ಸಿ.ಟಿ.ರವಿ ವಿರುದ್ಧ ಬೇನಾಮಿ ಆಸ್ತಿ ಹೊಂದಿರುವ ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

CTRavi

ಚಿಕ್ಕಮಗಳೂರು, ಡಿ.1-ಕೇಂದ್ರ ಸರ್ಕಾರದ ಆದೇಶದಂತೆ ಎಲ್ಲ ಪಕ್ಷದ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಬೇನಾಮಿ ಆಸ್ತಿ ಹೊಂದಿರುವ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಚ್.ದೇವರಾಜ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇನಾಮಿ ಆಸ್ತಿ ಹೊಂದಿದವರ ಬಗ್ಗೆ ತನಿಖೆ ಕೈಗೊಂಡರೆ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರು ಸಿಕ್ಕಿಬೀಳುತ್ತಾರೆ. ಅವರ ಬೇನಾಮಿ ಆಸ್ತಿ ಬಗ್ಗೆ ದಾಖಲೆ ಸಮೇತ ಮಾಹಿತಿ ನೀಡಲು ನಾನು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸರ್ಕಾರಕ್ಕೆ ತೆರಿಗೆ ನೀಡದೆ ಬೇನಾಮಿ ಆಸ್ತಿ ಸಂಪಾದಿಸಿದವರ ಬಗ್ಗೆ ತನಿಖೆ ನಡೆಸಿ ಜೈಲಿಗೆ ಕಳುಹಿಸಬೇಕು. ಬೇನಾಮಿ ಆಸ್ತಿ ತನಿಖೆಯ ಪರಿಶೀಲನೆ ಕಾರ್ಯ ಚಿಕ್ಕಮಗಳೂರಿನಿಂದ ಆರಂಭವಾಗಲಿ ಎಂದು ಹೇಳಿದರು. ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಈಗಾಗಲೇ ಕಾಮಗಾರಿ ಯೋಜನೆಗೆ ಹಣ ಬಿಡುಗಡೆಯಾಗಿದ್ದು, ಕಾಮಗಾರಿ ಪ್ರಾರಂಭಿಸಲು ನಕಲಿ ಪರಿಸರವಾದಿಗಳು ವಾಸ್ತವ ಸ್ಥಿತಿ ಅರಿಯದೆ ಕೆಲಸಕ್ಕೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ನೀರಿನ ಸಮಸ್ಯೆ ಉಂಟಾಗಿದೆ. ಜಿಲ್ಲಾಡಳಿತ ಕೇವಲ ಸಭೆಗಳನ್ನು ನಡೆಸಿ ಕಾಲಹರಣ ಮಾಡುತ್ತಿದೆ. ಗ್ರಾಮಗಳ ಕಡೆ ಮುಖ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ. ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ಎಂ.ಬಿ.ರಮೇಶ್, ನಗರಸಭೆ ಮಾಜಿ ಅಧ್ಯಕ್ಷ ಜಮೀರ್ ಅಹಮ್ಮದ್, ಎಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಅಧ್ಯಕ್ಷ ಹೊಲದಗದ್ದೆ ಗಿರೀಶ್ ಉಪಸ್ಥಿತರಿದ್ದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin