ಉಪಚುನಾವಣೆ : ಎರಡು ಕ್ಷೇತ್ರದಲ್ಲಿ 37 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.9- ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅ.11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎರಡೂ ಕ್ಷೇತ್ರಗಳಲ್ಲಿ 37 ಅಭ್ಯರ್ಥಿಗಳು 57 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ನಿನ್ನೆ ಅತಿ ಹೆಚ್ಚು ನಾಮ ಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಅ.13 ಕಡೆಯ ದಿನವಾಗಿದೆ. ಅ.30ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ನ.2ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.

ಮೂರೂ ರಾಜಕೀಯ ಪಕ್ಷಗಳು ಈ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ಶತಾಯ-ಗತಾಯ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಹೋರಾಟ ನಡೆಸುತ್ತಿವೆ. ತಮ್ಮದೇ ಆದ ಚುನಾವಣಾ ಕಾರ್ಯತಂತ್ರಗಳ ಮೂಲಕ ಮತದಾರರ ಓಲೈಕೆಗೆ ಮುಂದಾಗಿವೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಿವರಾಜ್ ಸಜ್ಜನರ್, ಕಾಂಗ್ರೆಸ್‍ನಿಂದ ಶ್ರೀನಿವಾಸ್ ಮಾನೆ, ಜೆಡಿಎಸ್‍ನಿಂದ ನಿಯಾಜ್ ಶೇಖ್ ಸೇರಿದಂತೆ 29 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಒಟ್ಟು 12 ನಾಮಪತ್ರಗಳು ಸಲ್ಲಿಕೆಯಾಗಿವೆ. ಹಾನಗಲ್ ಕ್ಷೇತ್ರದಲ್ಲಿ 27 ಪುರುಷರು, ಇಬ್ಬರು ಮಹಿಳೆಯರು ಸ್ರ್ಪಧಿಸಿದ್ದರೆ ಸಿಂಧಗಿ ಕ್ಷೇತ್ರದಲ್ಲಿ ಆರು ಪುರುಷರು ಹಾಗೂ ಇಬ್ಬರು ಮಹಿಳೆಯರು ಸ್ರ್ಪಸಿದ್ದಾರೆ. ಈ ಕ್ಷೇತ್ರದಲ್ಲಿ ಒಟ್ಟು 45 ನಾಮಪತ್ರಗಳು ಸಲ್ಲಿಕೆಯಾಗಿವೆ. ಸಿಂಧಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ್ ಬೂಸನೂರ್, ಕಾಂಗ್ರೆಸ್‍ನಿಂದ ಅಶೋಕ್ ಮನಗೂಳಿ, ಜೆಡಿಎಸ್‍ನಿಂದ ನಜಿಯಾ ಶಕೀಲ್ ಅಹಮ್ಮದ್ ಅಂಗಡಿ ಸೇರಿದಂತೆ 8 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿರುವುದ ರಿಂದ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ನಾಯಕರು, ಮುಖಂಡರು ಚುನಾವಣಾ ಪ್ರಚಾರ ಕೈಗೊಂಡು ಮತದಾರರನ್ನು ಓಲೈಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ.

Facebook Comments