ಖಾಲಿ ಇರುವ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳ ಭರ್ತಿಗೆ ಹೊರಟ್ಟಿ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.16- ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ಖಾಲಿಯಾಗಿರುವ ಶಿಕ್ಷಕರ, ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಬಾರದೆಂದು ಆರ್ಥಿಕ ಇಲಾಖೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ಎಲ್ಲಾ ಖಾಸಗಿ ಶಾಲೆಗಳನ್ನು ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 2015ಕ್ಕೂ ಮುಂಚೆ ನಿವೃತ್ತಿ, ನಿಧನ, ರಾಜೀನಾಮೆ ಸೇರಿದಂತೆ ಬೇರೆ ಬೇರೆ ಕಾರಣಗಳಿಂದ ಖಾಲಿ ಇರುವ ಶಿಕ್ಷಕರ ಮತ್ತು ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವೇ ಅನುಮತಿ ನೀಡಿತ್ತು.

ವಿವಿಧ ಹಂತದಲ್ಲಿ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಕೋವಿಡ್-19ರ ಹಿನ್ನೆಲೆಯಲ್ಲಿ ಆರ್ಥಿಕ ಮಿತವ್ಯಯದ ನೆಪವೊಡ್ಡಿ ನೇಮಕಾತಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವುದು ಸರಿಯಲ್ಲ.

ಈ ಸಂಬಂಧ ಆರ್ಥಿಕ ಇಲಾಖೆ ಹೊರಡಿಸಿರುವ ಸುತ್ತೋಲೆಯನ್ನು ಈ ತಿಂಗಳೊಳಗೆ ವಾಪಸು ಪಡೆಯಬೇಕು. ಇಲ್ಲದಿದ್ದರೆ ಕಳೆದ 2012ರಲ್ಲಿ ನಡೆಸಿದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯ ಸರ್ಕಾರ ಶಿಕ್ಷಣವನ್ನು ಕಡೆಗಣಿಸಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಶೇ.85ರಷ್ಟು ಖಾಸಗಿ ಶಿಕ್ಷಣ ಸಂಸ್ಥೆಗಳಿಂದಲೇ ಶಿಕ್ಷಣ ದೊರೆಯುತ್ತಿದೆ. ಹೀಗಿರುವಾಗ ಅನುದಾನಿತ ಸಂಸ್ಥೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ನೀಡದಿರುವುದು ಸರಿಯಲ್ಲ.

ಕಳೆದ 10 ವರ್ಷದಲ್ಲಿ ಶಿಕ್ಷಣ ವ್ಯವಸ್ಥೆ ಹದೆಗೆಟ್ಟು ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಿದ್ಯಾರ್ಥಿಗಳು, ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮನವಿ ಮಾಡುತ್ತೇವೆ. 10ನೆ ತರಗತಿ ತನಕ ಆನ್‍ಲೈನ್ ತರಗತಿ ಬೇಡ ಎಂದು ಹೇಳಿದರು.

ಭೂ ಸುಧಾರಣೆ ತಿದ್ದುಪಡಿ ವಿರೋಧಿಸುವುದಾಗಿ ತಿಳಿಸಿದ ಅವರು, ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ. ಇದರಿಂದ ಕೃಷಿ ಭೂಮಿ ಕಡಿಮೆಯಾಗುವ ಆತಂಕವಿದೆ ಎಂದರು.

ಐಟಿ, ಬಿಟಿಯವರು ಕೃಷಿ ಬಿಟ್ಟು ಬೇರೆ ಉದ್ದೇಶಕ್ಕೆ ಭೂಮಿ ಬಳಕೆ ಮಾಡಿದರೆ ಜೈಲು ಶಿಕ್ಷೆ ಆಗಬೇಕು. ಈಗಾಗಲೇ ಶೇ.28.20 ರಷ್ಟು ಕೃಷಿ ಭೂಮಿ ರಿಯಲ್ ಎಸ್ಟೇಟ್‍ಗೆ ಬಳಕೆಯಾಗಿದೆ ಎಂದು ಹೊರಟ್ಟಿ ಹೇಳಿದರು. ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Facebook Comments