ಮತದಾನಕ್ಕೆ 5 ದಿನ ಬಾಕಿ, ಜೋರಾಯ್ತು ಅಭ್ಯರ್ಥಿಗಳ ಎದೆಬಡಿತ
ಬೆಂಗಳೂರು, ಮೇ 6- ರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೇವಲ ಐದು ದಿನಗಳಷ್ಟೇ ಬಾಕಿ ಇದೆ. ಕಣದಲ್ಲಿರುವ ಅಭ್ಯರ್ಥಿಗಳ ಎದೆಬಡಿತ ಹೆಚ್ಚಾಗುತ್ತಿದೆ. ಚುನಾವಣಾ ದಿನಾಂಕ ಹತ್ತಿರವಾಗುತ್ತಿದ್ದಂತೆ ತಮ್ಮ ಪ್ರಚಾರದ ಭರಾಟೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ವಿವಿಧ ಪಕ್ಷಗಳ ನಾಯಕರು ಬಹಿರಂಗ ಸಮಾವೇಶ, ರ್ಯಾಲಿ, ರೋಡ್ ಶೋ ಮುಂತಾದವುಗಳನ್ನು ನಡೆಸುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದರೆ,
ಅಭ್ಯರ್ಥಿಗಳು ಹಳ್ಳಿ ಹಳ್ಳಿಗಳಿಗೆ, ಗಲ್ಲಿ ಗಲ್ಲಿಗಳಿಗೆ, ಮನೆ ಮನೆಗಳಿಗೆ ತೆರಳಿ ಮತ ಯಾಚನೆ ಮಾಡುತ್ತಿದ್ದಾರೆ.
ಇನ್ನು ನಾಲ್ಕು ದಿನಗಳಲ್ಲಿ ಎಲ್ಲರೂ ತಮ್ಮ ಚುನಾವಣಾ ಪ್ರಚಾರ ಕಾರ್ಯ ಮುಗಿಸಿಕೊಂಡು ಕ್ಷೇತ್ರಗಳನ್ನು ಬಿಟ್ಟು ತೆರಳಬೇಕಿದೆ. ಹಾಗಾಗಿ ಪ್ರಚಾರದ ಭರಾಟೆಯನ್ನು ತೀವ್ರಗೊಳಿಸಿದ್ದಾರೆ. ಇಂದಿನಿಂದ ಚುನಾವಣಾ ಕಣ ಮತ್ತಷ್ಟು ರಂಗೇರಲಿದೆ. ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಫ್ಲೆಕ್ಸ್, ಬಂಟಿಂಗ್ಸ್, ಬ್ಯಾನರ್ಗಳ ಹಾವಳಿ ಇಲ್ಲ. ಆದರೆ, ಅಭ್ಯರ್ಥಿಗಳ ಪರವಾಗಿ ಅವರ ಬೆಂಬಲಿಗರು ಮನೆ ಮನೆಗೆ ತೆರಳಿ ಮತ ಯಾಚಿಸುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಬಿಎಸ್ಪಿ, ಜೆಡಿಯು, ಆಮ್ ಆದ್ಮಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ಬ್ಯುಜಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಪುಟದ ಸಚಿವರು, ರಾಜ್ಯ ಬಿಜೆಪಿ ಅಧ್ಯಕ್ಷ, ಯಡಿಯೂರಪ್ಪ, ಬಿಜೆಪಿ ಮುಖಂಡರು ಸೇರಿದಂತೆ ಹಲವರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಅಭ್ಯರ್ಥಿಗಳ ಪರವಾಗಿ ವಿವಿಧೆಡೆ ಸಿನಿಮಾ ನಟ-ನಟಿಯರು ಪ್ರಚಾರಕ್ಕೆ ಧುಮುಕಿದ್ದಾರೆ. ಚಿತ್ರನಟ ಸುದೀಪ್, ಯಶ್, ದರ್ಶನ್ ಮುಂತಾದವರು ಹಲವು ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನೂ ಹಲವು ನಟ-ನಟಿಯರು ಪ್ರಚಾರ ಕಾರ್ಯಕ್ಕೆ ಆಗಮಿಸಲಿದ್ದಾರೆ. ಈವರೆಗೆ ಚುನಾವಣಾ ಪ್ರಚಾರ ಕಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು, ಭರವಸೆ ಈಡೇರಿಸದ ಶಾಸಕರು, ಸಚಿವರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿರುವುದು, ಪ್ರಚಾರಕ್ಕೆ ಅಡ್ಡಿ ಪಡಿಸಿರುವುದು, ಹಲವೆಡೆ ಕಲ್ಲು ತೂರಾಟ ನಡೆಸಿರುವ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಯಾವುದೇ ಅಹಿತಕರ ಘಟನೆಗಳು ನಡೆದಿರುವ ಬಗ್ಗೆ ವರದಿಯಾಗಿಲ್ಲ.
ರಾಜ್ಯಾದ್ಯಂತ ಬಹುತೇಕ ಶಾಂತಿಯುತ ಪ್ರಚಾರ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಬೇರೆ ಬೇರೆ ತಂಡಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಅದೇ ರೀತಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಕಾಂಗ್ರೆಸ್ ವರಿಷ್ಠರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಬೇರೆ ಬೇರೆ ತಂಡಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಜೆಡಿಎಸ್ ಪರವಾಗಿ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬೇರೆ ತಂಡಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪ್ರಚಾರ ನಡೆಸುತ್ತಿದ್ದಾರೆ.
ಪ್ರಧಾನಿ ಮೋದಿ ಅವರು ರಾಜ್ಯದಲ್ಲಿ 21 ಸಮಾವೇಶಗಳನ್ನು ನಡೆಸಲುದ್ದೇಶಿಸಿದ್ದು, ಈಗಾಗಲೇ 10 ಸಮಾವೇಶಗಳು ಮುಗಿದಿವೆ. ಇನ್ನೂ 11 ಸಮಾವೇಶಗಳು ನಡೆಯಲಿವೆ. ರಾಹುಲ್ ಅವರು ಹಲವಾರು ಬಹಿರಂಗ ಸಮಾವೇಶಗಳನ್ನು ನಡೆಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಯಾವತಿ, ದೇವೇಗೌಡರು ಕೂಡ ಹತ್ತಾರು ಸಮಾವೇಶಗಳನ್ನು ಕೈಗೊಂಡಿದ್ದಾರೆ. ರಾಜ್ಯಾದ್ಯಂತ ಚುನಾವಣಾ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರತೊಡಗಿದ್ದು, 12ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾರ ಯಾರ ಹಣೆಬರಹವನ್ನು ಹೇಗೆ ಬರೆಯಲಿದ್ದಾನೆ ಎಂಬುದನ್ನು ಕಾದು ನೋಡಬೇಕು.