ಸಂಪುಟದಲ್ಲಿ ಅವಕಾಶ ಸಿಗಲಿದೆ : ಅರಗ ಜ್ಞಾನೇಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.2- ಸಚಿವ ಸಂಪುಟದಲ್ಲಿ ಖಂಡಿತವಾಗಿಯೂ ತಮಗೆ ಅವಕಾಶ ಸಿಕ್ಕೇ ಸಿಗುತ್ತದೆ ಎಂದು ಶಾಸಕ ಅರಗ ಜ್ಞಾನೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ 100ಕ್ಕೆ ನೂರರಷ್ಟು ಇರುತ್ತೇನೆ. ಖಂಡಿತವಾಗಿಯೂ ನನಗೆ ಸಚಿವನಾಗುವ ಆಸೆಯಿದೆ. ಈ ಬಾರಿ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ಕೈಬಿಡುವುದಿಲ್ಲ ಎಂದರು.

ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರಲ್ಲಿ ವಿಶೇಷತೆ ಏನೂ ಇಲ್ಲ. ಬೆಂಗಳೂರಿಗೆ ಬಂದಾಗಲೆಲ್ಲ ಅವರನ್ನು ಭೇಟಿ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಯಡಿಯೂರಪ್ಪ ಅವರಿಗೆ ನನ್ನ ಮೇಲೆ ಅನುಕಂಪವಿದೆ. ಅವರ ಜೊತೆಯಲ್ಲೇ ಪಕ್ಷ ಕಟ್ಟಿದ್ದೇನೆ. ಬೆಳೆದು ಬಂದಿದ್ದೇನೆ. ಹೀಗಾಗಿ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನನ್ನನ್ನು ಖಂಡಿತವಾಗಿಯೂ ಪರಿಗಣಿಸುತ್ತಾರೆ. ಯಾವುದೇ ಕಾರಣಕ್ಕೂ ಕೈ ಬಿಡುವುದಿಲ್ಲ ಎಂಬ ಅಚಲ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಕಳೆದ 40 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರು ನಾಲ್ಕು ಬಾರಿ ನನ್ನನ್ನು ಚುನಾಯಿಸಿದ್ದಾರೆ. ಹೀಗಾಗಿ ಸಚಿವನಾಗುವ ಖಾತ್ರಿಯಿದೆ ಎಂದು ಅವರು ಹೇಳಿದರು.

Facebook Comments