ಬಿಹಾರ, ಕೇರಳದ ಪ್ರತಿ ಜಿಲ್ಲೆಯಲ್ಲೂ ವಿಶೇಷ ಕೋರ್ಟ್ ಸ್ಥಾಪನೆಗೆ ಸುಪ್ರೀಂ ಸೂಚನೆ
ನವದೆಹಲಿ, ಡಿ.4-ಹಾಲಿ ಮತ್ತು ಮಾಜಿ ಸಂಸದರು ಮತ್ತು ಶಾಸಕರ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ನಡೆಸಲು ಬಿಹಾರ ಮತ್ತು ಕೇರಳದ ಪ್ರತಿಯೊಂದು ಜಿಲ್ಲೆಗಳಲ್ಲೂ ವಿಶೇಷ ನ್ಯಾಯಾಲಯಗಳನ್ನು ರಚಿಸುವಂತೆ ಸುಪ್ರೀಂಕೋರ್ಟ್ ಇಂದು ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಕೆ.ಎಂ.ಜೋಸೆಫ್ ಅವರನ್ನು ಒಳಗೊಂಡ ಪೀಠವು ಡಿಸೆಂಬರ್ 14ರ ವೇಳೆಗೆ ಪಟ್ನಾ ಮತ್ತು ಕೇರಳ ಹೈಕೋರ್ಟ್ಗಳು ಈ ಕುರಿತು ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.
ಮಾಜಿ ಮತ್ತು ಹಾಲಿ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಸಂಬಂಧ ತ್ವರಿತ ವಿಚಾರಣೆಗಾಗಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಕುರಿತ ವಿಚಾರಣೆಯನ್ನು ಪೀಠವು ಇಂದು ಕೈಗೆತ್ತಿಕೊಂಡಿದೆ.
ಈ ಸಂಬಂಧ ಹಿರಿಯ ವಕೀಲ ಮತ್ತು ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸುಪ್ರೀಂಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು. ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿರುವ ರಾಜಕಾರಣಿಗಳು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಆಜೀವ ನಿಷೇಧ ಹೇರಬೇಕು ಹಾಗೂ ಚುನಾಯಿತ ಪ್ರತಿನಿಧಿಗಳ ವಿರುದ್ಧದ ಇಂಥ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕೆಂದು ಅವರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.