ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿಗಳು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.16- ಉಪಚುನಾವಣೆಗೆ ಸ್ಪರ್ಧಿಸುವ ಬಿಜೆಪಿಯ ಅಭ್ಯರ್ಥಿಗಳು ಇಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.  ವಿಜಯನಗರದಲ್ಲಿರುವ ಆದಿಚುಂಚನಗಿರಿ ಪೀಠದ ಶಾಖಾಮಠಕ್ಕೆ ಯಶವಂತಪುರ ಹಾಗೂ ಕೆ.ಆರ್.ಪುರಂನ ಬಿಜೆಪಿ ಅಭ್ಯರ್ಥಿಗಳಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್ ಮತ್ತು ಮುನಿರತ್ನ ನಾಯ್ಡು ಅವರುಗಳು ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.

ಉಪಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಎಂದಿನಂತೆ ಈ ಬಾರಿಯೂ ಶ್ರೀಗಳಿಂದ ಆಶೀರ್ವಾದ ಪಡೆದರು.  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್, ನಾನು ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಳ್ಳುತ್ತಿದ್ದೆ.

ಸೋಮವಾರ ನನ್ನ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುತ್ತಿರುವ ಕಾರಣ ಪರಮಪೂಜ್ಯರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ ಎಂದರು. ನನ್ನ ಮತ್ತು ಚಿತ್ರನಟ ಜಗ್ಗೇಶ್ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಕ್ಷೇತ್ರದಲ್ಲಿ ಅವರು ನನಗೆ ಸಂಪೂರ್ಣವಾದ ಬೆಂಬಲ ಕೊಡಲಿದ್ದಾರೆ. ಯಾವುದೇ ಸಮಸ್ಯೆಗಳಿದ್ದರೂ ಮಾತುಕತೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನೆಡೆಯುತ್ತೇನೆ ಎಂದು ಹೇಳಿದರು.

ಕೆ.ಆರ್.ಪುರಂ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಮಾತನಾಡಿ, ಪ್ರತಿ ಚುನಾವಣೆಗೂ ಸ್ಪರ್ಧಿಸುವ ಮುನ್ನ ಆದಿಚುಂಚನಗಿರಿಗೆ ಭೇಟಿ ನೀಡುತ್ತೇನೆ. ಈ ಬಾರಿ ನನ್ನ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಎಂದಿನಂತೆ ಮಠಕ್ಕೆ ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ಗೆಲುವು ಶತಸಿದ್ದ ಎಂದು ಭರವಸೆ ವ್ಯಕ್ತಪಡಿಸಿದರು.

Facebook Comments