ಬೆಲೆ ಏರಿಕೆ ಬಗ್ಗೆ ಕೇಳಿದ್ದಕ್ಕೆ ಬಿಜೆಪಿ ಉಸ್ತುವಾರಿ ಅರುಣ್‍ಸಿಂಗ್‍ ಉಡಾಫೆ ಉತ್ತರ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.2- ಪೆಟ್ರೋಲ್, ಡೀಸೆಲ್, ಎಲ್‍ಪಿಜಿ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ನನ್ನನ್ನು ಕೇಳಬೇಡಿ. ಅದಕ್ಕೆ ಪ್ರತಿಕ್ರಿಯಿಸಲು ರಿಸರ್ವ್ ಬ್ಯಾಂಕ್ ಆಫ್ ಗೌರ್ನರ್ ಇದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉಡಾಫೆ ಉತ್ತರ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಬಗ್ಗೆ ನಾನು ಪ್ರತಿಕ್ರಿಯಿಸಲು ಆರ್‍ಬಿಐ ಗೌರ್ನರ್ ಅಲ್ಲ. ಬೆಲೆ ಏರಿಕೆಯಾಗಲು ಏನು ಕಾರಣ ಎಂಬುದಕ್ಕೆ ಸಂಬಂಧಪಟ್ಟವರು ಉತ್ತರ ನೀಡುತ್ತಾರೆ. ನಾನೇಕೆ ಪ್ರತಿಕ್ರಿಯಿಸಲಿ ಎಂದರು.

ದೇಶದ ಹಣದುಬ್ಬರ ನಿಯಂತ್ರಣ ದಲ್ಲಿದೆ. ನಾನು ಬೆಲೆ ಏರಿಕೆ ಬಗ್ಗೆ ಮಾತನಾಡಲು ಅರ್ಥಶಾಸ್ತ್ರಜ್ಞನೂ ಅಲ್ಲ, ಆರ್‍ಬಿಐ ಗೌರ್ನರೂ ಅಲ್ಲ. ಕೆಲವು ಸಂದರ್ಭಗಳಲ್ಲಿ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಕೇಂದ್ರ ಸರ್ಕಾರದ ತೀರ್ಮಾನವನ್ನು ಸಮರ್ಥಿಸಿಕೊಂಡರು. ಟೊಮ್ಯೋಟೊ, ಈರುಳ್ಳಿ, ಪೆಟ್ರೋಲ್, ಡಿಸೇಲ್ ಸೇರಿದಂತೆ ಯಾವುದಾದರು ಒಂದು ವಸ್ತುಗಳ ಬಗ್ಗೆ ಪ್ರಶ್ನೆ ಕೇಳಿದರೆ ಉತ್ತರಿಸಬಲ್ಲೆ. ನೀವು ಏಕಕಾಲಕ್ಕೆ ಎಲ್ಲದರ ಬಗ್ಗೆ ಪ್ರಶ್ನೆ ಕೇಳಿದರೆ ನಾನು ಉತ್ತರಿಸಲು ಸಾಧ್ಯವಿಲ್ಲ ಎಂದು ನುಣುಚಿಕೊಂಡರು.

ಹಿಂದಿನ ಯುಪಿಎ ಸರ್ಕಾರ ದಲ್ಲೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿತ್ತು. ಆಗ ಪ್ರಧಾನಿಯಾಗಿದ್ದ ಡಾ.ಮನ ಮೋಹನ್‍ಸಿಂಗ್ ಅವರು ನೂರು ದಿನದಲ್ಲಿ ಬೆಲೆ ಏರಿಕೆ ನಿಯಂತ್ರಣಕ್ಕೆ ಬರುತ್ತದೆ ಎಂದು ಹೇಳಿದ್ದರು. ಅಂದು ಅವರಿಂದಲೇ ಆಗಿರಲಿಲ್ಲ. ಈಗ ಕಾಂಗ್ರೆಸ್‍ನವರು ನಮ್ಮನ್ನು ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಯುಪಿಎ ಸರ್ಕಾರದ ಅವಧಿಯಲ್ಲೇ ಶೇ.15ರಷ್ಟು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರದಲ್ಲಿ ಬೆಲೆ ಏರಿಕೆ ನಿಯಂತ್ರಣದಲ್ಲಿದೆ. ವಿರೋಧ ಪಕ್ಷಗಳು ಸುಮ್ಮನೆ ಸುಳ್ಳು ಆರೋಪ ಮಾಡುತ್ತಿವೆ ಎಂದು ಟೀಕಿಸಿದರು.

ಬೇರೆ ಬೇರೆ ಯೋಜನೆಗಳಿಗೆ ಹಣ ಒದಗಿಸಲು ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗುತ್ತದೆ. ಕೇಂದ್ರ ಸರ್ಕಾರವು ಹಣದುಬ್ಬರವನ್ನು ನಿಯಂತ್ರಣದಲ್ಲಿಟ್ಟಿದೆ. ಸಮಯ ಬಂದಾಗ ಸಂಬಂಧಪಟ್ಟ ಸಚಿವರು ಪ್ರತಿಕ್ರಿಯೆ ನೀಡುತ್ತಾರೆ ಎಂದರು. ಭಾರತ್‍ಮಾಲಾ ಯೋಜನೆಯಡಿ ಸಾವಿರಾರು ಕಿ.ಮೀ. ರಸ್ತೆ ನಿರ್ಮಾಣ ಮಾಡಿದ್ದೇವೆ. ಟೊಮ್ಯಾಟೋ, ಪೆಟ್ರೋಲ್ ಬೆಲೆ ಹೆಚ್ಚಳ ಮಾಡಿದ್ದೀರಿ ಎಂದು ಕೇಂದ್ರ ಸರ್ಕಾರವನ್ನು ಟೀಕಿಸಬೇಡಿ ಎಂದು ಮನವಿ ಮಾಡಿದರು.

ಕರ್ನಾಟಕದಲ್ಲಿ ತಮ್ಮದೇ ಸರ್ಕಾರ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಸಹಕಾರ ಕೊಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಮನ್ವಯತೆಯಿಂದ ಕೆಲಸ ಮಾಡುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಾನು ಪಕ್ಷವನ್ನು ಬಲ ಪಡಿಸಲು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಹಳೆ ಮೈಸೂರು ಭಾಗದಲ್ಲಿ ಬೇರು ಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ಕೊಡಲಾಗಿದೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದರು.

ಪ್ರಧಾನಿ ಮೋದಿ ಅವರು ಬಡವರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಕೃಷಿ ಸನ್ಮಾನ್ ಯೋಜನೆಯಡಿ ಪ್ರತಿ ವರ್ಷ ದೇಶದ ಪ್ರತಿಯೊಬ್ಬ ರೈತರ ಖಾತೆಗೆ ಆರು ಸಾವಿರ ಹಾಕುತ್ತಿದ್ದಾರೆ. ಆಯುಷ್ಮಾನ್ ಭಾರತ್, ಜಲಮಿಷನ್ ಯೋಜನೆ ಸೇರಿದಂತೆ ಹತ್ತು ಹಲವು ಜನಪರವಾದ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದೇವೆ. ಇವೆಲ್ಲವೂ ಜನ ಸಾಮಾನ್ಯರಿಗೆ ತಲುಪಬೇಕು ಎಂದು ಹೇಳಿದರು.

ಸರ್ಕಾರಕ್ಕೆ ತೆರಿಗೆ ಸಂಗ್ರಹ ಆಗಬೇಕಿದೆ. ಡೀಸೆಲ್, ಪೆಟ್ರೋಲ್ ಬೆಲೆ ತಾತ್ಕಾಲಿಕ ಏರಿಕೆ. ಮುಂದಿನ ದಿನಗಳಲ್ಲಿ ಕಡಿಮೆಯಾಗಲಿದೆ ಎಂದರು. ಮುಂಬರುವ ಚುನಾವಣೆಯಲ್ಲಿ ವಿಶೇಷವಾಗಿ ಹಳೆ ಮೈಸೂರು ಭಾಗದಲ್ಲಿ ನಾವು ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂಬ ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಇದಕ್ಕಾಗಿ ಹೆಚ್ಚಿನ ಶ್ರಮ ಹಾಕುತ್ತೇವೆ. ಜಿಪಂ ಚುನಾವಣೆಯಲ್ಲಿ ನಾವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದ್ದೇವೆ
ಎಂದು ಅವರು ವಿಶ್ವಾಸ ವ್ಯಕ್ತಪಡಿಸಿ ದರು.

Facebook Comments