ಬೆಂಗಳೂರಿನಾದ್ಯಂತ 5000 ಕೋಟಿ ರೂ. ವೆಚ್ಚದಲ್ಲಿ ಅಂಡರ್ ಗ್ರೌಂಡ್ ಕೇಬಲ್ ವ್ಯವಸ್ಥೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 27- ಬಿರುಗಾಳಿ ಮಳೆಗೆ ವಿದ್ಯುತ್‍ಕಂಬಗಳು ಧರೆಗುರುಳುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 5000 ಕೋಟಿ ರೂ. ವೆಚ್ಚದಲ್ಲಿ ನಗರದಾದ್ಯಂತ ಅಂಡರ್‍ಗ್ರೌಂಡ್ ಕೇಬಲ್ ವ್ಯವಸ್ಥೆ ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು.

ಸಚಿವ ಡಿ.ಸಿ.ತಮ್ಮಣ್ಣ, ಮೇಯರ್ ಗಂಗಾಂಬಿಕೆ, ಉಪಮೇಯರ್ ಭದ್ರೇಗೌಡ, ಆಯುಕ್ತ ಮಂಜುನಾಥ್ ಪ್ರಸಾದ್, ಬೆಸ್ಕಾಂ ಎಂಡಿ ಶಿಖಾ ಮತ್ತಿತರರೊಂದಿಗೆ ಮಳೆ ಅನಾಹುತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನಿನ್ನೆ ಬಿದ್ದ ಬಿರುಗಾಳಿ ಸಹಿತ ಮಳೆಗೆ ನಗರದ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು, ಟ್ರಾನ್ಸ್‍ಫಾರ್ಮರ್‍ಗಳು ಧರೆಗುರುಳಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿಯಾಗಿಲ್ಲ. ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಇಡೀ ನಗರದಲ್ಲಿ ಅಂಡರ್‍ಗ್ರೌಂಡ್ ಕೇಬಲ್ ಅಳವಡಿಸಲಾಗುತ್ತಿದ್ದು, ನಮ್ಮ ಸರ್ಕಾರ ಇದಕ್ಕಾಗಿ 5 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ತಿಳಿಸಿದರು.

ಇನ್ನು ಕೇವಲ ಒಂದೂವರೆ ತಿಂಗಳಿನಲ್ಲಿ ನಗರದ 11 ವಲಯಗಳಲ್ಲಿ ಅಂಡರ್‍ಗ್ರೌಂಡ್ ಕೇಬಲ್ ಅಳವಡಿಕೆ ಕಾರ್ಯ ಪ್ರಾರಂಭವಾಗಲಿದ್ದು , ಇನ್ನು ಆರು ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ಹಂತ ಹಂತವಾಗಿ ಇಡೀ ನಗರದಲ್ಲಿ ಅಂಡರ್‍ಗ್ರೌಂಡ್ ಕೇಬಲ್ ಅಳವಡಿಕೆ ಕಾರ್ಯವನ್ನು ವಿಸ್ತರಿಸಲಾಗುವುದು ಎಂದರು.

# ಮುನ್ನೆಚ್ಚರಿಕೆಗೆ ಸೂಚನೆ: ನಿನ್ನೆ ಬಿದ್ದ ಬಿರುಗಾಳಿ ಮಳೆಗೆ ನಗರದಲ್ಲಿ ನೂರಾರು ಮರಗಳು, ವಿದ್ಯುತ್ ಕಂಬಗಳು ಉರುಳಿಬಿದ್ದಿದ್ದು, ಬಿಬಿಎಂಪಿ, ಬೆಸ್ಕಾಂ ಮತ್ತು ಕೆಪಿಟಿಸಿಎಲ್ ರಕ್ಷಣಾ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ.  ಬಿಬಿಎಂಪಿಯ 21 ರಕ್ಷಣಾ ತಂಡಗಳು ಸೇರಿದಂತೆ ಬೆಸ್ಕಾಂ ಮತ್ತು ಕೆಪಿಟಿಸಿಎಲ್‍ನ 61 ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿವೆ.

