ಮಾಜಿ ಸಚಿವ ಬಿ.ಎ.ಮೊಹಿದ್ದೀನ್ ಅವರಿಗೆ ಡಿ.ದೇವರಾಜ ಅರಸು ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

M-ohiddeen

ಬೆಂಗಳೂರು, ಆ.18– ಹಿರಿಯ ರಾಜಕಾರಣಿ, ಮಾಜಿ ಸಚಿವ ಬಿ.ಎ.ಮೊಹಿದ್ದೀನ್ ಅವರು ಪ್ರಸಕ್ತ ಸಾಲಿನ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಡಾ.ಕೃಷ್ಣಮೂರ್ತಿ ಹನೂರು ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ರಾಜ್ಯಮಟ್ಟದ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಮೊಹಿದ್ದೀನ್ ಅವರನ್ನು ಆಯ್ಕೆ ಮಾಡಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.  ಪ್ರಶಸ್ತಿಯು 2 ಲಕ್ಷ ರೂ. ನಗದು, ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಆ.20ರಂದು ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದು, ಆ ಸಂದರ್ಭದಲ್ಲಿ ಮೊಹಿದ್ದೀನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ಅರಸು ಅವರ ಜನ್ಮ ಶತಮಾನೋತ್ಸವ ಅಂಗವಾಗಿ 2408 ವಿದ್ಯಾರ್ಥಿ ನಿಲಯಗಳಿಗೆ ಡಿ.ದೇವರಾಜ ಅರಸು ವಿದ್ಯಾರ್ಥಿ ನಿಲಯ ಎಂದು ನಾಮಕರಣ ಮಾಡಲಾಗುವುದು ಎಂದರು.

ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ, ಪಿಎಚ್ಡಿ ವಿದ್ಯಾರ್ಥಿಗಳಿಗೆ ಮಾಸಿಕ ಶಿಷ್ಯ ವೇತನ, ಅರಸು ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು. 99 ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ತಲಾ ಗರಿಷ್ಠ 10 ಲಕ್ಷ ರೂ.ವರೆಗೆ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ನೀಡಲಾಗಿದೆ. ಇದೇ ಮೊದಲ ಬಾರಿಗೆ 600 ಹಿಂದುಳಿದ ವರ್ಗಗಳ ಪಿಎಚ್ಡಿ ವಿದ್ಯಾರ್ಥಿಗಳಿಗೆ ಮಾಸಿಕ 5 ಸಾವಿರ ರೂ. ಶಿಷ್ಯ ವೇತನ ನೀಡಲಾಗಿದೆ ಎಂದು ಹೇಳಿದರು.

2500 ವಿದ್ಯಾರ್ಥಿಗಳಿಗೆ 10 ರಿಂದ 25 ಸಾವಿರ ರೂ. ಅರಸು ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಅರಸು ಹುಟ್ಟೂರು ಬೆಟ್ಟದ ತುಂಗ ಹಾಗೂ ಬೆಳೆದ ಊರು ಕಲ್ಲಹಳ್ಳಿಗೆ ತಲಾ 10 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.  ಅರಸು ಜನ್ಮ ಶತಮಾನೋತ್ಸವ ಅಂಗವಾಗಿ ರಾಜ್ಯಾದ್ಯಂತ ವಿಚಾರ ಸಂಕಿರಣ, ನಾಟಕ ಪ್ರದರ್ಶನ, ಚಿತ್ರಕಲಾ ಸ್ಪರ್ಧೆ, ಮ್ಯಾರಥಾನ್ ಸೇರಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin