ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಬರ್ಬರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Mysuru-Murder

ಮೈಸೂರು,ಆ.29-ದುಷ್ಕರ್ಮಿಗಳು ರೌಡಿಶೀಟರ್ನನ್ನು ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಬೆಳ್ಳಂಬೆಳಗ್ಗೆ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.   ನಗರದ ಪಡುವಾರಳ್ಳಿಯಲ್ಲಿ ಹಾಡಹಗಲೇ ಬರ್ಬರವಾಗಿ ಹತ್ಯೆಗೀಡಾಗಿದ್ದ ದೇವು ಸಹಚರ, ವಿಜಯಶ್ರೀಪುರದ ನಿವಾಸಿ ವಿಜಯ್(26) ಕೊಲೆಯಾದ ರೌಡಿಶೀಟರ್.
ನಗರದ ಸಯ್ಯಾಜಿರಾವ್ ರಸ್ತೆಯಲ್ಲಿರುವ ಅಕ್ಷಯ ಬಾರ್ ಬಳಿ ಇಂದು ಬೆಳಗಿನ ಜಾವ 4.30ರಲ್ಲಿ ವಿಜಯ್ ನಡೆದು ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ನಡೆಸಿ ಕೆಳಗೆ ಬಿದ್ದ ಆತನ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ದಯಾನಂದ್ , ಡಿಸಿಪಿ ಶೇಖರ್, ಎಸಿಪಿ ಉಮೇಶ್ ಸೇಠ್, ಮಂಡಿ ಠಾಣೆ ಇನ್ಸ್ಪೆಕ್ಟರ್ ತಳವಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ನಗರದ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಈತನ ವಿರುದ್ದ ರೌಡಿಶೀಟರ್ ತೆರೆಯಲಾಗಿತ್ತು. ಮೈಸೂರು, ಮಂಡ್ಯ ಸೇರಿದಂತೆ ಎಂಟು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತ ಇವುಗಳ ಪೈಕಿ ಎರಡು ಕೊಲೆ ಪ್ರಕರಣದ ಆರೋಪಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.  2009ರಲ್ಲಿ ಮೈಸೂರಿನಲ್ಲಿ ನಡೆದಿದ್ದ ಕರಿಯಪ್ಪ ಎಂಬುವರ ಕೊಲೆ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ಎರಡು ದಿನಗಳ ಹಿಂದಷ್ಟೇ ಈತ ಜಯಲಕ್ಷ್ಮಿಪುರಂ ಠಾಣೆಗೆ ಹೋಗಿ ನನ್ನ ವಿರುದ್ದ ಕೆಲವರು ಇಲ್ಲಸಲ್ಲದ ಆರೋಪ ಮಾಡಿ ಹಲ್ಲೆ ನಡೆಸುತ್ತಿದ್ದಾರೆ ಎಂದು ದೂರು ನೀಡಿದ್ದನು.
ದೂರಿನ ಆಧಾರದ ಮೇಲೆ ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಬುದ್ದಿವಾದ ಹೇಳಿ ಕಳುಹಿಸಿದ್ದ ಬೆನ್ನಲ್ಲೇ ಇಂದು ಬೆಳಗ್ಗೆ ಈತನ ಕೊಲೆಯಾಗಿದೆ.   ಶವವನ್ನು ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದೆ. ಈ ಸಂಬಂಧ ಮಂಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೊಲೆ ಆರೋಪಿಗಳಿಗಾಗಿ ತನಿಖೆ ಮುಂದುವರೆಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin