ಕೊರೊನಾ ವಾರಿಯರ್ಸ್‍ಗೆ ಹೂ ಮಳೆ ಅಭಿನಂದನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 2- ಲಾಕ್‍ಡೌನ್ ಸಮಯದಲ್ಲಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು, ವೈದ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಬಿಬಿಎಂಪಿ ಪೌರ ಕಾರ್ಮಿಕರಿಗೆ ಸಾರ್ವಜನಿಕರು ಪುಷ್ಪವೃಷ್ಟಿ ಮೂಲಕ ಅಭಿನಂದನೆ ಸಲ್ಲಿಸಿದರು.

ದಕ್ಷಿಣ ವಿಭಾಗದ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮೇಶ್ವರ ಬಡೆಆವಣೆ ಸುತ್ತಮುತ್ತ ಡಿಸಿಪಿ ರೋಹಿಣಿ ಕಟೋಚ್ ಅವರ ನೇತೃತ್ವದಲ್ಲಿ ವಾರಿಯರ್ಸ್‍ಗಳು ಆಯಾ ಠಾಣಾ ಪೊಲೀಸರು, ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಾಗೃತಿ ಮೂಡಿಸಲು ಪಥ ಸಂಚಲನ ನಡೆಸಿದರು.

ಪಥ ಸಂಚಲನದ ಸಂದರ್ಭದಲ್ಲಿ ಮಾರ್ಗದುದ್ದಕ್ಕೂ ಸ್ಥಳೀಯರು ಅವರ ಮೇಲೆ ಹೂವನ್ನು ಹಾಕಿ ಅವರ ಕಾರ್ಯವನ್ನು ಶ್ಲಾಘಿಸಿದರು.ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಹಾಗೂ ಓಡಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಇದೇ ವೇಳೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ದಕ್ಷಿಣ ವಿಭಾಗದ ಡಿಸಿಪಿಯಾಗಿ ರೋಹಿಣಿ ಕಟೋಚ್ ಅವರು ಲಾಕ್‍ಡೌನ್ ಸಂದರ್ಭದಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿದ್ದರು. ಅವರ ಈ ಕಾರ್ಯಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗಿತ್ತು.

ರೋಹಿಣಿ ಕಟೋಚ್ ಅವರ ಜತೆಗೆ ಕೊರೊನಾ ವಾರಿಯರ್ಸ್‍ಗಳಾಗಿ ಸೇವೆ ಸಲ್ಲಿಸಿದವರಿಗೂ ಕೃತಜ್ಞತೆ ಸಲ್ಲಿಸಬೇಕು ಎಂಬ ಉದ್ದೇಶದಿಂದ ಸಿದ್ದಾಪುರದ ಜನತೆ ಇಂದು ರೋಹಿಣಿ ಕಟೋಚ್, ಮತ್ತಿತರ ಪೊಲೀಸ್ ಅಧಿಕಾರಿಗಳು ಹಾಗೂ ವಾರಿಯರ್ಸ್‍ಗಳಿಗೆ ಮನೆಯ ಬಾಲ್ಕನಿಯಲ್ಲಿ ನಿಂತು ಹೂ ಮಳೆ ಸುರಿಸಿ ಅಭಿನಂದನೆ ಸಲ್ಲಿಸಿದ್ದು ವಿಶೇಷವಾಗಿತ್ತು.

 

Facebook Comments

Sri Raghav

Admin