3 ಬಾರಿ ಹೋದರು ಪ್ರಧಾನಿ ಭೇಟಿಗೆ ಅವಕಾಶವನ್ನೇ ಕೊಟ್ಟಿಲ್ಲ : ಸಿದ್ದರಾಮಯ್ಯ ತೀವ್ರ ಅಸಮಾಧಾನ

ಈ ಸುದ್ದಿಯನ್ನು ಶೇರ್ ಮಾಡಿ

Siddaramiaha-01

ಬೆಂಗಳೂರು, ಡಿ.10- ರಾಜ್ಯದಲ್ಲಿ ಭೀಕರ ಬರ ಕಾಡುತ್ತಿದೆ. ಪ್ರಧಾನಿ ಬಳಿಗೆ ಮೂರು ಬಾರಿ ನಿಯೋಗ ಕೊಂಡೊಯ್ದರೂ ಅವರು ಭೇಟಿಗೆ ಅವಕಾಶವನ್ನೇ ಕೊಟ್ಟಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರಮೋದಿಯವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪ ಅವರ 114ನೆ ಜನ್ಮದಿನದ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿ ಮೋದಿಯವರಿಗೆ ಒಕ್ಕೂಟದ ವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ. ಒಂದು ರಾಜ್ಯದ ಮುಖ್ಯಮಂತ್ರಿ ಸಮಸ್ಯೆ ಹೇಳಲು ಹೋದರೆ ಅವಕಾಶವನ್ನೇ ಕೊಡುತ್ತಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಎರಡು ವರ್ಷಗಳಿಂದ ಭೀಕರ ಬರ ಕಾಡುತ್ತಿದೆ. ಸಹಕಾರ ಒಕ್ಕೂಟದ ಬಗ್ಗೆ ಪ್ರಧಾನಿ ಮಾತನಾಡುತ್ತಾರೆ. ಆದರೆ, ರಾಜ್ಯದ ಸಮಸ್ಯೆಯನ್ನೇ ಕೇಳಲು ಮುಂದಾಗುವುದಿಲ್ಲ. ಮಹದಾಯಿ ಬಗ್ಗೆಯೂ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗಿತ್ತು. ನಿನ್ನೆ ಈ ಬಗ್ಗೆ ಚರ್ಚಿಸಲು ಪ್ರಧಾನಿಯವರ ಬಳಿ ಸಮಯ ಕೇಳಿದ್ದೆವು. ಆದರೂ ಭೇಟಿಗೆ ಅವಕಾಶ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಒಕ್ಕೂಟ ವ್ಯವಸ್ಥೆಯ ಬಗ್ಗೆ ಗೊತ್ತಿಲ್ಲ. ಆದರೂ ಏನೇನೋ ಮಾತನಾಡುತ್ತಾರೆ. ಇದು ಸರಿಯಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರ ಪ್ರಾಕೃತಿಕ ವಿಕೋಪಕ್ಕೆ ಹಣ ನೀಡಬೇಕು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪ್ರವಾಹ ಬಂದಿತ್ತು. ಆಗ ಪ್ರಧಾನಿಯಾಗಿದ್ದ ಮನಮೋಹನ್‍ಸಿಂಗ್ ಅವರು ರಾಜ್ಯಕ್ಕೆ 1500 ಕೋಟಿ ಹಣ ಬಿಡುಗಡೆ ಮಾಡಿದ್ದರು. ಆಗ ಅವರೇನಾದರೂ ಪ್ರಶ್ನೆ ಮಾಡಿದ್ದರೇ ಎಂದು ಹೇಳಿದರು. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಸಚಿವ ಸಂಪುಟದ ಮುಂದೆ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ಸರ್ಕಾರಿ ಕಚೇರಿಗಳಲ್ಲಿ ಕಡತ ವಿಲೇವಾರಿಯಾಗಿಲ್ಲ ಎಂದು ನಿಮಗೆ ಯಾರು ಹೇಳಿದರು ಎಂದು ಪ್ರಶ್ನಿಸಿದರಲ್ಲದೆ ಮೂರು ತಿಂಗಳಿಗೊಮ್ಮೆ ಕಡತ ವಿಲೇವಾರಿ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಬರ ಹಾಗೂ ಪ್ರವಾಹದಿಂದ ರಾಜ್ಯದಲ್ಲಿ 18 ಸಾವಿರ ಕೋಟಿ ನಷ್ಟವಾಗಿದೆ. ಅ.27ರಂದೇ ಈ ಬಗ್ಗೆ ಕೇಂದ್ರಕ್ಕೆ ವರದಿ ಕೊಡಲಾಗಿದೆ. ಬರ ನಷ್ಟ ಪರಿಹಾರ 4702 ಕೋಟಿ ಕೊಡಬೇಕು. ನೆರೆ ಪರಿಹಾರ 386 ಕೋಟಿ ನೀಡಬೇಕು. ಇದು ಸಾಕಾಗುವುದಿಲ್ಲ. ಇನ್ನೂ ಹೆಚ್ಚುವರಿ ಹಣವನ್ನು ರಾಜ್ಯ ಕೇಳಬೇಕಿದೆ. ಬೆಳೆ ನಷ್ಟವಾಗಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ವಿವರಿಸಿದರು.

ಆದರ್ಶ ಅನುಕರಣೀಯ:

ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪ ಅವರು ದೂರದೃಷ್ಟಿಯುಳ್ಳವರಾಗಿದ್ದರು. ನೀರಾವರಿ, ವಿದ್ಯುತ್ ಉತ್ಪಾದನೆಗೆ ಹೆಚ್ಚು ಒತ್ತು ಕೊಟ್ಟಿದ್ದರು. ಎಐಸಿಸಿ ಅಧ್ಯಕ್ಷರಾಗಿ ಶ್ರಮಿಸಿದ್ದರು. ಅವರ ಆದರ್ಶಗಳು ನಮಗೆಲ್ಲರಿಗೂ ಅನುಕರಣೀಯ ಎಂದು ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin