ನಿವೃತ್ತರಾದವರನ್ನು ಕಾಂಗ್ರೆಸ್‍ ಅಭ್ಯರ್ಥಿಯನ್ನಾಗಿ ಮಾಡಿದೆ : ಆರ್.ಅಶೋಕ್ ಲೇವಡಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.10- ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಯಾರೂ ಅಡ್ಡಿಪಡಿಸಿಲ್ಲ. ಕೊರೊನಾ ಸಂದರ್ಭದಲ್ಲಿ ಅದ್ಧೂರಿಯಾಗಿ ಅಧಿಕಾರ ಸ್ವೀಕರಿಸಿಕೊಳ್ಳುವ ಕಾರ್ಯಕ್ರಮ ಮಾಡಿಕೊಳ್ಳಬೇಕು ಎಂದಿದ್ದರೆ ಅವರಿಗಾಗಿ ಪ್ರತ್ಯೇಕ ಕಾನೂನು ತಿದ್ದುಪಡಿ ಮಾಡಬೇಕಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದರು.

ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ರಾಜ್ಯ ಹಾಗೂ ದೇಶಕ್ಕೆ ಬಹಳ ಮುಖ್ಯ. ದೇಶದ 130 ಕೋಟಿ ಜನರಿಗಾಗಿ ಲಾಕ್‍ಡೌನ್ ಮಾಡಲಾಗಿದ್ದು, ಅದಕ್ಕೆ ಸಂಬಂಧಪಟ್ಟಂತೆ ಬಿಗಿಯಾದ ಕಾನೂನುಗಳನ್ನು ರೂಪಿಸಲಾಗಿದೆ.

ಈಗ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಈ ಹಿನ್ನೆಲೆಯಲ್ಲೇ ಅವಕಾಶ ನಿರಾಕರಿಸಲಾಗಿದೆ. ಅದನ್ನು ಮುಂದಿಟ್ಟುಕೊಂಡು ನಮ್ಮ ಪದಗ್ರಹಣಕ್ಕೆ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪ ಮಾಡುತ್ತಿದ್ದಾರೆ ಎಂದರು.

ಮೊದಲಿನಿಂದಲೂ ಸರ್ಕಾರಕ್ಕೂ ಕಾಂಗ್ರೆಸ್‍ಗೂ ಎಣ್ಣೆ-ಸೀಗೆಕಾಯಿ ಇದ್ದಂತೆ. ಅವರು ಅನಗತ್ಯವಾಗಿ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಕಾಂಗ್ರೆಸ್ ವಂಶಪಾರಂಪರ್ಯ ರಾಜಕಾರಣಕ್ಕೆ ಮಣೆ ಹಾಕ್ಕಿದ್ದು, ನಿವೃತ್ತರಾದವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ ಎಂದು ಟೀಕಿಸಿದರು.

ಬಿಜೆಪಿ ತನ್ನ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟಿದೆ. ಇದನ್ನು ನೋಡಿ ಪಾಠ ಕಲಿಯಿರಿ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಹಿನ್ನಡೆಯಾಗಿಲ್ಲ. ಕೋರ್‍ಕಮಿಟಿ ಸಭೆಯಲ್ಲಿ ನಾನೂ ಇದ್ದೆ.

ಹೈಕಮಾಂಡ್‍ನ ಪ್ರಮುಖರು ಕಾರ್ಯಕರ್ತರ ಹೆಸರು ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರಿಗೆ ಕೇಳಿದ್ದರು. ರಾಜ್ಯ ನಾಯಕರ ಜತೆ ಸಮಾಲೋಚನೆ ನಡೆಸಿದ ಬಳಿಕವೇ ಅಭ್ಯರ್ಥಿಗಳ ಆಯ್ಕೆ ಆಯಿತು ಎಂದರು.

ವಿಧಾನಪರಿಷತ್ ಚುನಾವಣೆಗೂ ಚರ್ಚೆಯ ಬಳಿಕವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಬಿಜೆಪಿ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಹಾಗೂ ವರಿಷ್ಠರು ನೀಡಿದ ಭರವಸೆಗಳನ್ನು ಪರಿಗಣಿಸಬೇಕಾಗುತ್ತದೆ. ವಿಧಾನಪರಿಷತ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ವರಿಷ್ಠರ ಜತೆ ಚರ್ಚಿಸಿದ ಬಳಕವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅಶೋಕ್ ಹೇಳಿದರು.

Facebook Comments