ಮಳೆ ಅನಾಹುತ ತಪ್ಪಿಸುವ ಕುರಿತಂತೆ ಕಳೆದ ತಿಂಗಳು ಸಭೆ ನಡೆಸಿ ಬಿಬಿಎಂಪಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೆ. ಹೀಗಾಗಿ ನಿನ್ನೆ ರಾತ್ರಿ ಮಳೆ ಬಿದ್ದ ಸಂದರ್ಭದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗದಂತೆ ಎಚ್ಚರಿಕೆ ವಹಿಸಲು ಸಾಧ್ಯವಾಯಿತು ಎಂದು ಅವರು ಹೇಳಿದರು.

ವಿದ್ಯುತ್ ಕಂಬಗಳು ಉರುಳಿಬಿದ್ದ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಸಮರೋಪಾದಿಯಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಭವಿಷ್ಯದಲ್ಲಿ ಎದುರಾಗುವ ಮಳೆ ಅನಾಹುತವನ್ನು ತಡೆಗಟ್ಟಲು ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಗರಂ:
ರಾಜ್‍ಮಹಲ್‍ನಲ್ಲಿರುವ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ಅವರ ನಿವಾಸದ ಮುಂಭಾಗ ವಿದ್ಯುತ್ ಕಂಬ ಮುರಿದುಬಿದ್ದು ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದರೂ ಅವುಗಳನ್ನು ತೆರವುಗೊಳಿಸದ ಕಾರಣ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಉಪಮುಖ್ಯಮಂತ್ರಿ ಪರಮೇಶ್ವರ್ ಗರಂ ಆದರು.
ಸಿಬ್ಬಂದಿ ವರ್ಗದವರು ಸೋಮಾರಿತನ ಬಿಟ್ಟು ಅನಾಹುತ ಪ್ರದೇಶಗಳಿಗೆ ತೆರಳಿ ನಿಗದಿತ ಕಾಲಮಿತಿಯೊಳಗೆ ಸಮಸ್ಯೆ ಬಗೆಹರಿಸುವತ್ತ ಗಮನಹರಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆ:
ರಾಜ್ಯದಲ್ಲಿ ಮುಂಗಾರು ಮಳೆ ಮುನ್ಸೂಚನೆ ದೊರೆತಿದ್ದು, ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇಂದು ಸಂಜೆ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಸಭೆ ಕರೆದಿದ್ದೇನೆ ಎಂದು ಪರಮೇಶ್ವರ್ ತಿಳಿಸಿದರು.

ಸಾರ್ವಜನಿಕರ ದೂರು:
ಡಿಸಿಎಂ ಅವರು ಮಳೆ ನೀರು ನಿಂತು ಕೆರೆಯಂತಾಗಿರುವ ಮಲ್ಲೇಶ್ವರಂ ಮಾರುಕಟ್ಟೆ ನಿರ್ಮಾಣ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾಗ ಸ್ಥಳೀಯ ವ್ಯಾಪಾರಿಗಳು ಅಧಿಕಾರಿಗಳ ವಿರುದ್ಧ ದೂರಿನ ಸುರಿಮಳೆಗೈದರು.

ನೀವು ಬಂದಾಗ ಮಾತ್ರ ಅಧಿಕಾರಿಗಳು ವಿನಯವಾಗಿ ವರ್ತಿಸುತ್ತಾರೆ. ಇಲ್ಲದಿದ್ದರೆ ನಮ್ಮ ವಿರುದ್ಧ ದಬ್ಬಾಳಿಕೆ ಮಾಡುತ್ತಾರೆ. ಕಳೆದ ಹಲವು ದಿನಗಳಿಂದ ಮಾರುಕಟ್ಟೆಯಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ. ಈ ಕುರಿತಂತೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಶೌಚಾಲಯ ವ್ಯವಸ್ಥೆ ಕಲ್ಪಿಸಿಕೊಡುವಂತೆ ಸ್ಥಳೀಯರು ಮನವಿ ಮಾಡಿಕೊಂಡರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