ಸಂಧಾನ ಯಶಸ್ವಿ, ಹೋರಾಟ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು, ಏ.19ರಂದು ಮಹತ್ವದ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

Anganawadi--03

ಬೆಂಗಳೂರು, ಮಾ.21- ವೇತನ ಹೆಚ್ಚಳ ಸೇರಿದಂತೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿನ್ನೆಯಿಂದ ಅಹೋರಾತ್ರಿ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದಂತಾಗಿದೆ. ತಮ್ಮ ಬೇಡಿಕೆ ಈಡೇರುವವರೆಗೂ ಪಟ್ಟು ಹಿಡಿದು ರಣಬಿಸಿಲಿಗೂ ಜಗ್ಗದೆ ಎಳೆಮಕ್ಕಳೊಂದಿಗೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ಬಳಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಇಂದು ನಿಡುಮಾಮಿಡಿ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯ ನಂತರ ಧರಣಿ ಕೈಬಿಡಲು ನಿರ್ಧಾರ ಕೈಗೊಳ್ಳಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಮುಖ್ಯಮಂತ್ರಿ ನಡೆಸಿದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ, ಸಾಹಿತಿ ಮರುಳ ಸಿದ್ದಪ್ಪ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ವರಲಕ್ಷ್ಮಿ, ಪ್ರಾಂತ ರೈತ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ ಮತ್ತಿತರರು ಪಾಲ್ಗೊಂಡಿದ್ದರು.  ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ನಡೆಸಲು ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ತಾವು ಧರಣಿ ಕೈ ಬಿಟ್ಟಿರುವುದಾಗಿ ವರಲಕ್ಷ್ಮಿ ತಿಳಿಸಿದ್ದಾರೆ.

ನಿನ್ನೆ ಬೆಳಗ್ಗೆಯಿಂದಲೇ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಆರಂಭಿಸಿದ್ದ ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದರಿಂದ ಅನಿರ್ದಿಷ್ಟಾವಾದಿ ಧರಣಿ ನಡೆಸುವ ನಿರ್ಧಾರವನ್ನು ಕೈ ಬಿಡಲಾಗಿದೆ ಎಂದಿದ್ದಾರೆ.  ಮುಖ್ಯಮಂತ್ರಿಗಳು ಏ.19ರಂದು ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ನಡೆಸಲು ಉದ್ದೇಶಿಸಿರುವ ಸಭೆಯ ನಡಾವಳಿ ಬಗ್ಗೆ ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ನೋಟಿಸ್ ನೀಡುವಂತೆ ಸೂಚನೆ ನೀಡಿದ್ದಾರೆ.  ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಶ್ರಮದ ಅರಿವು ನಮಗಿದೆ. ಈಗಾಗಲೇ ಸೌಲಭ್ಯಗಳನ್ನು ಸಾಕಷ್ಟು ನೀಡಲಾಗಿದೆ. ಆದರೆ, ಅವರಿಗಿರುವ ಇನ್ನಿತರೆ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಲು ಇದೇ ಏ.19ರಂದು ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದರು. ಪ್ರಮುಖವಾಗಿ ಅವರ ಬೇಡಿಕೆಗಳಿಗೆ ಆದ್ಯತೆ ನೀಡಲಾಗುವುದು. ಅವರ ಬಗ್ಗೆ ನಮಗೆ ಅನುಕಂಪವಿದೆ. ಹಾಗಾಗಿ ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin