ಸಭಾಧ್ಯಕ್ಷರ ಚುನಾವಣೆ, ರೇಸ್ ನಲ್ಲಿ ರಮೇಶ್‍ಕುಮಾರ್, ಸುರೇಶ್‍ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

Ramesh-Kumar--01
ಬೆಂಗಳೂರು, ಮೇ 24-ರಾಜ್ಯ ವಿಧಾನಸಭೆ ಅಧಿವೇಶನ ನಾಳೆ ನಡೆಯಲಿದ್ದು, ವಿಧಾನಸಭೆಯ ನೂತನ ಸಭಾಧ್ಯಕ್ಷರ ಆಯ್ಕೆ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿಶ್ವಾಸಮತ ಯಾಚನೆ ನಡೆಯಲಿದೆ. ವಿಧಾನಸಭಾಧ್ಯಕ್ಷರ ಚುನಾವಣಾ ಸ್ಪರ್ಧೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಬೆಂಬಲದೊಂದಿಗೆ ವಿಧಾನಸಭೆಯ ಮಾಜಿ ಅಧ್ಯಕ್ಷ ರಮೇಶ್‍ಕುಮಾರ್ ಹಾಗೂ ಬಿಜೆಪಿಯಿಂದ ಎಸ್.ಸುರೇಶ್‍ಕುಮಾರ್ ಅವರಿದ್ದಾರೆ.

ನಾಳೆ ಮಧ್ಯಾಹ್ನ 12.15ಕ್ಕೆ ವಿಧಾನಸಭೆ ಅಧಿವೇಶನ ಪ್ರಾರಂಭವಾಗಲಿದ್ದು, ಸಭಾಧ್ಯಕ್ಷರ ಚುನಾವಣೆ ನಡೆದು ನೂತನ ಸಭಾಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ಇದಾದ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಸಂಜೆ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದರು. ನಂತರ ನಡೆದ ಸಂಪುಟ ಸಭೆಯಲ್ಲಿ ಅಧಿವೇಶನ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ರಾಜ್ಯಪಾಲರು ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಎಸ್‍ಪಿ ಸರ್ಕಾರಕ್ಕೆ ಬಹುಮತ ಸಾಬೀತು ಒಪಡಿಸಲು 15 ದಿನಗಳ ಕಾಲಾವಕಾಶ ನೀಡಿದ್ದರೂ ಎರಡೇ ದಿನದಲ್ಲಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುತ್ತಿದ್ದಾರೆ. ನಾಳೆ ಸಂಜೆಯೊಳಗೆ ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ವಿಶ್ವಾಸ ಮತ ಪಡೆದು ಆ ನಂತರ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಗಳ ಬಗ್ಗೆಯೂ ವಿಶ್ವಾಸ ಮತಯಾಚನೆ ನಂತರ ಉಭಯ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ.
ನಾಳಿನ ಅಧಿವೇಶನ ಮುಗಿದ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಪಡಿಸಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸುತ್ತವೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin