿಯೂರಪ್ಪ , ಸಂಸದೆ ಶೋಭ ಕರಂದ್ಲಾಜೆ, ಶಾಸಕರಾದ ಸಿ.ಟಿ.ರವಿ, ಅರವಿಂದ ಲಿಂಬಾವಳಿ ಮತ್ತಿತರರು ಪಕ್ಷದ ಬಾವುಟ ನೀಡಿ ಬರ ಮಾಡಿಕೊಂಡರು. ನಂತರ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ನೀಡಲಾಯಿತು.   ಜಯಪ್ರಕಾಶ್ ಹೆಗ್ಡೆ ಪಕ್ಷ ಸೇರ್ಪಡೆಯಿಂದಾಗಿ ಕರಾವಳಿ ಭಾಗದಲ್ಲಿ ಇನ್ನಷ್ಟು ಆನೆಬಲ ಬಂದಿದ್ದರೆ ರತನ್ ಸಿಂಗ್ ಆಗಮನದಿಂದ ಹೊಸಪೇಟೆಯಲ್ಲಿ ಶಾಸಕ ಆನಂದ್ ಸಿಂಗ್‍ಗೆ ಇನ್ನಷ್ಟು ಶಕ್ತಿ ಬಂದಂತಾಗಿದೆ.  ಮೂಲತಃ ಜನತಾ ಪರಿವಾರದಿಂದ ರಾಜಕೀಯ ಧುಮುಕಿದ್ದ ಜಯಪ್ರಕಾಶ್ ಹೆಗ್ಡೆ ಈ ಹಿಂದೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಅವರು ವಿಧಾನಸಭೆ ಪ್ರವೇಶಿಸಿದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗೇ ವಿಜೇತರಾಗಿದ್ದರು.
ನಂತರ ಕಾಂಗ್ರೆಸ್‍ಗೆ ಸೇರ್ಪಡೆಯಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಡುಪಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ವಿಜೇತರಾಗಿದ್ದರು.

2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಪರಾಭವಗೊಂಡಿದ್ದರು. ಬಳಿಕ ಸ್ಥಳೀಯ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ದಕ್ಷಿಣ ಜಿಲ್ಲೆಯಿಂದ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಬೇಕೆಂಬ ಇಚ್ಛೆ ಹೊಂದಿದ್ದರು.   ಆದರೆ ಪಕ್ಷ ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಬಳಿಕ ಜಯಪ್ರಕಾಶ್ ಹೆಗ್ಡೆ ಸಕ್ರೀಯ ರಾಜಕಾರಣದಿಂದಲೇ ತೆರೆಮರೆಗೆ ಸರಿದಿದ್ದರು.   ಇತ್ತೀಚೆಗೆ ಯಡಿಯೂರಪ್ಪ , ಆರ್.ಅಶೋಕ್ ಅವರನ್ನು ಭೇಟಿ ಮಾಡಿದ ಹೆಗ್ಡೆ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಮೂಲಗಳ ಪ್ರಕಾರ 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.

ಒಂದು ವೇಳೆ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ರಾಜಕಾರಣಕ್ಕೆ ಮರಳಿದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ತೆರವಾಗಲಿರುವ ಈ ಸ್ಥಾನಕ್ಕೆ ಹೆಗ್ಡೆ ಅಭ್ಯರ್ಥಿಯಾಗುವ ಸಂಭವವೂ ಇದೆ.  ಇನ್ನು ಕಾಂಗ್ರೆಸ್‍ನಲ್ಲಿ ಒಂದು ಬಾರಿ ಶಾಸಕರಾಗಿದ್ದ ರತನ್ ಸಿಂಗ್ ಬಳಿಕ ಪಕ್ಷದಲ್ಲಿ ಪೂರ್ಣವಾಗಿ ಕಡೆಗಣಿಸಲ್ಪಟ್ಟಿದ್ದರು. ಬಿಜೆಪಿಗೆ ಸೇರ್ಪಡೆಯಾದರೆ ಸೂಕ್ತ ಸ್ಥಾನಮಾನ  ನೀಡುವ ಭರವಸೆಯನ್ನು ಶಾಸಕ ಆನಂದ್ ಸಿಂಗ್ ನೀಡಿದ್ದರು. ಹೀಗಾಗಿಯೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.   ನಾಳೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ , ಮಾಜಿ ಶಾಸಕ ಜೆ.ಡಿ.ನಾಯಕ್, ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಈ ಬೆಳವಣಿಗೆಗಳ ನಡುವೆಯೇ ಮಾಜಿ ಸಚಿವ ಎಂ. ಎಚ್.ಅಂಬರೀಶ್ ಅವರನ್ನು ಮುಖಂಡ ಆರ್.ಅಶೋಕ್ ಭೇಟಿ ಮಾಡಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಆಹ್ವಾನ ನೀಡಿದ್ದರು.

ಸದ್ಯಕ್ಕೆ ಅಂಬರೀಶ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ. ಮೂಲಗಳ ಪ್ರಕಾರ 2018ರ ವಿಧಾನಸಭೆ ಚುನಾವಣೆಯಲ್ಲಿ ಅವರ ಪತ್ನಿ ಸುಮಲತಾ ಅವರು ಯಶವಂತಪುರ ಇಲ್ಲವೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಹುರಿಯಾಳಾಗಿ ಸ್ಪರ್ಧಿಸುವ ಸಾಧ್ಯತೆಗಳಿವೆ.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin