ಜೆಡಿಎಸ್-ಬಿಜೆಪಿ ನಡುವೆ ಮತ್ತೆ ಮೈತ್ರಿ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.1- ವಿಧಾನಸಭೆ ಉಪಚುನಾವಣೆಯಲ್ಲಿ ಹಿಂದೆಂದು ಕಾಣದ ರಾಜಕೀಯ ತಂತ್ರಗಾರಿಕೆಗಳು ನಡೆಯುತ್ತಿದ್ದು, ದಿನದಿನಕ್ಕೂ ಅಚ್ಚರಿಯ ಬೆಳವಣಿಗಳು ನಡೆಯುತ್ತಿವೆ. ಶಿರಾ ಮತ್ತು ರಾಜರಾಜೇಶ್ವರಿನಗರ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಹೊಂದಾಣಿಕೆ ರಾಜಕೀಯದ ಸುಳಿವು ಸಿಕ್ಕಿದೆ.

ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರ ಕಾಂಗ್ರೆಸ್‍ನ ಭದ್ರಕೋಟೆಯಾಗಿತ್ತು. ಮುನಿರತ್ನ ಪಕ್ಷ ತೊರೆದು ಬಿಜೆಪಿ ಸೇರಿದ ಬಳಿಕ ಕಾಂಗ್ರೆಸ್ ತಳಪಾಯವೇ ಅಲುಗಾಡಿದೆ. ಬಿಜೆಪಿಯಲ್ಲಿ ಮುನಿರತ್ನ ಅವರಿಗೆ ಟಿಕೆಟ್ ಕೊಡಲು ಸಿಎಂ ಯಡಿಯೂರಪ್ಪ ಗಟ್ಟಿ ನಿರ್ಧಾರ ಮಾಡಿದ್ದಾರೆ.

ಆದರೆ ಬಿಜೆಪಿ ವರಿಷ್ಠರು ಇತ್ತೀಚೆಗೆ ನಡೆದ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಯಡಿಯೂರಪ್ಪ ಶಿಫಾರಸ್ಸು ಮಾಡಿದ್ದವರನ್ನು ಪಕ್ಕಕ್ಕಿಟ್ಟು ಅಚ್ಚರಿಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು. ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಳೆದ ಬಾರಿ ಸ್ರ್ಪಸಿ ಸೋಲು ಕಂಡಿದ್ದ ತುಳಸಿಮುನಿರಾಜುಗೌಡ ಅವರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಡವೂ ಇದೆ.

ಬಿಜೆಪಿ ಬೆಳವಣಿಗೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಆ ಪಕ್ಷದಲ್ಲಿ ಟಿಕೆಟ್ ವಂಚಿತರನ್ನು ಸೆಳೆದು ಅಭ್ಯರ್ಥಿ ಮಾಡುವ ಚಿಂತನೆಯಲ್ಲಿದೆ. ಅದರೊಂದಿಗೆ ಗೋವಿಂದರಾಜನಗರ ಕ್ಷೇತ್ರದ ಮಾಜಿ ಶಾಸಕ ಪ್ರಿಯಕೃಷ್ಣ, ಮಾಗಡಿ ಕ್ಷೇತ್ರದ ಮಾಜಿ ಶಾಸಕ ಬಾಲಕೃಷ್ಣ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಈ ನಡುವೆ ಸ್ಟಾರ್‍ನಟರೊಬ್ಬರ ತಾಯಿಯನ್ನು ಅಭ್ಯರ್ಥಿ ಮಾಡುವ ಚರ್ಚೆಗಳು ಕೇಳಿ ಬಂದಿವೆ. ಕಾಂಗ್ರೆಸ್ ನಾಯಕರು ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಹೇಳುವ ಮೂಲಕ ಕುತೂಹಲ ಹುಟ್ಟಿ ಹಾಕಿದ್ದಾರೆ. ಕಾಂಗ್ರೆಸ್ ತನ್ನ ಕ್ಷೇತ್ರವನ್ನು ಉಳಿಸಿಕೊಳ್ಳಲು ತಂತ್ರಗಾರಿಕೆಯಲ್ಲಿ ತೊಡಗಿದ್ದರೆ, ಬಿಜೆಪಿ ಕಾಂಗ್ರೆಸ್‍ಗೆ ಟಕ್ಕರ್ ಕೊಡಲು ಜೆಡಿಎಸ್ ಜೊತೆ ಕೈಜೋಡಿಸಲು ತಯಾರಾಗಿದೆ.

ಜೆಡಿಎಸ್‍ಗೆ ತಮ್ಮದೇ ಪಕ್ಷದ ಶಾಸಕ ಬಿ.ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಶಿರಾ ಕ್ಷೇತ್ರವನ್ನು ಉಳಿಸಿಕೊಳ್ಳುವ ಧಾವಂತ. ಹಾಗಾಗಿ ರಾಜರಾಜೇಶ್ವರಿನಗರದಲ್ಲಿ ಬಿಜೆಪಿಗೆ ಪೂರಕವಾದ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಶಿರಾದಲ್ಲಿ ಜೆಡಿಎಸ್ ಗೆಲುವಿಗೆ ಅನುಕೂಲವಾಗುವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಷರತ್ತು ವಿಸಲು ಮುಂದಾಗಿದೆ ಎನ್ನಲಾಗಿದೆ.

ಜೆಡಿಎಸ್-ಕಾಂಗ್ರೆಸ್ ನಡುವಿನ ಸಂಬಂಧ ಹಳಸಿದ್ದು, ಎರಡೂ ಪಕ್ಷಗಳ ನಾಯಕರ ನಡುವೆ ಪ್ರತಿಷ್ಠೆಯ ಕಾದಾಟ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರ ನಡುವೆ ಉತ್ತಮ ಬಾಂಧವ್ಯವಿದೆ.

ಆದರೆ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಜೆಡಿಎಸ್ ಜೊತೆಗಿನ ಹೊಂದಾಣಿಕೆಯನ್ನು ಮೊದಲಿನಿಂದಲೂ ವಿರೋಸುತ್ತಲೆ ಬಂದಿದ್ದಾರೆ. ಉಪಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಇಲ್ಲ ಎಂದು ಸಿದ್ದರಾಮಯ್ಯ ಊರಿಗೆ ಮೊದಲೇ ಘೋಷಣೆ ಮಾಡಿದ್ದಾರೆ.

ಹೀಗಾಗಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ರಾಜಕೀಯಕ್ಕೆ ವೇದಿಕೆ ಸಿದ್ದವಾಗಿದೆ. ಈ ಎರಡು ಕ್ಷೇತ್ರಗಳ ಫಲಿತಾಂಶದಿಂದ ಸರ್ಕಾರದ ಅಸ್ತಿತ್ವಕ್ಕೇನು ಧಕ್ಕೆಯಾಗುವುದಿಲ್ಲ. ಆದರೆ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹಾಗಾಗಿ ತೆರೆಮರೆಯಲ್ಲಿ ಹೊಂದಾಣಿಕೆ ರಾಜಕೀಯದ ಚರ್ಚೆಗಳು ನಡೆಯುತ್ತಲಿವೆ.

Facebook Comments

Sri Raghav

Admin