ಬೆಂಗಳೂರಿಗೆ ತಂಪೆರೆದ ವರುಣಾ, ಇನ್ನೆರಡು ದಿನ ಮುಂದುವರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.7- ಬೇಸಿಗೆಯ ಬಿಸಿಲು, ಧೂಳು, ಹೊಗೆಯಿಂದ ಬಸವಳಿದಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಇಂದು ಬೆಳಗ್ಗೆ ಬಿದ್ದ ಅಕಾಲಿಕ ಮಳೆ ತಂಪೆರೆದಿದ್ದು, ಇನ್ನೂ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.  ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ನಗರದ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗಿದ್ದರಿಂದ ಜನರು ಖುಷಿ ಪಡುವಂತಾಯಿತು.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಟ್ರಪ್ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ನಾಳೆವರೆಗೆ ಮಳೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ಈ ಸಂಜೆಗೆ ತಿಳಿಸಿದರು.

ಕಳೆದ ಒಂದು ವಾರದಿಂದಲೂ ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಆಗಾಗ್ಗೆ ಚದುರಿದಂತೆ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ನಿನ್ನೆಯೂ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದೆ.

ಕೇರಳದ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಅಲ್ಲದೆ, ತಮಿಳುನಾಡು ಹಾಗೂ ಒಡಿಶಾದ ಕರಾವಳಿ ಭಾಗದ ಬಂಗಾಳಕೊಲ್ಲಿಯಲ್ಲಿ ಟ್ರಪ್ ಉಂಟಾಗಿರುವುದರಿಂದ ಮೋಡ ಕವಿದ ವಾತಾವರಣ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕಂಡುಬರಲಿದೆ. ಇನ್ನೂ ಎರಡು ದಿನಗಳ ಕಾಲ ಇದೇ ರೀತಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಇನ್ನೆರಡು ದಿನ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ.

ಆದರೆ, ಭಾರೀ ಮಳೆ ಬೀಳುವ ಮುನ್ನೆಚ್ಚರಿಕೆಗಳು ಕಂಡುಬಂದಿಲ್ಲ. ಮಾರ್ಚ್, ಏಪ್ರಿಲ್‍ನಲ್ಲಿ ಮುಂಗಾರು ಪೂರ್ವ ಮಳೆ ಬರುವುದು ವಾಡಿಕೆ. ಅದರಂತೆ ಈ ಬಾರಿಯೂ ಅಕಾಲಿಕ ಮಳೆಯಾಗುತ್ತಿದ್ದು, ವಾಡಿಕೆ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

Facebook Comments