ಹಸುಗೂಸು ಸಾವಿನ ವಿವಾದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.22- ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಹೆರಿಗೆಗೂ ಮುನ್ನ ಎರಡು ದಿನಗಳ ಮುಂಚೆಯೇ ಮಗು ಗರ್ಭದಲ್ಲೇ ಸಾವನ್ನಪ್ಪಿತ್ತು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.

ಮಹಿಳೆಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಗರ್ಭದಲ್ಲೇ ಹಸುಗೂಸು ಸಾವನ್ನಪ್ಪಿದ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು. ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ಗರ್ಭಿಣಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡದೆ ನಿರ್ಲಕ್ಷ್ಯ ವಹಿಸಿದ್ದರಿಂದ ಮಗು ಸಾವನ್ನಪ್ಪಿತ್ತೆಂಬ ಆರೋಪ ಕೇಳಿಬಂದಿತ್ತು.

ಹೀಗಾಗಿ ಈ ಪ್ರಕರಣವನ್ನು ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ ತನಿಖೆಗೆ ಆದೇಶ ನೀಡಿತ್ತು. ಇದೀಗ ಇಲಾಖೆಯು ಬಿಡುಗಡೆ ಮಾಡಿರುವ ಪತ್ರಿಕಾಪ್ರಕಟಣೆಯಲ್ಲಿ ವೈದ್ಯರು ಮತ್ತು ಅಲ್ಲಿನ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ಜು.20ರಂದು ಮುಂಜಾನೆ 3 ಗಂಟೆಗೆ ಗರ್ಭಿಣಿಯು ಕೆ.ಸಿ.ಜನರಲ್ ಆಸ್ಪತ್ರೆಗೆ ಆಗಮಿಸಿದ್ದರು. ಮಗುವಿನ ಹೃದಯಬಡಿತದಲ್ಲಿ ತೊಂದರೆ ಉಂಟಾಗಿತ್ತು. ನಾವು ವಾಣಿ ವಿಲಾಸ್ ಆಸ್ಪತ್ರೆಗೆ ತೆರಳುವಂತೆ ಮನವಿ ಮಾಡಿಕೊಂಡಿದ್ದೆವು.

ಕೊನೆಗೆ ನಮ್ಮ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಲು ತೀರ್ಮಾನಿಸಲಾಯಿತು. ಆದರೆ 2 ದಿನಗಳ ಹಿಂದೆಯೇ ಮಗು ಗರ್ಭದಲ್ಲೇ ತೀರಿಕೊಂಡಿತ್ತು ಎಂದು ಇಲಾಖೆಯ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

Facebook Comments

Sri Raghav

Admin