ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

channapatana-1

ಚನ್ನಪಟ್ಟಣ, ಸೆ.27- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಕಚೇರಿ ಎದುರು ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರತಿಭಟನೆ ನಡೆಸಿದರು.ಕಂದಾಯ ಇಲಾಖೆ, ಬೆಸ್ಕಾಂ, ಆರೋಗ್ಯ ಇಲಾಖೆ, ರೇಷ್ಮೆ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ರೈತರಿಗೆ ಶೋಷಣೆ ನಡೆಯುತ್ತಿದ್ದು, ಅವುಗಳನ್ನು ಸರಿಪಡಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತಸಂಘದ ವಿಭಾಗೀಯ ಉಪಾಧ್ಯಕ್ಷ ಎಂ.ರಾಮು, ಕಂದಾಯ ಇಲಾಖೆಯಲ್ಲಿ ತಮ್ಮ ಕೆಲಸಗಳಿಗೆ ರೈತರು ಪ್ರತಿದಿನವೂ ಅಲೆಯುತ್ತಿದ್ದರೂ ಯಾವುದೇ ಕೆಲಸ ಆಗುತ್ತಿಲ್ಲ, ಪಹಣಿ ತಿದ್ದುಪಡಿ, ಅಳತೆ ಕಾರ್ಯ, ಜಾತಿ ಪ್ರಮಾಣ ಪತ್ರ ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ, ಅನಗತ್ಯ ವಿಳಂಭ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ತೋಟಗಾರಿಕೆ, ಕೃಷಿ, ರೇಷ್ಮೆ ಇಲಾಖೆಗಳಲ್ಲಿ ರೈತರಿಗೆ ಸಮರ್ಪಕವಾಗಿ ಮಾಹಿತಿ ನೀಡುತ್ತಿಲ್ಲ, ಯೋಜನೆಗಳಿಗೆ ಅರ್ಹರನ್ನು ಆಯ್ಕೆ ಮಾಡುತ್ತಿಲ್ಲ, ರೇಷ್ಮೆ ಬೆಳೆಗಾರರಿಗೆ ಸಹಾಯಧನ ಇದುವರೆಗೂ ಸಿಕ್ಕಿಲ್ಲ, ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕಾಲಾಹರಣ ಮಾಡುತ್ತಿದ್ದಾರೆಂದು ದೂರಿದರು. ಪ್ರತಿಭಟನಾಕಾರರ ಮನವಿ ಆಲಿಸಿದ ತಹಸೀಲ್ದಾರ್, ತಾಲೂಕು ಅರೋಗ್ಯಾಧಿಕಾರಿ ಹಾಗೂ ಬೆಸ್ಕಾಂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಮುಖಂಡರಾದ ಕೆ.ಮಲ್ಲಯ್ಯ, ತಿಮ್ಮೇಗೌಡ, ರಾಮಕೃಷ್ಣಯ್ಯ, ಎಸ್.ಸಿದ್ದೇಗೌಡ, ಎಚ್.ಪಿ.ಪ್ರಕಾಶ್, ಸಿದ್ದಪ್ಪಾಜಿ, ಎಚ್.ಸಿ.ಕೃಷ್ಣಯ್ಯ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin