ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಾದಯಾತ್ರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಮುಂಬರುವ ಬಿಬಿಎಂಪಿ ಚುನಾವಣೆ ಸಿದ್ಧತೆ, ಪಕ್ಷ ಸಂಘಟನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಗರದಲ್ಲಿ ನಡೆಸಲು ಉದ್ದೇಶಿಸಿದ್ದು, ಮಕರ ಸಂಕ್ರಾಂತಿ ಹಬ್ಬದ ನಂತರ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್ ತಿಳಿಸಿದರು.

ಪಕ್ಷದ ವರಿಷ್ಠರ ನಿರ್ದೇಶನದಂತೆ ಪ್ರತಿ ವಾರ್ಡ್‍ನಲ್ಲಿಯೂ ಪಕ್ಷದ ಕಚೇರಿಯನ್ನು ಆರಂಭಿಸಲಾಗುವುದು. ಕೇರಳದಲ್ಲಿ ಜೆಡಿಎಸ್ ಕಾರ್ಯಕರ್ತರು ನಡೆಸಿರುವ ಪಾದಯಾತ್ರೆ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅದೇ ರೀತಿ ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪಾದಯಾತ್ರೆ ನಡೆಸುವ ಮೂಲಕ ಪಕ್ಷ ಸಂಘಟನೆಯನ್ನು ಚುರುಕುಗೊಳಿಸಲಾಗುವುದು ಎಂದರು.

ಸದ್ಯಕ್ಕೆ ಯಾವುದೇ ಚುನಾವಣೆ ಇಲ್ಲದಿರುವುದರಿಂದ ಬಿಬಿಎಂಪಿ ಚುನಾವಣೆ ಸಿದ್ಧತೆಗೆ ಆದ್ಯತೆ ನೀಡಲಾಗುತ್ತಿದೆ. ಪಕ್ಷದ ಮಾಜಿ ಸಚಿವರು, ಶಾಸಕರು, ಸಂಸದರ ಸಹಕಾರ ಪಡೆದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನವನ್ನು ಪ್ರತಿ ವಾರ್ಡ್‍ನಲ್ಲೂ ನಡೆಸಲಾಗುವುದು. ಸ್ಥಳೀಯ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಬಿಬಿಎಂಪಿ ಚುನಾವಣೆ ಅಭ್ಯರ್ಥಿಗಳನ್ನು ಈಗಿನಿಂದಲೇ ಗುರುತಿಸುವ ಕೆಲಸವನ್ನು ಮಾಡಲಾಗುತ್ತದೆ.

ಮಹಿಳಾ ಮುಖಂಡರಿಗೂ ಬಿಬಿಎಂಪಿ ಟಿಕೆಟ್ ನೀಡಿಕೆಯಲ್ಲಿ ಹೆಚ್ಚಿನ ಆದ್ಯತೆ ನೀಡಲು ಉದ್ದೇಶಿಸಲಾಗಿದೆ. ಇದರ ಜೊತೆಗೆ ವಿಧಾನಸಭಾ ಚುನಾವಣೆ ಸಿದ್ಧತೆ ಹಾಗೂ ಅಭ್ಯರ್ಥಿಗಳನ್ನು ಗುರುತಿಸುವಿಕೆಯನ್ನು ಮಾಡಲಾಗುತ್ತದೆ ಎಂದು ಅವರು ಹೇಳಿದರು. ಈ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರ ಸಭೆಗಳನ್ನು ಆಗಿಂದಾಗ್ಗೆ ನಡೆಸುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದರು.

Facebook Comments