ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಸಿಪಿಎಂ ಶಾಸಕ ಅನುಮಾನಾಸ್ಪದ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಕೋಲ್ಕತ್ತಾ, ಜು.13- ಸಿಪಿಎಂನಿಂದ ಶಾಸಕನಾಗಿ ಆರಿಸಿ ಬಂದು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಶಾಸಕರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ದೀನಜ್‍ಪುರ್‍ನಲ್ಲಿ ನಡೆದಿದೆ.

ಹೆಮ್ತಾಬಾದ್‍ನಲ್ಲಿರುವ ತಮ್ಮ ನಿವಾಸದಲ್ಲಿ ಬಿಜೆಪಿ ಮುಖಂಡ ದೇಬೇಂದ್ರನಾಥ್ ರೇ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ರಾಜಕೀಯ ದುರುದ್ದೇಶಕ್ಕಾಗಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಕುಟುಂಬವರ್ಗದವರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.

ಹೆಮ್ತಾಬಾದ್ ವಿಧಾನಸಭಾ ಕ್ಷೇತ್ರದಿಂದ ಸಿಪಿಐ(ಎಂ) ಪಕ್ಷದಿಂದ ಸ್ಪರ್ಧಿಸಿ ವಿಜೇತರಾಗಿದ್ದ ರೇ ಅವರು ಕಳೆದ ಲೋಕಸಭಾ ಚುನಾವಣೆ ನಂತರ ಬಿಜೆಪಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ.

ರೇ ಅವರ ಶವ ಇಂದು ಮುಂಜಾನೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆ ಆರಂಭಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ರೇ ಅವರ ಸಾವು ಅನುಮಾನಾಸ್ಪದವಾಗಿರುವುದರಿಂದ ಯಾರೋ ಕಿಡಿಗೇಡಿಗಳು ಕೊಲೆ ಮಾಡಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಒಳಪಡಿಸುವಂತೆ ಕುಟುಂಬದ ಸದಸ್ಯರು ಒತ್ತಾಯಿಸಿದ್ದಾರೆ.

ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಶೀತಲ ಸಮರ ಜೋರಾಗಿದ್ದು, ತೃಣಮೂಲ ಕಾಂಗ್ರೆಸ್‍ನ ಗೂಂಡಾಗಳೇ ರೇ ಅವರ ಹತ್ಯೆ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್‍ಘೋಷ್ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಗೂಂಡಾಗಳ ಉಪಟಳ ಮಿತಿಮೀರಿದ್ದು, ಶಾಸಕರು ನೆಮ್ಮದಿಯಿಂದ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಸ್ ವಿಜಯ್‍ವರ್ಗೀಯ ದೂರಿದ್ದಾರೆ.

ಆದರೆ, ಬಿಜೆಪಿ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿರುವ ತೃಣಮೂಲ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕನೈಲಾಲ್ ಅಗರ್ವಾಲ್ ಅವರು ಪೆÇಲೀಸ್ ತನಿಖೆ ನಂತರ ಸತ್ಯಾಂಶ ಹೊರಬೀಳಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

Facebook Comments

Sri Raghav

Admin