ನಾಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.29- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿ ಆವರಣದಲ್ಲಿರುವ ಕೆಂಪೇಗೌಡ ಪೌರ ಸಭಾಂಗಣದಲ್ಲಿ ನಾಳೆ 12 ಸ್ಥಾಯಿ ಸಮಿತಿಯ ಸ್ಥಾನಗಳ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್ ಅವರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಗೆ ಹೊಂದಿಕೊಂಡಂತೆ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು , ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು. ಯಾವುದೇ ರೀತಿಯ ವಿಜಯೋತ್ಸವ, ಮೆರವಣಿಗೆ, ಜಾಥಾ, ಸಭೆ-ಸಮಾರಂಭಗಳನ್ನು ನಡೆಸುವಂತಿಲ್ಲ. ಶಸ್ತ್ರಗಳು, ಚಾಕು ಇನ್ನಿತರ ಯಾವುದೇ ವಸ್ತುಗಳನ್ನು ಒಯ್ಯುವಂತಿಲ್ಲ. ಸ್ಫೋಟಕ ವಸ್ತುಗಳನ್ನು ಸಿಡಿಸುವುದಾಗಲೀ ಅಥವಾ ಉಪಕರಣಗಳ ಒಯ್ಯುವಿಕೆ ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.

ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಅಥವಾ ಸಾರ್ವಜನಿಕರ ಸುವ್ಯವಸ್ಥೆಗೆ ಬಾಧೆಯನ್ನು ಉಂಟು ಮಾಡಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದಾಗಲೀ, ಆವೇಶ ಭಾಷಣ, ಸಂಕೇತ , ಚಿತ್ರ, ಭಿತ್ತಿಪತ್ರಗಳನ್ನು ಪ್ರದರ್ಶಿಸುವುದಾಗಲೀ ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments