ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.23- ವೇತನ ಹೆಚ್ಚಳ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆಯಿಂದ ರಾಜಧಾನಿಗೆ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಇಂದು ಬೃಹತ್ ಪ್ರತಿಭಟನೆ ನಡೆಸಿದರು. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಗಮನ ಸೆಳೆಯಲು ಎರಡು ದಿನಗಳ ಅಂಗನವಾಡಿಗಳ ಬಂದ್‍ಗೆ ಕರೆ ಕೊಟ್ಟಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಹಾಗೂ ಎಐಟಿಯುಸಿ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ನಮ್ಮ ಸೇವೆಯನ್ನು ಖಾಯಂಗೊಳಿಸಬೇಕು. ನಮಗೆ ವೇತನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು. ಈ ಬಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಅಂಗನವಾಡಿಗಳ ಅಭಿವೃದ್ಧಿ ಹಾಗೂ ನಮ್ಮ ವೇತನಕ್ಕೆ ಹೆಚ್ಚು ಅನುದಾನ ನೀಡಬೇಕೆಂದು ಒತ್ತಾಯಿಸಿದರು. ನಮ್ಮ ಬೇಡಿಕೆಗಳ ಈಡೇರಿಕೆಗೆ ನಾವು ಹಲವಾರು ಬಾರಿ ಪ್ರತಿಭಟನೆ ಮಾಡಿದ್ದೇವೆ. ಆದರೂ ಸರ್ಕಾರ ನಮ್ಮ ಪರ ನಿಲುವು ವ್ಯಕ್ತಪಡಿಸಿಲ್ಲ. ನಮ್ಮ ಸೇವೆಯನ್ನು ಖಾಯಂಗೊಳಿಸಿಲ್ಲ. ನಮಗೆ ಪಿಂಚಣಿ, ಕನಿಷ್ಠ ವೇತನದಂತಹ ಯಾವುದೇ ಸೌಲಭ್ಯವಿಲ್ಲ. ನಮ್ಮ ಆರೋಗ್ಯದ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಎರಡು ದಿನಗಳ ಕಾಲ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶಶಿಕಲಾ ಜೊಲ್ಲೆ ಅವರು ಭರವಸೆ ನೀಡುವವರೆಗೂ ನಾನು ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ. ಪ್ರತಿಭಾರಿಯೂ ನಮಗೆ ಆಶ್ವಾಸನೆ ನೀಡುವುದೇ ಆಗಿದೆ. ನಮ್ಮ ಬೇಡಿಕೆಗಳು ಈಡೇರುತ್ತಿಲ್ಲ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಒಟ್ಟು 1.30ಲಕ್ಷ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಇದ್ದೇವೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಖಾಯಂ ಮಾಡಬೇಕು ಮತ್ತು ವೇತನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು. ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರತಿಭಟನೆ ನಡೆಸಿದರು. ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೆ ಬೃಹತ್ ರ್ಯಾಲಿ ನಡೆಸಿ ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

Facebook Comments