ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ : 14 ಮಂದಿ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಜೈಪುರ,ನ.18- ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ 14 ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಇಂದು ನಡೆದಿದೆ. ಬಿಕಾನೇರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 11ರ ಶ್ರೀದುಂಗರಘರ್‍ನಲ್ಲಿ ಅಪಘಾತ ಸಂಭವಿಸಿದ್ದು, ಬಸ್ ಬಿಕಾನೇರ್‍ನಿಂದ ಜೈಪುರಕ್ಕೆ ಹೊರಟಿದ್ದಾಗ ದುಂಗಾರಘರ್ ಸಮೀಪ ಎದುರಾದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈವರೆಗೆ 9 ಮೃತದೇಹಗಳನ್ನು ಸ್ಥಳೀಯ ಪಿಬಿಎಂ ಆಸ್ಪತ್ರೆಗೆ ಶವ ಪರೀಕ್ಷೆಗೆ ರವಾನಿಸಲಾಗಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿರುವ ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ಘಟನೆ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಅಶೋಕ್ ಗೆಲ್ಲೋಟ್, ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಿಂದ ತೀವ್ರ ನೋವುಂಟಾಗಿದೆ.

ಮೃತರ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಶೋಕ ವ್ಯಕ್ತಪಡಿಸಿದ್ದಾರೆ. ಕಳೆದ ನ.12ರಂದು ಜೈಪುರದ ಪಲನ ಗ್ರಾಮದಲ್ಲಿ ಮಿನಿಬಸ್ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿ 7 ಮಂದಿ ಸಾವನ್ನಪ್ಪಿದ್ದರು. ಇದರ ಬೆನ್ನಲೇ ಇಂದು ಮತ್ತೊಂದು ಅಪಘಾತ ಸಂಭವಿಸಿದೆ.

Facebook Comments