ಜೆಡಿಎಸ್ ಪಕ್ಷ ಸಂಘಟನೆಗೆ ಬಸವರಾಜ ಹೊರಟ್ಟಿ ಸಲಹೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.11-ಜನತಾ ಪರಿವಾರದ ನಾಯಕರು ಹಾಗೂ ಮುಖಂಡರನ್ನು ಒಗ್ಗೂಡಿಸುವ ಮೂಲಕ ಜೆಡಿಎಸ್ ಪಕ್ಷದ ಸಂಘಟನೆ ಮಾಡಬೇಕು ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಸಲಹೆ ಮಾಡಿದರು. ಅರಮನೆ ಮೈದಾನದಲ್ಲಿಂದು ನಡೆದ ಜೆಡಿಎಸ್ ರಾಷ್ಟ್ರೀಯ ಮಹಾ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಅಸಮಾಧಾನಗೊಂಡು ಮನೆಯಲ್ಲಿರುವವರನ್ನು ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಎಲ್ಲರನ್ನು ಒಗ್ಗೂಡಿಸಿ ಪಕ್ಷ ಸಂಘಟನೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಈ ನಿಟ್ಟಿನಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಇಚ್ಛಾಶಕ್ತಿ ಪ್ರದರ್ಶಿಸಬೇಕು. ಚುನಾವಣೆ ಬಂದಾಗ ಪಕ್ಷದ ಕಾರ್ಯಗಳಿಗೆ ಆದ್ಯತೆ ನೀಡಿದರೆ ಸಾಲದು, ಈಗಿನಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಆಗ್ರಹಿಸಿದರು. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿದೆ. ಅಲ್ಲಿ ಆ ಪಕ್ಷಕ್ಕೆ ಅಧಿಕಾರಕ್ಕೆ ಸಾಧ್ಯವಾಗಿರುವಾಗ ನಮ್ಮ ರಾಜ್ಯದಲ್ಲಿ ನಮಗೇಕೆ ಸಾಧ್ಯವಾಗುವುದಿಲ್ಲ ಎಂದು ಪ್ರಶ್ನಿಸಿದರು.

ರಾಜ್ಯಾದ್ಯಂತ ತಾಲೂಕು ಹಾಗೂ ಜಿಲ್ಲಾ ಘಟಕಗಳನ್ನು ಬೆಳೆಸಿ ಪಕ್ಷವನ್ನು ಗಟ್ಟಿಗೊಳಿಸಬೇಕು. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಈಗಿನಿಂದಲೇ ಪ್ರಾಮಾಣಿಕ ಪ್ರಯತ್ನ ನಡೆಸಿ ಪಕ್ಷ ಸಂಘಟನೆಯನ್ನು ಬಲಗೊಳಿಸಬೇಕು. ಜೆಡಿಎಸ್ ಅಧಿಕಾರಕ್ಕೆ ಬಂದಾಗ ಉತ್ತಮ ಆಡಳಿತ ನಡೆಸಿದ ನಿದರ್ಶನವಿದೆ ಎಂಧು ಹೇಳಿದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಮಹಾ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ, ಮಾಜಿ ಸಚಿವರಾದ ಬಂಡೆಪ್ಪ ಕಾಶಂಪೂರ್, ಲೀಲಾದೇವಿ ಆರ್.ಪ್ರಸಾದ್, ಡಿ.ನಾಗರಾಜಯ್ಯ, ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಸೇರಿದಂತೆ ವಿವಿಧ ರಾಜ್ಯಗಳ ಪಕ್ಷದ ನಾಯಕರು, ಮುಖಂಡರು ಭಾಗವಹಿಸಿದ್ದರು.

Facebook Comments