ಶುರುವಾಯ್ತು ಪಕ್ಷಾಂತರ ಪರ್ವ : ಜೆಡಿಎಸ್’ನಿಂದ ಬಿಜೆಪಿಗೆ ಇಬ್ಬರು ಶಾಸಕರು ಜಂಪ್

ಈ ಸುದ್ದಿಯನ್ನು ಶೇರ್ ಮಾಡಿ

BManappa-Vajjal--002

ಬೆಂಗಳೂರು,ಜ.18-ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಪಕ್ಷಂತರ ಪರ್ವ ಆರಂಭವಾಗಿದ್ದು, ಜೆಡಿಎಸ್‍ನ ಇಬ್ಬರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದು ಬಿಜೆಪಿ ಸೇರ್ಪಡೆಯಾದರು. ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಿವರಾಜ್ ಪಾಟೀಲ್ ಹಾಗೂ ಲಿಂಗಸಗೂರಿನ ಮಾನಪ್ಪ ವಜ್ಜಲ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ತೆನೆ ಹೊತ್ತ ಮಹಿಳೆಗೆ ಕೈ ಕೊಟ್ಟಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್, ಮುಖಂಡರಾದ ಆರ್.ಅಶೋಕ್, ರವಿಕುಮಾರ್ ಸೇರಿದಂತೆ ಮತ್ತಿತರ ಸಮ್ಮುಖದಲ್ಲಿ ಇಬ್ಬರು ಕಮಲ ಮುಡಿಗೇರಿಸಿಕೊಂಡರು.   ವಿಧಾನಸಭೆಯಿಂದ ನೇರವಾಗಿ ಮಲ್ಲೇಶ್ವರಂನಲ್ಲಿರುವ ಪಕ್ಷದ ಬಿಜೆಪಿ ಕಚೇರಿಗೆ ಆಗಮಿಸಿದ ಉಭಯ ನಾಯಕರನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿವರಾಜ್ ಪಾಟೀಲ್ ಹಾಗೂ ಮಾನಪ್ಪ ವಜ್ಜಲ್ ತಾವು ಕ್ರಮವಾಗಿ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಫರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಇಬ್ಬರಿಗೂ ಟಿಕೆಟ್ ನೀಡುವ ಆಶ್ವಾಸನೆಯನ್ನು ಈ ಹಿಂದೆಯೇ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪರಿವರ್ತನಾ ಯಾತ್ರೆ ವೇಳೆ ನೀಡಿದ್ದರು ಎನ್ನಲಾಗಿದೆ. ಪಕ್ಷಕ್ಕೆ ಬಂದರೆ ಟಿಕೆಟ್ ನೀಡಲಾಗುವುದು. ಯಾರು ಏನೇ ಅಡ್ಡಿಪಡಿಸಿದರೂ ತಲೆ ಕೆಡಿಸಿಕೊಳ್ಳದೆ ನೀವು ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷಕ್ಕೆ ಸೇರ್ಪಡೆಯಾಗಿ ಎಂದು ಯಡಿಯೂರಪ್ಪ ಭರವಸೆ ಕೊಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಮಾನಪ್ಪ ವಜ್ಜಲ್ ಮತ್ತು ಶಿವರಾಜ್ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ ಇಬ್ಬರು ಶಾಸಕರು ವಿಧಾನಸಭೆಯ ಸ್ಪೀಕರ್ ಕೆ.ಬಿ.ಕೋಳಿವಾಡ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಯಾವ ಕಾರಣಕ್ಕಾಗಿ ರಾಜೀನಾಮೆ ನೀಡುತ್ತಿದ್ದೀರಿ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಬೇಕೆಂದು ಸ್ಪೀಕರ್ ಸೂಚಿಸಿದ ಕಾರಣ ವೈಯಕ್ತಿಕ ಕಾರಣಗಳನ್ನು ಮುಂದಿಟ್ಟುಕೊಂಡು ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ವಿವರಿಸಿದ್ದಾರೆ. ಮೂಲಗಳ ಪ್ರಕಾರ ಸದ್ಯದಲ್ಲೇ ಇನ್ನಷ್ಟು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Facebook Comments

Sri Raghav

Admin