ಕರ್ನಾಟಕದಲ್ಲೂ ಹಕ್ಕಿ ಜ್ವರ..? ಮಾರ್ಗಸೂಚಿಯ ಸುಳಿವು ಕೊಟ್ಟ ಸಚಿವ ಸುಧಾಕರ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.5-ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರ ರಾಜ್ಯದಲ್ಲಿ ಹಬ್ಬದಂತೆ ಸರ್ಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಒಂದೆರಡು ದಿನಗಳಲ್ಲಿ ಮಾರ್ಗಸೂಚಿ ಹೊರಡಿಸಲಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ರಾಜ್ಯಗಳಲ್ಲಿ ಹಕ್ಕಿಜ್ವರ ಬಂದಿರುವುದು ಗಮನಕ್ಕೆ ಬಂದಿದೆ. ನಮ್ಮ ರಾಜ್ಯದಲ್ಲಿ ಇದು ಹಬ್ಬದಂತೆ ಯಾವ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಕುರಿತು ಈಗಾಗಲೇ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಜೊತೆ ಚರ್ಚೆ ನಡೆಸಲಾಗಿದೆ ಸದ್ಯದಲ್ಲೇ ಮಾರ್ಗಸೂಚಿಯನ್ನು ಪ್ರಕಟಿಸುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ಹಕ್ಕಿ ಜ್ವರ ಹರಡದಂತೆ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇಲಾಖೆ ಅಧಿಕಾರಿಗಳಿಗೂ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ಜಿಲ್ಲಾಧಿಕಾರಿಗಳು ಕೂಡ ಸರ್ವಸನ್ನದ್ದರಾಗಿರಬೇಕು, ಯಾವುದೇ ರೀತಿಯಲ್ಲಿ ಸಾರ್ವಜನಿಕರು ಆತಂಕಪಡಬಾರದು ಎಂದು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಈವರೆಗೂ ಒಂದೇ ಒಂದು ಹಕ್ಕಿಜ್ವರದ ಪ್ರಕರಣಗಳು ಪತ್ತೆಯಾಗಿಲ್ಲ ನಾನು ಇಲಾಖೆಯಿಂದ ಬಂದಿರುವ ಮಾಹಿತಿಯನ್ನು ಮಾಧ್ಯಮಗಳಿಗೆ ಹೇಳುತ್ತಿದ್ದೇನೆ. ರಾಜ್ಯದಲ್ಲಿ ಹಕ್ಕಿಜ್ವರ ಕಾಣಿಸದೇ ಇರುವಾಗ ಸಾರ್ವಜನಿಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದರು.  ರಾಜಧಾನಿ ಬೆಂಗಳೂರಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಬಿಬಿಎಂಪಿ ಆಯುಕ್ತರ ಬಳಿಯೂ ಚರ್ಚೆ ಮಾಡಿದ್ದೇನೆ. ಅವರು ಕೂಡ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ರಾಜ್ಯದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದರು.

ಇನ್ನು ಶಿಕ್ಷಕರಿಗೆ ಕೋವಿಡ್-19 ಕಾಣಿಸಿಕೊಂಡಿದ್ದರೂ ವಿದ್ಯಾರ್ಥಿಗಳು ಆತಂಕಪಡಬೇಕಾದ ಅಗತ್ಯವಿಲ್ಲ. ಪೋಷಕರು ಕೂಡ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯಬಾರದು. ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಅಭಯ ನೀಡಿದರು.  ಕೆಲವರಿಗೆ ಬ್ರಿಟನ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದರೂ ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಡಿಸಲಾಗಿದೆ. ಎಲ್ಲರೂ ಆರೋಗ್ಯದಿಂದಿದ್ದಾರೆ. ಯಾರಿಗೂ ಕೂಡ ತೀವ್ರತರವಾದ ಬಾಧೆ ಕಾಣಿಸಿಕೊಂಡಿಲ್ಲ. ವದಂತಿಗಳಿಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಕಿವಿಗೊಡಬಾರದೆಂದು ಮನವಿ ಮಾಡಿದರು.

ಬ್ರಿಟನ್‍ನಿಂದ ಬಂದ 75 ಮಂದಿ ಈವರೆಗೂ ಪತ್ತೆಯಾಗಿಲ್ಲ. ಅವರು ತಮ್ಮ ಮೊಬೈಲ್‍ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ರೀತಿ ವರ್ತನೆ ಮಾಡುವುದು ಸರಿಯಲ್ಲ. ಎಲ್ಲೇ ಇದ್ದರೂ ನೀವು ತಕ್ಷಣವೇ ಆಸ್ಪತ್ರೆಗೆ ದಾಖಲಾಗಿ ಎಂದು ಸುಧಾಕರ್ ಮನವಿ ಮಾಡಿದರು.

ಬ್ರಿಟನ್ ರೂಪಾಂತರಗೊಂಡ ಸೋಂಕು ಒಬ್ಬರಿಂದ ಒಬ್ಬರಿಗೆ ಬಹುಬೇಗನೇ ಹರಡುವ ಸಾಧ್ಯತೆಯಿದೆ. ಕೂಡಲೇ ನೀವು ಆಸ್ಪತ್ರೆಗೆ ದಾಖಲಾಗಬೇಕು. ಎಲ್ಲೇ ಇದ್ದರೂ ಬನ್ನಿ ಎಂದು ಪುನರುಚ್ಚರಿಸಿದರು. ಬ್ರಿಟನ್‍ನಿಂದ ಬಂದಿದ್ದ ಮತ್ತೊಬ್ಬರಿಗೆ ರೂಪಾಂತರಿ ವೈಸರ್ ತಗುಲಿರುವುದು ದೃಢಪಟ್ಟಿದೆ. ಈವರೆಗೂ ಒಟ್ಟು 7 ಮಂದಿಗೆ ಈ ಸೋಂಕು ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದರು.

ಇನ್ನು ಕೋವಿಡ್ ಲಸಿಕೆ ಬಗ್ಗೆ ಕೆಲವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಯಾವುದೇ ಲಸಿಕೆಯನ್ನು ನೀಡುವಾಗ ಅದನ್ನು ಪರೀಕ್ಷೆ ನಡೆಸೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಈಗ ಬಂದಿರುವ ಲಸಿಕೆ 100ಕ್ಕೆ ನೂರರಷ್ಟು ಪರಿಣಾಮಕಾರಿಯಾಗಿದೆ. ಈ ಬಗ್ಗೆ ಯಾರಿಗೂ ಆತಂಕಬೇಡ ಎಂದರು.

Facebook Comments