ಆ.30ಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಆ.26-ಆಡಳಿತಾರೂಢ ಬಿಜೆಪಿಯಲ್ಲಿ ಉಂಟಾಗಿರುವ ಅಸಮಾಧಾನ, ಭಿನ್ನಮತ, ಸಚಿವರ ಖಾತೆ ಕ್ಯಾತೆ ಸೇರಿದಂತೆ ಹತ್ತು ಹಲವು ಸಮಸ್ಯೆಗಳ ನಡುವೆಯೇ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇದೇ 30ರಿಂದ ನಾಲ್ಕು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. 30ರಂದು ಬೆಂಗಳೂರಿಗೆ ಆಗಮಿಸಲಿರುವ ಅರುಣ್ ಸಿಂಗ್ ಪಕ್ಷದ ಪ್ರಮುಖರ ಜೊತೆ ಸಭೆ ನಡೆಸಿ ಬಳಿಕ ಹಳೇ ಮೈಸೂರು ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮೈಸೂರು, ಮಂಡ್ಯ ಸೇರಿದಂತೆ ಮತ್ತಿತರ ಕಡೆ ಪ್ರವಾಸ ಮಾಡಲಿರುವ ಅರುಣ್ ಸಿಂಗ್ ಪಕ್ಷದ ಸಂಘಟನೆಗೆ ವಿಶೇಷ ಗಮನಹರಿಸಲಿದ್ದಾರೆ. ಪ್ರವಾಸದ ಸಂದರ್ಭದಲ್ಲಿ ಅವರು ಹಳೆ ಮೈಸೂರು ಭಾಗದಲ್ಲಿ ಬೂತ್ ಮಟ್ಟದಿಂದ ಪಕ್ಷವನ್ನು ಹಳೆ ಮೈಸೂರು ಭಾಗದಲ್ಲಿ ಸಂಘಟಿಸಲು ವಿಶೇಷ ಗಮನ ಹರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದೇ ಸಂದರ್ಭದಲ್ಲಿ ಸಚಿವರು ಮತ್ತು ಶಾಸಕರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಲಿರುವ ಅವರು ಉಳಿದಿರುವ ಅವಧಿಯಲ್ಲಿ ಎಲ್ಲ ಸಚಿವರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಬಳಿ ಮಟ್ಟದಿಂದ ಪಕ್ಷವನ್ನು ಸಂಘಟಿಸಲು ಸೂಚನೆ ನೀಡುವರು. ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಜೊತೆಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

ಇದು 2023ರ ಚುನಾವಣೆಗೆ ಇದು ದಿಕ್ಸೂಚಿಯಾಗಲಿದ್ದು, ತಾಲ್ಲೂಕು , ಜಿಲ್ಲಾ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸಲು ಅರುಣ್ ಸಿಂಗ್, ಪಕ್ಷದ ಪ್ರಮುಖರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.

Facebook Comments