ಸಿಎಂ ಮನೆಗೆ ಬಿ.ಎಲ್.ಸಂತೋಷ್ ಭೇಟಿ, ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.25- ಸಚಿವ ಸಂಪುಟ ವಿಸ್ತರಣೆ ಗರಿಗೆದರಿರುವ ಬೆನ್ನಲ್ಲೇ ಬಿಜೆಪಿ ಸಂಘಟನಾ ಪ್ರಧಾನಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಭಾರೀ ಮಹತ್ವ ಪಡೆದುಕೊಂಡಿದೆ. ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ ದವಳಗಿರಿ ನಿವಾಸಕ್ಕೆ ಆಗಮಿಸಿದ ಸಂತೋಷ್, ಮುಖ್ಯಮಂತ್ರಿಗಳ ಜತೆ 15 ನಿಮಿಷಗಳಿಗೂ ಹೆಚ್ಚು ಕಾಲ ರಹಸ್ಯವಾಗಿ ಮಾತುಕತೆ ನಡೆಸಿದ್ದು ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಇವರಿಬ್ಬರ ನಡುವೆ ಮಾತುಕತೆ ನಡೆಯುವ ಸಂದರ್ಭದಲ್ಲಿ ಸಂತೋಷ್ ಮತ್ತು ಯಡಿಯೂರಪ್ಪ ಹೊರತುಪಡಿಸಿದರೆ ಬೇರೆ ಯಾರಿಗೂ ಅವಕಾಶ ನೀಡಿರಲಿಲ್ಲ. ಅಷ್ಟರ ಮಟ್ಟಿಗೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗಿತ್ತು. ನಿನ್ನೆಯಷ್ಟೇ ದಾವೋಸ್‍ನಿಂದ ಹಿಂದಿರುಗಿದ ಯಡಿಯೂರಪ್ಪ 2-3 ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದ್ದರು.
ಹೀಗಾಗಿ ಸಂಪುಟ ವಿಸ್ತರಣೆ ಮಾಡುವ ಜತೆಗೆ ಪುನಾರಚನೆ ಮಾಡುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈಗಿರುವ ಕೆಲವು ಸಚಿವರಿಗೆ ಕೋಕ್‍ನೀಡಿ ಅವರನ್ನು ಪಕ್ಷದ ಸಂಘಟನೆಗೆ ನಿಯೋಜನೆ ಮಾಡುವುದು, ಅತಿ ಹೆಚ್ಚು ಬಾರಿ ಗೆದ್ದಿರುವ ಹಿರಿಯರಿಗೆ ಸಂಪುಟಕ್ಕೆ ತೆಗೆದುಕೊಳ್ಳುವ ಬಗ್ಗೆಯೂ ಮಾತುಕತೆ ನಡಸಿರುವ ಸಾಧ್ಯತೆ ಇದೆ ಎಂದು ಆಪ್ತ ಮೂಲಗಳು ತಿಳಿಸಿವೆ. ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಸಂತೋಷ್ ಬಿಎಸ್‍ವೈ ಅವರನ್ನು ಭೇಟಿಯಾಗಿದ್ದಾರೆ. ಸಾಮಾನ್ಯವಾಗಿ ಪ್ರಮುಖ ವಿಷಯಗಳ ಚರ್ಚೆ ಹೊರತುಪಡಿಸಿದರೆ ಸಣ್ಣಪುಟ್ಟ ವಿಷಯಗಳಿಗೆ ಅವರು ಎಂದಿಗೂ ತಲೆ ಹಾಕುವವರಲ್ಲ.

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆ ಮೇರೆಗೆ ಸಂತೋಷ್ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಿ ಉಪ ಚುನಾವಣೆಯಲ್ಲಿ ಗೆದ್ದಿರುವ ಎಷ್ಟು ಮಂದಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಮೂಲ ಬಿಜೆಪಿಗರಿಗೆ ಎಷ್ಟು ಸ್ಥಾನ ಕೊಡಬೇಕು ಎಂಬುದರ ಬಗ್ಗೆಯೂ ಚರ್ಚೆ ಮಾಡಿದ್ದಾರೆ. ಹನ್ನೊಂದು ಮಂದಿ ಶಾಸಕರಲ್ಲಿ ಕನಿಷ್ಠ 8ರಿಂದ 9 ಶಾಸಕರನ್ನು ಮಾತ್ರ ಮೊದಲ ಹಂತದಲ್ಲಿ ಸಂಪುಟಕ್ಕೆ ತೆಗೆದುಕೊಳ್ಳಬೇಕು.

ಉಪ ಚುನಾವಣೆಯಲ್ಲಿ ಪರಾಭವಗೊಂಡಿರುವ ವಿಶ್ವನಾಥ್ ಮತ್ತು ಎಂ.ಟಿ.ಬಿ.ನಾಗರಾಜ್ ಅವರನ್ನು ಸದ್ಯಕ್ಕೆ ಮೇಲ್ಮನೆಗೆ ನಾಮಕರಣ ಮಾಡದೆ ಶಾಸಕ ರಿಜ್ವಾನ್ ನಾಮೆಯಿಂದ ತೆರವಾಗಿರುವ ಮೇಲ್ಮನೆ ಸದಸ್ಯತ್ವವನ್ನು ಹಾಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ನೀಡುವಂತೆ ಸಲಹೆ ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡದೆ ಹಿಂದೆ ಸರಿದಿರುವ ಆರ್.ಶಂಕರ್‍ಗೆ ಜೂನ್, ಜುಲೈನಲ್ಲಿ ತೆರವಾಗಲಿರುವ ಮೇಲ್ಮನೆಯಲ್ಲಿ ಸ್ಥಾನ ಕಲ್ಪಿಸುವಂತೆ ಸಂತೋಷ್ ಸಲಹೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Facebook Comments