ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ : ಸಂಪುಟ ಭರ್ತಿ ಕುರಿತು ವರಿಷ್ಠರ ಜೊತೆ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-Delhhi--01

ಬೆಂಗಳೂರು, ಏ.14 – ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳನ್ನು ಭರ್ತಿ ಮಾಡುವ ಸಂಬಂಧ ಇಂದು ನವದೆಹಲಿಗೆ ತೆರಳುತ್ತಿದ್ದು, ವರಿಷ್ಠರ ಜೊತೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧ ಮುಂಭಾಗ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೆ ಜನ್ಮದಿನದ ಪ್ರಯುಕ್ತ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಎರಡು ಸ್ಥಾನಗಳನ್ನು ಭರ್ತಿ ಮಾಡಬೇಕೆಂಬ ಅಭಿಪ್ರಾಯ ಕಾರ್ಯಕರ್ತರಿಂದ ವ್ಯಕ್ತವಾಗಿದೆ. ಆದಷ್ಟು ಶೀಘ್ರ ಎರಡು ಸ್ಥಾನಗಳನ್ನು ಭರ್ತಿ ಮಾಡಲಾಗುವುದು. ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಗುವುದು. ಸಂಪುಟ ಭರ್ತಿ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನವದೆಹಲಿಗೆ ತೆರಳಿ ಕೇಂದ್ರ ನಾಯಕರಿಗೆ ಅಭಿನಂದನೆ ಸಲ್ಲಿಸಲಾಗುವುದು. ಈ ವೇಳೆ ವರಿಷ್ಠರ ಜೊತೆ ಸಂಪುಟ ಭರ್ತಿ ಮಾಡುವುದು, ಸಾರ್ವತ್ರಿಕ ಚುನಾವಣೆ ಕಾರ್ಯತಂತ್ರ ಕುರಿತಂತೆ ಮಾತುಕತೆ ನಡೆಸುವುದಾಗಿ ಹೇಳಿದರು. ಸಂವಿಧಾನ ಶಿಲ್ಪಿ , ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ 126ನೆ ಜನ್ಮದಿನದ ಅಂಗವಾಗಿ ರಾಜ್ಯ ಸರ್ಕಾರ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಆರಂಭಿಸಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ಉದ್ಘಾಟಿಸಲಿದ್ದಾರೆ ಎಂದರು.  ಈ ವೇಳೆ ಸಮಾಜಕಲ್ಯಾಣ ಸಚಿವ ಎಚ್.ಆಂಜನೇಯ, ಸಂಸದ ಕೆ.ಎಚ್.ಮುನಿಯಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin