ಆಟೋಗೆ ಕಾರು ಡಿಕ್ಕಿ, ಮೂವರು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಕುಣಿಗಲ್, ಮಾ.7- ಚಲಿಸುತ್ತಿದ್ದ ಆಟೋಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಉತ್ತರಹಳ್ಳಿ ನಿವಾಸಿಗಳಾದ ತಂದೆ ನಾರಾಯಣಗೌಡ (45), ತಾಯಿ ಪದ್ಮ(38), ಮಗ ಸಿದ್ದಾರ್ಥ ಮೃತಪಟ್ಟ ದುರ್ದೈವಿಗಳು.

ಇವರು ಮೂಲತಃ ನಾಗಮಂಗಲ ತಾಲೂಕಿನವರಾಗಿದ್ದು. ಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರಾಮಕ್ಕೆ ಆಟೋದಲ್ಲಿ ಮೂವರು ತೆರಳಿದ್ದರು. ನಿನ್ನೆ ಮೂವರು ಬೆಂಗಳೂರಿಗೆ ವಾಪಸ್ ಬರುತ್ತಿದ್ದಾಗ ರಾಜ್ಯ ಹೆದ್ದಾರಿ 75ರ ಹುಕ್ರ್ಕೆನಹಳ್ಳಿ ಸೇತುವೆ ಬಳಿ ಹಾಸನದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಆಟೋಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಹೆದ್ದಾರಿ ರಸ್ತೆಯಿಂದ ಸರ್ವಿಸ್ ರಸ್ತೆಗೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ ಆಟೋದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಖಾಸಗಿ ಆಸ್ಪತ್ರೆಯ ವೈದ್ಯೆ ಡಾ. ಭವ್ಯ ಆಕೆಯ ಸಹೋದರ ಅರುಣ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಇವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪಿಎಸ್‍ಐ ಪುಟ್ಟೇಗೌಡ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments