ಬೆಂಗಳೂರು ಜಿಲ್ಲಾ ಉಸ್ತುವಾರಿ ಮೇಲೆ ಸಚಿವರ ಕಣ್ಣು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.24- ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿರುವುದರಿಂದ ಇದೀಗ ಬೆಂಗಳೂರಿನ ಮೇಲೆ ಅನೇಕರ ಕಣ್ಣು ಬಿದ್ದಿದೆ. ಸದ್ಯ ಬೆಂಗಳೂರು ಉಸ್ತುವಾರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಸದ್ಯ ಈ ಹುದ್ದೆ ಮುಖ್ಯಮಂತ್ರಿಗಳ ಬಳಿಯೇ ಇದೆ. ಬೆಂಗಳೂರು ನಗರದಿಂದ 12ಕ್ಕೂ ಹೆಚ್ಚು ಸಚಿವರು ಯಡಿಯೂರಪ್ಪ ಸಂಪುಟದಲ್ಲಿದ್ದಾರೆ. ಆದರೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಹುದ್ದೆ ಮುಖ್ಯಮಂತ್ರಿಗಳ ಬಳಿಯೇ ಇದೆ. ಅಶೋಕ್ ಅವರನ್ನು ಬೆಂಗಳೂರು ಉಸ್ತುವಾರಿ ಸಚಿವರನ್ನಾಗಿ ಮಾಡಿದರೆ, ನಾಯಕತ್ವ ಬದಲಾವಣೆ ಕೂಗಿನ ಸಂದರ್ಭದಲ್ಲಿ ಯಡಿಯೂರಪ್ಪ ಪರವಾಗಿ ಗಟ್ಟಿಯಾಗಿ ನಿಂತಿದ್ದ ಅಶೋಕ್ ಅವರಿಗೆ ಕೃತಜ್ಞತೆ ತೋರಿಸಿದ್ದಾರೆ ಎಂದು ಹೇಳಬಹುದು.

ಈ ಮಧ್ಯೆ ಡಿಸಿಎಂ ಅಶ್ವತ್ಥ್ ನಾರಾಯಣ್ ಕೂಡ ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿಯ ಮೇಲೆ ಕಣ್ಣಿಟ್ಟಿದ್ದಾರೆ. ನಾಯಕತ್ವ ಬದಲಾವಣೆ ಕೂಗಿನ ಸಮಯದಲ್ಲಿ ಅಶೋಕ್ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪರವಾಗಿ ನಿಂತು ಮಾತನಾಡಿದ್ದರು.

ಇನ್ನು ಯಡಿಯೂರಪ್ಪ ನಾಯಕತ್ವದ ಬಗ್ಗೆ ಪ್ರಶ್ನೆ ಮಾಡಿ ಸುದ್ದಿಯಾಗಿದ್ದ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಕೋಲಾರ ಜಿಲ್ಲೆಯ ಉಸ್ತುವಾರಿ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕೋವಿಡ್-19 ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಈ ಬದಲಾವಣೆ ಮಾಡಿದ್ದು, ಸ್ವತಃ ಆರ್.ಅಶೋಕ್ ಅವರೇ ಎಂಟಿಬಿ ನಾಗರಾಜ್ ಅವರನ್ನು ನೇಮಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು ಎಂದು ಹೇಳಲಾಗುತ್ತಿದೆ.

ಎಂಟಿಬಿ ನಾಗರಾಜ್ ಅವರು ಈ ಹಿಂದೆ ತಮ್ಮ ಖಾತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಅವರನ್ನು ಸಮಾಧಾನಪಡಿಸಲು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಹುದ್ದೆಯನ್ನು ನೀಡಲು ಸ್ವತಃ ಅಶೋಕ್ ಅವರೇ ಮುಖ್ಯಮಂತ್ರಿಗಳಿಗೆ ಸೂಚಿಸಿದರು ಎಂದು ಹೇಳಲಾಗುತ್ತಿದೆ. ಇನ್ನು ತಮ್ಮಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಹುದ್ದೆ ಕೈತಪ್ಪಿ ಹೋಗಿರುವುದಕ್ಕೆ ಯಾವ ಬೇಸರವೂ ಇಲ್ಲ ಎಂದು ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ.

Facebook Comments