ಜಾರಕಿಹೊಳಿ ಬಂಧನಕ್ಕೆ ಯುವತಿ ಪರ ವಕೀಲ ಜಗದೀಶ್ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.1- ಅತ್ಯಾಚಾರದ ಆರೋಪಿ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸಂತ್ರಸ್ತೆ ಪರ ವಕೀಲ ಕೆ.ಎನ್.ಜಗದೀಶ್ ಒತ್ತಾಯಿಸಿದ್ದಾರೆ. ಫೇಸ್‍ಬುಕ್ ಲೈವ್‍ನಲ್ಲಿ ಮಾತನಾಡಿರುವ ಅವರು, ಪ್ರಕರಣದಲ್ಲಿ ಅಗತ್ಯವಾದಷ್ಟು ಗೌಪ್ಯತೆ ಕಾಪಾಡಿಕೊಂಡು ಸಾರ್ವಜನಿಕರಿಗೆ ಮಾಹಿತಿ ನೀಡುವ ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ಸಂತ್ರಸ್ತ ಯುವತಿಯಿಂದ ಸಿಆರ್‍ಪಿಸಿ 164, 161 ಪ್ರಕಾರ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಸ್ಥಳ ಮಹಜರು ನಡೆದಿದೆ. ಇಷ್ಟೆಲ್ಲ ಆದರೂ ಪೊಲೀಸರು ಆರೋಪಿಯನ್ನು ಬಂಧಿಸಿಲ್ಲ ಎಂದು ಆಕ್ಷೇಪಿಸಿದ್ದಾರೆ.

ಸಾಂವಿಧಾನದ ಹುದ್ದೆ ಅಲಂಕರಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅತ್ಯಾಚಾರದ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರಕ್ಕೆ ಬರುವಂತೆ ಕರೆಯುತ್ತಿದ್ದಾರೆ. ಆಡಳಿತ ಪಕ್ಷದ ಎಂಎಲ್‍ಎ ಎಂಬ ಕಾರಣಕ್ಕಾಗಿ ಪೊಲೀಸರು ಆರೋಪಿಯನ್ನು ಬಂಧಿಸುತ್ತಿಲ್ಲ. ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ದುರುಪಯೋಗವಾಗುತ್ತಿದೆ. ಆರೋಪಿಗೆ ರಕ್ಷಣೆ ನೀಡಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜನರು ಬೀದಿಗೆ ಬಂದು ಪ್ರತಿಭಟನೆ ನಡೆಸುವ ಮುನ್ನ ಆರೋಪಿಯನ್ನು ಬಂಧಿಸಬೇಕು ಎಂದು ಪೊಲೀಸರನ್ನು ಆಗ್ರಹಿಸಿರುವ ಅವರು, ಎಸ್‍ಐಟಿ ತನಿಖಾಧಿಕಾರಿಗಳ ನಡವಳಿಕೆಗಳು ಶಂಕಾಸ್ಪದವಾಗಿವೆ. ನಿನ್ನೆ ಸಂತ್ರಸ್ತ ಯುವತಿ ಹೇಳಿಕೆ ನೀಡಿ ಹೊರಬರುವಾಗ ವಿಡಿಯೋ ರೆಕಾರ್ಡ್ ಮಾಡಿರುವ ಪೊಲೀಸರು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಸಂಬಂಧಿಸಿದವರಿಗೆ ದೂರು ನೀಡಿದ್ದೇನೆ ಎಂದು ಹೇಳಿದರು.

ಸರ್ಕಾರ ಎಸ್‍ಐಟಿ ಅಧಿಕಾರಿ ಗಳಿಗೆ ಸ್ವತಂತ್ರವಾಗಿ ತನಿಖೆ ನಡೆಸಲು ಬಿಡದೆ ಕೈ ಕಟ್ಟಿ ಹಾಕಿದೆ. ಆರೋಪಿಯನ್ನು ಬಂಧಿಸಲು ಸಾಧ್ಯವಾಗದೆ ಇದ್ದರೆ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಶಾಸಕ, ಶ್ರೀಮಂತ, ಪ್ರಭಾವಿ ಎಂಬ ಕಾರಣಕ್ಕೆ ಆರೋಪಿಯನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ವಕೀಲರು ಹೇಳಿದ್ದು, ಸರ್ಕಾರ ಆರೋಪಿಯನ್ನು ಬಂಧಿಸದೆ ಇರುವ ಬಗ್ಗೆ ಸಾರ್ವಜನಿಕರು ತಮ್ಮ ಅಭಿಪ್ರಾಯ ಹಂಚಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Facebook Comments