ಬ್ರೇಕಿಂಗ್ : ಬಿಬಿಎಂಪಿ ಚುನಾವಣೆ ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು, ನ. 25- ಬಿಬಿಎಂಪಿ ಚುನಾವಣೆ ನಡೆಸುವ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಈ ಮೂಲಕ ಬಿಬಿಎಂಪಿ ಚುನಾವಣಾ ಭವಿಷ್ಯ ಹೈಕೋರ್ಟ್ನ ತೀರ್ಪನ್ನು ಆಧರಿಸಿದೆ. ಅವ ಮುಗಿದಿರುವ ಬಿಬಿಎಂಪಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ.
ಆದರೆ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡುತ್ತಿಲ್ಲ ಎಂದು ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿತ್ತು. ಮತ್ತೊಂದು ಕಡೆ ಸರ್ಕಾರ 198 ವಾರ್ಡ್ಗಳನ್ನು 243 ವಾರ್ಡ್ಗಳನ್ನಾಗಿ ಹೆಚ್ಚಿಸಿ ಸುಗ್ರೀವಾಜ್ಞೆ ಹೊರಡಿಸಿದೆ. ಇದು ಚುನಾವಣೆಯನ್ನು ಮುಂದೂಡುವ ಹುನ್ನಾರ ಎಂದು ಕಾಂಗ್ರೆಸ್ನ ಬಿಬಿಎಂಪಿ ಸದಸ್ಯರಾಗಿದ್ದ ಎಂ.ಶಿವರಾಜ್ ಹಾಗೂ ವಾಜಿದ್ ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಎರಡು ಅರ್ಜಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರದ ಅಭಿಪ್ರಾಯ ಕೇಳಿತ್ತು. ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಅಡ್ವಕೇಟ್ ಜನರಲ್ ಪ್ರಭುಶಂಕರ್ ನಾವಾಗಡಿ ಮನವಿ ಮಾಡಿದರು. ಇಂದು ಪ್ರಭುಶಂಕರ್ ನಾವಾಗಡಿ ಅವರು ಸುಮಾರು ಒಂದು ಗಂಟೆಗಳ ಕಾಲ ವಿಭಾಗೀಯ ಪೀಠದ ಮುಂದೆ ವಾದ ಮಂಡಿಸಿದರು.
ಬೆಂಗಳೂರಿನ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ, ಬಿಬಿಎಂಪಿ ಚುನಾವಣೆಯನ್ನು ಮುಂದೂಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು. ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮಕುಮಾರ್ ವಾದ ಮಂಡಿಸಿದರೆ, ಚುನಾವಣಾ ಆಯೋಗದ ಪರವಾಗಿ ಫಣೀಂದ್ರ ವಾದಿಸಿದರು. ವಾದ- ವಿವಾದ ಅಲಿಸಿದ ಹೈಕೋರ್ಟ್ನ ವಿಭಾಗೀಯ ಪೀಠ ತೀರ್ಪನ್ನು ಕಾಯ್ದಿರಿಸಿದೆ.